







ಪ್ರಜಾಪ್ರಭುತ್ವದ ರಕ್ಷಣೆಗೆ ದೇಶಾದ್ಯಂತ ಹೋರಾಟ – ಮುಖಂಡರ ಎಚ್ಚರಿಕೆ


ಪುತ್ತೂರು: ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಸಂಯುಕ್ತ ರೈತ ಮೋರ್ಚಾ ದೇಶಾದ್ಯಂತ ಹಾಗೂ ಕರ್ನಾಟಕದಲ್ಲಿ ಪ್ರತಿಭಟನೆಗೆ ಕರೆ ನೀಡಿದ ಹಿನ್ನೆಲೆಯಲ್ಲಿ, ಪುತ್ತೂರಿನ ಗಾಂಧಿಕಟ್ಟೆ ಬಳಿ ಅ. 23ರಂದು ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಗಲ್ಲಿ ಗಲ್ಲಿಯಲ್ಲೂ ಜಂತರ್ಮಂತರ್ ಮಾದರಿ ಹೋರಾಟ
ಸಿಐಟಿಯು ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ, ವಕೀಲ ಬಿ.ಎಂ. ಭಟ್ ಮಾತನಾಡಿ, ದೇಶದಲ್ಲಿ ಪ್ರಜಾಪ್ರಭುತ್ವ ನಾಶವಾಗುತ್ತಿದ್ದು, ಅದರ ರಕ್ಷಣೆಗೆ ಹೋರಾಟ ಅನಿವಾರ್ಯವಾಗಿದೆ ಎಂದು ಹೇಳಿದರು. ಎಸ್ಐಆರ್ ಪ್ರಕ್ರಿಯೆಯಿಂದ ಮತದಾರರ ಹಕ್ಕುಗಳಿಗೆ ಧಕ್ಕೆಯಾಗುವ ಆತಂಕವಿದೆ. ತಾಯಿ-ಮಗನ ಸಂಬಂಧವನ್ನು ಸಾಬೀತುಪಡಿಸಲೂ ದಾಖಲೆ ಕೇಳುವಂತಹ ಪರಿಸ್ಥಿತಿಯನ್ನು ಕೇಂದ್ರ ಸರಕಾರ ಸೃಷ್ಟಿಸುತ್ತಿದೆ. ದೇಶದಲ್ಲಿ ಹುಟ್ಟಿ ಬೆಳೆದು ಬದುಕುತ್ತಿರುವ ಪ್ರಜೆಗಳನ್ನೇ ಮತದಾನದ ಹಕ್ಕಿನಿಂದ ವಂಚಿಸುವ ಪ್ರಯತ್ನ ನಡೆದರೆ, ಪ್ರಜಾಪ್ರಭುತ್ವದ ಅರ್ಥವೇನು ಎಂದು ಪ್ರಶ್ನಿಸಿದರು. ಎಸ್ಐಆರ್ ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ದೇಶಾದ್ಯಂತ ಹೋರಾಟ ನಡೆಯಲಿದೆ. ದೆಹಲಿಯಲ್ಲಿಯೂ ಬೃಹತ್ ಪ್ರತಿಭಟನೆಗಳು ನಡೆಯುತ್ತಿವೆ. ಚುನಾವಣಾ ಆಯೋಗದ ಮುಖ್ಯಸ್ಥ ಜ್ಞಾನೇಶ್ ಕುಮಾರ್ ಅವರನ್ನು ಅಮಾನತುಗೊಳಿಸಿ, ಎಸ್ಐಆರ್ ಪ್ರಕ್ರಿಯೆಯನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು. ಕೇಂದ್ರ ಸರಕಾರದ ನೀತಿಗಳನ್ನು ಟೀಕಿಸಿದ ಅವರು, ಜನರ ಪ್ರಜಾಪ್ರಭುತ್ವದ ಹಕ್ಕುಗಳನ್ನು ರಕ್ಷಿಸುವಂತೆ ಒತ್ತಾಯಿಸಿದರು.
ಬಿಜೆಪಿ ಸರಕಾವನ್ನು ಅಧಿಕಾರದಿಂದ ಕೆಳಗಿಳಿಸಬೇಕು:
ಕರ್ನಾಟಕ ರಾಜ್ಯ ರೈತ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ರೂಪೇಶ್ ರೈ ಅಲಿಮಾರು ಮಾತನಾಡಿ, ಎಸ್ಐಆರ್ ಪ್ರಕ್ರಿಯೆ ಅವ್ಯವಸ್ಥೆಯಿಂದ ಕೂಡಿದೆ ಎಂದು ಆರೋಪಿಸಿದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ದೇಶದ ವಿವಿಧ ವ್ಯವಸ್ಥೆಗಳು ಹದಗೆಡುತ್ತಿವೆ ಎಂದು ಟೀಕಿಸಿದ ಅವರು, ಮತದಾರರ ಹಕ್ಕುಗಳನ್ನು ರಕ್ಷಿಸಲು ಸೂಕ್ತ ವ್ಯವಸ್ಥೆ ರೂಪಿಸಬೇಕು ಎಂದು ಒತ್ತಾಯಿಸಿದರು. ನರೇಂದ್ರ ಮೋದಿ ಅವರನ್ನು ಅಧಿಕಾರಕ್ಕೆ ತಂದಿರುವುದು ಮತದಾರರೇ. ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಲು ಜನರು ಪ್ರಯತ್ನಿಸಲಿದ್ದಾರೆ ಎಂದು ಹೇಳಿದರು.
ಪುತ್ತೂರಿನಲ್ಲಿ ಸಾಂಕೇತಿಕ ಪ್ರತಿಭಟನೆ:
ಸಿಐಟಿಯು ತಾಲೂಕು ಕಾರ್ಯದರ್ಶಿ, ವಕೀಲ ಪಿ.ಕೆ. ಸತೀಶನ್ ಮಾತನಾಡಿ, ಮಾರ್ಕ್ಸ್ ವಾದಿ ಕಮ್ಯುನಿಸ್ಟ್ ಪಕ್ಷದ ನೇತೃತ್ವದಲ್ಲಿ ದೇಶಾದ್ಯಂತ ಹೋರಾಟ ನಡೆಯುತ್ತಿದ್ದು, ಅಖಿಲ ಭಾರತ ಕಿಸಾನ್ ಸಭಾ ಈ ಹೋರಾಟಕ್ಕೆ ಬೆಂಬಲ ನೀಡುತ್ತಿದೆ.ಅದರ ಭಾಗವಾಗಿ ಪುತ್ತೂರಿನಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಲಾಗಿದೆ ಎಂದರು. ಪ್ರತಿಭಟನೆಯಲ್ಲಿ ಶ್ಯಾಮರಾಜ್, ಪ್ರಶಾಂತ್ ರೈ, ಸಿಐಟಿಯು ಮುಖಂಡ ದಾಮೋದರ್ ಗೌಡ ಹಿರೇಬಂಡಾಡಿ, ಜನಾರ್ದನ ಗೌಡ ಹಾಗೂ ಗುಡ್ಡಪ್ಪ ಉಪಸ್ಥಿತರಿದ್ದರು.













