







ನೆಲ್ಯಾಡಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕಡಬ ತಾಲೂಕು ಇದರ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ಕಣ್ಣು ಪರೀಕ್ಷೆ ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಭಾಭವನದಲ್ಲಿ ನಡೆಯಿತು.


ಅಧ್ಯಕ್ಷತೆಯನ್ನು ಪ್ರಗತಿಬಂಧು ಸ್ವಸಹಾಯ ಸಹಾಯ ಸಂಘದ ಕೌಕ್ರಾಡಿ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ಗೌಡ ವಹಿಸಿದ್ದರು. ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶಿಶಿರ ಅವರು ಕಾರ್ಯಕ್ರಮ ಉದ್ಘಾಟಿಸಿ ಆಸ್ಪತ್ರೆಯಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಡಬ ತಾಲೂಕು ಯೋಜನಾಧಿಕಾರಿ ಪ್ರಕಾಶ್ಕುಮಾರ್ ಅವರು, ಜ್ಞಾನ ವಿಕಾಸ ಕಾರ್ಯಕ್ರಮದ ಮೂಲಕ ಆರೋಗ್ಯ ತಪಾಸಣೆ ನಡೆಸಲಾಗುತ್ತಿದ್ದು ಎಲ್ಲರೂ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿಕೊಂಡು ಯಾವುದೇ ಕಾಯಿಲೆ ಉಲ್ಬಣಗೊಳ್ಳುವ ಮೊದಲೇ ಪರೀಕ್ಷಿಸಿಕೊಂಡಲ್ಲಿ ಬರಬಹುದಾದ ಅನಾಹುತವನ್ನು ತಡೆಗಟ್ಟಬಹುದು ಎಂದರು. ಮಾದೇರಿ ಒಕ್ಕೂಟದ ಅಧ್ಯಕ್ಷ ಸೆಬಾಸ್ಟಿಯನ್ ಪಿ.ಜೆ.ಉಪಸ್ಥಿತರಿದ್ದರು.



ವಲಯ ಮೇಲ್ವಿಚಾರಕಿ ಜಯಶ್ರೀ ಪ್ರಾಸ್ತವಿಕವಾಗಿ ಮಾತನಾಡಿದರು. ಜ್ಞಾನ ವಿಕಾಸ ಸಮನ್ವಯಾಧಿಕಾರಿ ಚೇತನ, ಸೇವಾ ಪ್ರತಿನಿಧಿ ನಮಿತಾ ಕಾರ್ಯಕ್ರಮ ನಿರೂಪಿಸಿದರು. ಜ್ಞಾನವಿಕಾಸ ಸಂಯೋಜಕಿ ವಸಂತಿ ಸ್ವಾಗತಿಸಿದರು. ಆಶಾ ಕಾರ್ಯಕರ್ತೆ ಸುಮನ ವಂದಿಸಿದರು. ಆಸ್ಪತ್ರೆಯ ಸಿಬ್ಬಂದಿಗಳು, ಒಕ್ಕೂಟದ ಪದಾಧಿಕಾರಿಗಳು ಸಹಕರಿಸಿದರು. ಜ್ಞಾನವಿಕಾಸ ಕೇಂದ್ರದ ಸದಸ್ಯರು, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಸದಸ್ಯರು ಹಾಗೂ ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆದುಕೊಂಡರು. ಶಿಬಿರದಲ್ಲಿ 150ಕ್ಕೂ ಹೆಚ್ಚು ಮಂದಿ ಪಾಲ್ಗೊಂಡು ಬಿಪಿ, ಶುಗರ್, ರಕ್ತ ಪರೀಕ್ಷೆ ಮಾಡಿಸಿಕೊಂಡರು. ಕಣ್ಣಿನ ಪರೀಕ್ಷೆ ಮಾಡಿದ 50 ಮಂದಿ ಸದಸ್ಯರು ಉಚಿತ ಕನ್ನಡಕವನ್ನು ಪಡೆದುಕೊಂಡರು.










