ನಗರೋತ್ಥಾನ ಯೋಜನೆಯಡಿ ಸುಳ್ಯದ ವರ್ತುಲ ರಸ್ತೆ ಅಭಿವೃದ್ಧಿಗೆ 5 ಕೋಟಿ ಅನುದಾನಕ್ಕೆ ಮನವಿ

0

ಸುಳ್ಯ: ನಗರೋತ್ಥಾನ ಯೋಜನೆಯಡಿ ಸುಳ್ಯ ನಗರದ ವರ್ತುಲ ರಸ್ತೆಗಳ ಅಭಿವೃದ್ಧಿಗೆ 5 ಕೋಟಿ ರೂ. ವಿಶೇಷ ಅನುದಾನ ಮಂಜೂರು ಮಾಡುವಂತೆ ಸೂಡ ಅಧ್ಯಕ್ಷ ಕೆ.ಎಂ. ಮುಸ್ತಫ ಅವರು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮಾಡಿದ್ದಾರೆ.

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಫರೀದ್ ಅವರು ಇಂದು ಸುಳ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುಳ್ಯ ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರ (ಸೂಡ) ಅಧ್ಯಕ್ಷ ಕೆ.ಎಂ. ಮುಸ್ತಫ ಭೇಟಿ ಮಾಡಿ ಮನವಿ ಸಲ್ಲಿಸಿದರು.

ಸುಳ್ಯ ನಗರ ರಾಜ್ಯದಲ್ಲಿಯೇ ಶೈಕ್ಷಣಿಕ ನಗರಿ ಎಂದು ಗುರುತಿಸಲಾಗಿದ್ದು, ದೇಶ-ವಿದೇಶಗಳ ಸಾವಿರಾರು ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಸುಳ್ಯ ನಗರವು ಕೇರಳ ರಾಜ್ಯ, ಪ್ರವಾಸಿ ತಾಣವಾದ ಕೊಡಗು ಜಿಲ್ಲೆಗಳ ಗಡಿ ಪ್ರದೇಶವಾಗಿದ್ದು, ತೀವ್ರ ಟ್ರಾಫಿಕ್ ಸಮಸ್ಯೆ ಎದುರಾಗುತ್ತಿದ್ದು ಮುಂದಿನ ದಿನಗಳಲ್ಲಿ ಇದು ಬಿಗಡಾಯಿಸಲಿದೆ. ಇದಕ್ಕೆ ಪರಿಹಾರವಾಗಿ ರಾಜ್ಯ ಹೆದ್ದಾರಿಗಳನ್ನು, ಜಿಲ್ಲಾ ಮುಖ್ಯ ರಸ್ತೆಯನ್ನು ಸಂಪರ್ಕಿಸುವ ಮತ್ತು ನಗರ ವ್ಯಾಪ್ತಿಯಲ್ಲಿರುವ ಒಳರಸ್ತೆಗಳನ್ನು ರಿಂಗ್ (ವರ್ತುಲ) ರಸ್ತೆಗಳನ್ನಾಗಿ ಅಭಿವೃದ್ಧಿಪಡಿಸಬೇಕಾದ ಅವಶ್ಯಕತೆ ಇದೆ. ಅಲ್ಲದೆ ಕೆಲವು ವರ್ತುಲ ರಸ್ತೆಗಳನ್ನು ನಿರ್ಮಿಸಲು ಖಾಸಗಿ ವ್ಯಕ್ತಿಗಳು ಭೂಮಿ ಬಿಟ್ಟುಕೊಡಲು ತಯಾರಿದ್ದು, ಅದನ್ನು ಸದುಪಯೋಗಪಡಿಸಿಕೊಳ್ಳಬೇಕಾಗಿದೆ. ಇದನ್ನು ಅಭಿವೃದ್ಧಿಪಡಿಸಲು ಅನುದಾನದ ಅವಶ್ಯಕತೆಯಿದ್ದು, ನಗರೋತ್ಥಾನ ಯೋಜನೆಯಡಿ 5 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆಗೊಳಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷರುಗಳಾದ ಎಂ. ವೆಂಕಪ್ಪ ಗೌಡ, ಎಸ್. ಸಂಶುದ್ದೀನ್, ಶಾಫಿ ಕುತ್ತಮೊಟ್ಟೆ, ರಾಜು ಪಂಡಿತ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here