ಸುಳ್ಯಪದವು: ಭಾರೀ ಗಾಳಿ ಮಳೆಗೆ ವಾಸದ ಮನೆ ಕುಸಿತ – 3 ಲಕ್ಷ ರೂ. ನಷ್ಟ

0

ಬಡಗನ್ನೂರು: ಪಡುವನ್ನೂರು ಗ್ರಾಮದ ಸುಳ್ಯಪದವು ಶಬರಿನಗರದಲ್ಲಿ ಶನಿವಾರ ಸಂಭವಿಸಿದ ಸುಳಿಗಾಳಿ ಸಹಿತ ಮಳೆಗೆ ರವಿ ಮೂಲ್ಯ ಎಂಬುವವರ ವಾಸದ ಮನೆ ಸಂಪೂರ್ಣವಾಗಿ ಕುಸಿದು ಬಿದ್ದು ಹಾನಿಯಾಗಿರುವ ಘಟನೆ ಅ.11ರಂದು ವರದಿಯಾಗಿದೆ.

ಅದೃಷ್ಟವಶಾತ್ ಅವಘಡ ಸಂಭವಿಸಿದ ಸಮಯದಲ್ಲಿ ಮನೆಯಲ್ಲಿ ಯಾರೂ ಇರಲಿಲ್ಲವಾದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಮನೆಯ ಮೇಲ್ಛಾವಣಿ ಸಂಪೂರ್ಣವಾಗಿ ಕುಸಿದು ಬಿದ್ದಿರುವುದರಿಂದ ಮನೆಯಲ್ಲಿದ್ದ ವಸ್ತುಗಳು ಹಾನಿಗೊಳಗಾಗಿದ್ದು, ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ.

ಸುಮಾರು 3 ಲಕ್ಷ ರೂ. ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಬಡಗನ್ನೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರವಿರಾಜ್ ರೈ ಸಜಂಕಾಡಿ ಹಾಗೂ ಹ್ಯಾರಿಸ್ ಸುಳ್ಯಪದವು ಮತ್ತಿತರರು ಆಗಮಿಸಿ ಹಾನಿಗೊಳಗಾದ ಪ್ರದೇಶವನ್ನು ವೀಕ್ಷಿಸಿದರು. ಕಂದಾಯ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿ, ಕೂಡಲೇ ಸ್ಥಳ ಪರಿಶೀಲನೆ ನಡೆಸಿ ಸಂತ್ರಸ್ತ ಕುಟುಂಬಕ್ಕೆ ಸರ್ಕಾರದಿಂದ ಸಿಗಬೇಕಾದ ಎಲ್ಲ ರೀತಿಯ ಪರಿಹಾರಗಳನ್ನು ಶೀಘ್ರವಾಗಿ ಒದಗಿಸುವಂತೆ ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here