







ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದು, ಅ.23ರ ವರೆಗೆ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.


ಕರಾವಳಿ ಜಿಲ್ಲೆಗಳಲ್ಲಿ ಅ.20ರಿಂದ 22ರ ವರೆಗೆ ಯೆಲ್ಲೋ ಅಲರ್ಟ್, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅ.24ರ ವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.



ಬೆಂಗಳೂರು, ಮೈಸೂರು, ಕರಾವಳಿ ಸೇರಿದಂತೆ ವಿವಿಧ ಭಾಗಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಸಾಧಾರಣದಿಂದ ಭಾರಿ ಮಳೆ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಬಿರುಗಾಳಿ ಸಹಿತ ಸಾಧಾರಣ ಮಳೆ, ಬಾಗಲಕೋಟೆ ಮತ್ತು ಕೊಪ್ಪಳದಲ್ಲಿ ಹಗುರ ಮಳೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಮುಖ್ಯವಾಗಿ ಒಣ ಹವೆ ಮುಂದುವರಿಯಲಿದೆ.
ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು ಮತ್ತು ತುಮಕೂರಿನ ಒಂದೆರಡು ಕಡೆ ಭಾರಿ ಮಳೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳ ಬಹುತೇಕ ಕಡೆ ಬಿರುಗಾಳಿ ಸಹಿತ ಸಾಧಾರಣ ಮಳೆ ಸಾಧ್ಯತೆ ಇದೆ. ಈ ಭಾಗದಲ್ಲಿ ಅ.24ರವರೆಗೆ ಯೆಲ್ಲೋ ಅಲರ್ಟ್ ಜಾರಿಯಲ್ಲಿರಲಿದೆ.
ನಾಳೆಯ ಹವಾಮಾನ:
ನಾಳೆ (ಅ.20) ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಮಂಡ್ಯ, ಮೈಸೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ಇದ್ದು, ಸಾರ್ವಜನಿಕರು ಜಾಗರೂಕರಾಗಿರಲು ಸೂಚಿಸಲಾಗಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿಯಲ್ಲಿ ಹಗುರ ಮಳೆ ಸಾಧ್ಯತೆ ಇದೆ.










