ʼಅವಹೇಳನಕಾರಿ ಹೇಳಿಕೆ ಪುತ್ತೂರಿನ ಜನತೆಗೆ ಮಾಡಿದ ಅವಮಾನʼ

0

ಮುಂದಿನ ಚುನಾವಣೆಯಲ್ಲಿ ಜನರೇ ತಕ್ಕ ಪಾಠ ಕಲಿಸಲಿದ್ದಾರೆ- ಪ್ರಸನ್ನ ಮಾರ್ತ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರವಾಗಿ ನಡೆದಿದೆಯೆನ್ನಲಾದ ಸ್ಟಿಂಗ್ ಆಪರೇಷನ್ ಕುರಿತು ತನಿಖೆ ನಡೆಸಬೇಕೆಂದು ಒತ್ತಾಯಿಸಿದ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಅವರ ವಿರುದ್ಧ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಅವಹೇಳನಕಾರಿ ಪದಗಳನ್ನು ಬಳಸಿರುವುದು ಖಂಡನೀಯ. ಜನಪ್ರತಿನಿಧಿಯಾಗಿ ಜವಾಬ್ದಾರಿಯಿಂದ ಮಾತನಾಡುವುದನ್ನು ಶಾಸಕರು ಅರಿತುಕೊಳ್ಳಬೇಕು ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತ ಎಚ್ಚರಿಕೆ ನೀಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಅವರು ಪುತ್ತೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರವಾಗಿ ಸ್ಟಿಂಗ್ ಆಪರೇಷನ್ ನಡೆದಿರುವ ಬಗ್ಗೆ ತನಿಖೆಯಾಗಬೇಕು ಎಂದು ಮಾಧ್ಯಮಗಳ ಮೂಲಕ ಒತ್ತಾಯಿಸಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಹಾಗೂ ಪುತ್ತೂರು ಟಿಕೆಟ್ ಹಂಚಿಕೆ ವಿಚಾರದಲ್ಲಿ ನಡೆದಿದೆಯೆನ್ನಲಾದ ಸ್ಟಿಂಗ್ ಆಪರೇಷನ್ ಕುರಿತು ತನಿಖೆ ನಡೆಸಬೇಕು ಎಂಬುದಷ್ಟೇ ಅವರ ಹೇಳಿಕೆಯ ಉದ್ದೇಶವಾಗಿತ್ತು. ಆದರೆ, ಈ ವಿಚಾರಕ್ಕೆ ಸಂಬಂಧಿಸಿ ತನಿಖೆಗೆ ಒತ್ತಾಯಿಸಿದ ಜಿಲ್ಲಾ ಬಿಜೆಪಿ ಅಧ್ಯಕ್ಷರ ವಿರುದ್ಧ ಶಾಸಕ ಅಶೋಕ್ ಕುಮಾರ್ ರೈ ಅವರು ಏಕವಚನದಲ್ಲಿ ಅವಹೇಳನಕಾರಿ ಪದಗಳನ್ನು ಬಳಸಿ ಪ್ರತಿಕ್ರಿಯಿಸಿರುವುದು ಪುತ್ತೂರು ಕ್ಷೇತ್ರದ ಜನತೆಗೆ ಮಾಡಿದ ಅವಮಾನವಾಗಿದೆ. ತಾವು ಈ ಪ್ರಕರಣದಲ್ಲಿ ಭಾಗಿಯಾಗಿಲ್ಲ ಎಂಬುದನ್ನು ಸಾಬೀತುಪಡಿಸುವ ಹೊಣೆಗಾರಿಕೆ ಶಾಸಕರ ಮೇಲಿದೆ. ಈ ಕುರಿತು ಸರಕಾರದ ಮೂಲಕ ಸೂಕ್ತ ತನಿಖೆಗೆ ಒತ್ತಾಯಿಸಿ ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕಿತ್ತು ಎಂದು ಪ್ರಸನ್ನ ಮಾರ್ತ ಅಭಿಪ್ರಾಯಪಟ್ಟಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ರಾಜಕೀಯ ಇತಿಹಾಸಕ್ಕೆ ಕಪ್ಪುಚುಕ್ಕೆ ತಂದಿದೆ ಎನ್ನಲಾದ ಈ ಪ್ರಕರಣದ ತನಿಖೆಗೆ ಸಹಕರಿಸುವ ಬದಲು, ತನಿಖೆಗೆ ಒತ್ತಾಯಿಸಿದವರ ವಿರುದ್ಧವೇ ಕೀಳುಮಟ್ಟದ ಹೇಳಿಕೆಗಳನ್ನು ನೀಡಿರುವುದು ಪುತ್ತೂರಿನ ದುರದೃಷ್ಟಕರ ಬೆಳವಣಿಗೆ. ಇದು ಕಾಂಗ್ರೆಸ್ ಪಕ್ಷದ ನೈತಿಕತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಟೀಕಿಸಿದ್ದಾರೆ.

ಪುತ್ತೂರಿನಲ್ಲಿ ಬಿಜೆಪಿ ದ್ವೇಷದ ರಾಜಕಾರಣ ಮಾಡುವುದಿಲ್ಲ
ಪುತ್ತೂರಿನಲ್ಲಿ ಬಿಜೆಪಿ ಯಾವತ್ತೂ ಪ್ರೀತಿ, ವಿಶ್ವಾಸ ಹಾಗೂ ಜನಸ್ನೇಹಿ ರಾಜಕಾರಣಕ್ಕೆ ಆದ್ಯತೆ ನೀಡುತ್ತದೆಯೇ ಹೊರತು ದ್ವೇಷದ ರಾಜಕಾರಣ ಮಾಡುವುದಿಲ್ಲ. ತಮ್ಮದೇ ಸರಕಾರದ ಸಚಿವರ ಹೇಳಿಕೆಗಳ ಆಧಾರದಲ್ಲಿ ಪ್ರತಿಕ್ರಿಯಿಸಿದ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರ ವಿರುದ್ಧವೇ ಅವಹೇಳನಕಾರಿ ಹೇಳಿಕೆಗಳನ್ನು ನೀಡಿರುವ ಶಾಸಕ ಅಶೋಕ್ ಕುಮಾರ್ ರೈ ಅವರ ನಡೆ ಖಂಡನೀಯವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ರಾಜಕೀಯ ಘನತೆಗೆ ಧಕ್ಕೆ ತಂದಿರುವ ಈ ಬೆಳವಣಿಗೆಯನ್ನು ಜನರು ಗಮನಿಸುತ್ತಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ, ಜಿಲ್ಲಾ ಕಾಂಗ್ರೆಸ್ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಮುಂದಿನ ಚುನಾವಣೆಯಲ್ಲಿ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತ ಎಚ್ಚರಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here