ಪುತ್ತೂರು: ಪುತ್ತೂರು ತಾಲೂಕಿನ 22 ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ 32 ಗ್ರಾಮದಲ್ಲಿ ಕನ್ನಡ ಸಾಹಿತ್ಯದ ಕಂಪನ್ನು ಪಸರಿಸುವ ಹಾಗೂ ಯುವ ಜನತೆಯನ್ನು ಸಾಹಿತ್ಯ ಕ್ಷೇತ್ರಕ್ಕೆ ಬರ ಮಾಡಿಕೊಳ್ಳುವ ನಿಟ್ಟಿನಲ್ಲಿ ‘ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ’ ಎಂಬ ಘೋಷವಾಕ್ಯದೊಂದಿಗೆ ನಿರಂತರ ಸಾಹಿತ್ಯ ಸಂಬಂಧಿತ ಕಾರ್ಯಕ್ರಮಗಳನ್ನು ನಡೆಸುವ ವಿನೂತನ ಯೋಜನೆ ಹಮ್ಮಿಕೊಳ್ಳಲಾಗಿದೆ.
ಪ್ರತಿ ತಿಂಗಳು ಒಂದು ಗ್ರಾಮದಲ್ಲಿ ಕವಿಗೋಷ್ಠಿ ಹಾಗೂ ಸಾಹಿತ್ಯ ಸಂಬಂಧಿತ ಕಾರ್ಯಕ್ರಮ ನಡೆಸುವುದು, ಸ್ಥಳೀಯ ಸಾಹಿತಿಗಳ ಮಾಹಿತಿ ಸಂಗ್ರಹಿಸುವುದು, ಕನ್ನಡ ಸಾಹಿತ್ಯ ಪರಿಷತ್ತು ಸದಸ್ಯತ್ವದ ಅಭಿಯಾನ ನಡೆಸುವುದು, ಸ್ಥಳೀಯ ಪ್ರತಿಭೆಗಳಿಗೆ ಕಲಾ ಪ್ರದರ್ಶನಕ್ಕೆ ವೇದಿಕೆ ಕಲ್ಪಿಸುವುದು, ಸ್ಥಳೀಯ ಹಿರಿಯ ಸಾಹಿತಿಗಳನ್ನು ಗುರುತಿಸಿ ಗೌರವಿಸುವುದು, ನೂತನ ಕೃತಿಗಳ ಬಿಡುಗಡೆಗೆ ಅವಕಾಶ ಕಲ್ಪಿಸುವುದು, ಸ್ಥಳೀಯ ಶಾಲಾ-ಕಾಲೇಜು, ಸಭಾಂಗಣದಲ್ಲಿ ಕಾರ್ಯಕ್ರಮ ನಡೆಸುವುದು ಮುಂತಾದ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದ್ದು ಪುತ್ತೂರು ತಾಲೂಕಿನಲ್ಲಿರುವ ಪ್ರತಿಯೊಂದು ಗ್ರಾಮದಲ್ಲಿ ಈ ಕಾರ್ಯಕ್ರಮವನ್ನು ಸಂಯೋಜನೆ ಮಾಡಲು ಸಿದ್ಧತೆ ಮಾಡಲಾಗಿದೆ. ಆದ್ದರಿಂದ ಪುತ್ತೂರು ತಾಲೂಕಿನಲ್ಲಿರುವ ಆಸಕ್ತ ಸಾಹಿತ್ಯ ಬಳಗ ಅಥವಾ ಆಸಕ್ತ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾದವರಿಗೆ ಸಾಹಿತ್ಯ ಪರಿಷತ್ ವತಿಯಿಂದ ಅಧಿಕೃತ ನೇಮಕಾತಿ ಪತ್ರ ನೀಡಲಾಗುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 27-10-2022 ಆಗಿರುತ್ತದೆ. ಹೆಚ್ಚಿನ ಮಾಹಿತಿಗೆ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಅವರ ದೂರವಾಣಿ ಸಂಖ್ಯೆ 9844401295 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.