ಪುತ್ತೂರು: ತಲಾ ರೂ.10 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿ ಗೊಳ್ಳುತ್ತಿರುವ ಬೆಟ್ಟಂಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ತಲೆಪ್ಪಾಡಿ-ಗುತ್ತು-ಮೂರ್ಕಾಜೆ-ಪಾರ ರಸ್ತೆ ಮತ್ತು ಬೆದ್ರಾಡಿ-ಪೊಯ್ಯೆ ರಸ್ತೆ ಕಾಂಕ್ರಿಟೀಕರಣ ಕಾಮಗಾರಿಗೆ ಶಿಲಾನ್ಯಾಸ ನಡೆಯಿತು. ಬೆಟ್ಟಂಪಾಡಿ ಗ್ರಾಮ ಪಂಚಾಯತ್‌ನ ಸಂಜೀವಿನಿ ಕಟ್ಟಡ ಹಾಗೂ ರಾಜೀವ್ ಗಾಂಧಿ ಸೇವಾ ಕೇಂದ್ರ ಕಟ್ಟಡದ ಶಂಕುಸ್ಥಾಪನೆ ಹಾಗೂ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಆಗಮಿಸಿದ ಸಂದರ್ಭದಲ್ಲಿ ಶಾಸಕ ಸಂಜೀವ ಮಠಂದೂರು ಶಿಲಾನ್ಯಾಸ ನೆರವೇರಿಸಿದರು.
ಬಳಿಕ ಮಾತನಾಡಿದ ಶಾಸಕರು ರಸ್ತೆ ಕಾಮಗಾರಿ ಸಂದರ್ಭದಲ್ಲಿ ಗ್ರಾಮಸ್ಥರು ಸಹಕರಿಸಬೇಕು. ಕಾಮಗಾರಿ ನಡೆಯುವ ಸಂದರ್ಭದಲ್ಲಿ ಪರಿಶೀಲನೆ ನಡೆಸಬೇಕು ಎಂದು ಹೇಳಿ ಹಂತ ಹಂತವಾಗಿ ಎಲ್ಲಾ ಗ್ರಾಮೀಣ ರಸ್ತೆಗಳ ಅಭಿವೃದ್ಧಿ ನಡೆಸಲಾಗುವುದು ಎಂದು ಹೇಳಿದರು.
ಬೆಟ್ಟಂಪಾಡಿ ಬೂತ್ ಸಮಿತಿ ಅಧ್ಯಕ್ಷ ಶಿವಕುಮಾರ್ ಬಲ್ಲಾಳ್ ತೆಂಗಿನ ಕಾಯಿ ಒಡೆದು ಚಾಲನೆ ನೀಡಿದರು. ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪವಿತ್ರ ದೆಯ್ಯಾರಡ್ಕ, ಪುತ್ತೂರು ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಮಾಜಿ ಸದಸ್ಯೆ ಮೀನಾಕ್ಷಿ ಮಂಜುನಾಥ್, ಬೆಟ್ಟಂಪಾಡಿ ಶಕ್ತಿ ಕೇಂದ್ರದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಕೊಮ್ಮಂಡ, ಗ್ರಾ.ಪಂ.ಸದಸ್ಯರಾದ ಪ್ರಕಾಶ್ ರೈ ಬೈಲಾಡಿ, ಉಮಾವತಿ ಸುಬ್ಬಪ್ಪ ಮಣಿಯಾಣಿ, ವಿದ್ಯಾಶ್ರೀ ಸರಳಿಕಾನ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು. ಬೆಟ್ಟಂಪಾಡಿ ಗ್ರಾ.ಪಂ. ಉಪಾಧ್ಯಕ್ಷ ವಿನೋದ್ ಕುಮಾರ್ ರೈ ಗುತ್ತು ಸ್ವಾಗತಿಸಿ ಮಾಜಿ ಸದಸ್ಯ ಬಾಳಪ್ಪ ವಂದಿಸಿದರು.