ತಾ.ಪಂ., ಜಿ.ಪಂ. ಕ್ಷೇತ್ರಗಳ ಪುನರ್‌ವಿಂಗಡಣೆ ವರದಿಗೆ ಸಿಎಂ ಅನುಮೋದನೆ-ಗಜೆಟ್ ಅಧಿಸೂಚನೆ ಪ್ರಕಟ ; ಹೈಕೋರ್ಟ್‌ಗೆ ಸರಕಾರದಿಂದ ಮಾಹಿತಿ

0

ಬೆಂಗಳೂರು: ‘ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಪುನರ್ ವಿಂಗಡಣೆಗೆ ಸಂಬಂಧಿಸಿದಂತೆ ರಾಜ್ಯ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಸಲ್ಲಿಸಿರುವ ವರದಿಗೆ ಮುಖ್ಯಮಂತ್ರಿ ಅನುಮೋದನೆ ನೀಡಿದ್ದು, ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದೆ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.
ಈ ಕುರಿತಂತೆ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ನ್ಯಾಯಪೀಠಕ್ಕೆ ಅನುಪಾಲನಾ ವರದಿ ಸಲ್ಲಿಸಿದರು. 2022ರ ಡಿಸೆಂಬರ್ 14ರಂದು ಹೈಕೋರ್ಟ್ ಹೊರಡಿಸಿದ ಆದೇಶವನ್ನು ಪಾಲಿಸಲಾಗಿದ್ದು, ಅದರ ಅನುಸಾರ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದೆ ಎಂದರು.

ದಂಡ ಪಾವತಿಸಲಾಗಿದೆ: ‘ಚುನಾವಣೆಗೆ ವಿಳಂಬ ನೀತಿ ಅನುಸರಿಸಲಾಗುತ್ತಿದೆ ಎಂದು ಹೈಕೋರ್ಟ್ ವಿಧಿಸಿದ್ದ ರೂ.5 ಲಕ್ಷ ದಂಡದಲ್ಲಿ ತಲಾ ರೂ.2 ಲಕ್ಷ ಮೊತ್ತವನ್ನು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಬೆಂಗಳೂರು ವಕೀಲರ ಸಂಘಕ್ಕೆ ಪಾವತಿಸಲಾಗಿದೆ. ರೂ.1 ಲಕ್ಷ ಮೊತ್ತವನ್ನು ರಾಜ್ಯ ವಕೀಲರ ಗುಮಾಸ್ತರ ಕ್ಷೇಮಾಭಿವೃದ್ಧಿ ಸಂಘಕ್ಕೆ ಪಾವತಿಸಲಾಗಿದೆ ಎಂದು ಪಾವತಿ ರಸೀದಿಗಳನ್ನುನ್ಯಾಯಪೀಠಕ್ಕೆ ಸಲ್ಲಿಸಿದರು. ಸರ್ಕಾರದ ಪರ ಹಾಗೂ ರಾಜ್ಯ ಚುನಾವಣಾ ಆಯೋಗದ ಪರ ವಕೀಲರ ಕೋರಿಕೆಯಂತೆ ವಿಚಾರಣೆಯನ್ನು ಮುಂದೂಡಲಾಗಿತ್ತು.

10 ದಿನಗಳೊಳಗೆ ಕ್ಷೇತ್ರ ಪುನರ್‌ವಿಂಗಡಣೆ ಅಧಿಸೂಚನೆಗೆ ಗಡುವು ನೀಡಿದ್ದ ಹೈಕೋರ್ಟ್: ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ಫೆ.14ರಿಂದ ಹತ್ತು ದಿನಗಳಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಅಧಿಸೂಚನೆ ಪ್ರಕಟಿಸಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಫೆ.14ರಂದು ಗಡುವು ನೀಡಿತ್ತು.

ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ವಾಪಸ್ ಪಡೆದು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚಿಸಲು ‘ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್ ಕಾಯಿದೆ’ಗೆ ತಿದ್ದುಪಡಿ ತಂದಿರುವುದನ್ನು ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್.ಕಿಣಗಿ ಅವರ ನೇತೃತ್ವದ ವಿಭಾಗೀಯ ಪೀಠವು ನಡೆಸಿತ್ತು.

ಅಡ್ವೊಕೇಟ್ ಜನರಲ್ ಅವರ ಹೇಳಿಕೆಯನ್ನು ಪರಿಗಣಿಸಿ, ಕ್ಷೇತ್ರ ಪುನರ್‌ವಿಂಗಡಣೆ ಅಧಿಸೂಚನೆ ಪ್ರಕಟಿಸಲು ರಾಜ್ಯ ಸರ್ಕಾರಕ್ಕೆ ಹತ್ತು ದಿನಗಳ ಕಾಲಾವಕಾಶ ನೀಡಲಾಗಿದೆ. ಅಧಿಸೂಚನೆ ಪ್ರಕಟಿಸಿದ ಬಳಿಕ, ವರದಿಯನ್ನು ಮುಂದಿನ ಕ್ರಮಕೈಗೊಳ್ಳಲು ರಾಜ್ಯ ಚುನಾವಣಾ ಆಯೋಗಕ್ಕೂ ಸಲ್ಲಿಸಲಾಗುವುದು ಎಂದು ಅಡ್ವೊಕೇಟ್ ಜನರಲ್ ತಿಳಿಸಿದ್ದಾರೆ. ಆನಂತರ, ಅಂತಿಮ ಅಧಿಸೂಚನೆಯ ಬಳಿಕ ಮೀಸಲಾತಿ ಅಧಿಸೂಚನೆಯನ್ನು ಸರ್ಕಾರ ಪ್ರಕಟಿಸಲಿದೆ. ಇದನ್ನೂ ಮುಂದಿನ ಕ್ರಮಕ್ಕಾಗಿ ಚುನಾವಣಾ ಆಯೋಗಕ್ಕೆ ರಾಜ್ಯ ಸರ್ಕಾರ ಸಲ್ಲಿಸಬೇಕು. ಈ ಆದೇಶ ಅನುಪಾಲನೆಗಾಗಿ ಎರಡು ವಾರಗಳ ಬಳಿಕ ಮತ್ತೆ ಪ್ರಕರಣದ ವಿಚಾರಣೆ ನಡೆಸಲಾಗುವುದು ಎಂದು ಪೀಠ ಆದೇಶದಲ್ಲಿ ತಿಳಿಸಿತ್ತು.

ರಾಜ್ಯದ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಸುವ ನಿಟ್ಟಿನಲ್ಲಿ ಕ್ಷೇತ್ರಗಳ ಪುನರ್ ವಿಂಗಡಣೆ ಮತ್ತು ಹಿಂದುಳಿದ ವರ್ಗಗಳೂ ಸೇರಿದಂತೆ ಇತರೆ ಸಮುದಾಯಗಳಿಗೆ ಕಾಲಮಿತಿಯಲ್ಲಿ ಮೀಸಲಾತಿ ನಿಗದಿಪಡಿಸಲು ವಿಫಲವಾಗಿರುವ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ರೂ.5 ಲಕ್ಷ ದಂಡ ವಿಧಿಸಿತ್ತು. 2022ರ ಡಿಸೆಂಬರ್ 14ರ ಆದೇಶಕ್ಕೆ ಅನುಗುಣವಾಗಿ ರೂ. ಐದು ಲಕ್ಷ ದಂಡ ಪಾವತಿಸಲು ಸರ್ಕಾರ ಒಪ್ಪಿದ್ದು, ಒಂದು ವಾರದಲ್ಲಿ ಪಾವತಿಸುವುದಾಗಿ ತಿಳಿಸಿದೆ ಎಂದು ಪೀಠವು ಆದೇಶದಲ್ಲಿ ತಿಳಿಸಿತ್ತು. 2023ರ ಜನವರಿ 28ರ ಒಳಗೆ ಐದು ಲಕ್ಷ ರೂಪಾಯಿ ದಂಡದ ಮೊತ್ತವನ್ನು ಪಾವತಿಸುವುದನ್ನು ಆಧರಿಸಿ ರಾಜ್ಯ ಸರ್ಕಾರದ ಕಾಲಾವಕಾಶ ವಿಸ್ತರಣೆ ಮನವಿಯನ್ನು ಪರಿಗಣಿಸಲಾಗಿದೆ. ಈ ಪೈಕಿ ತಲಾ ಎರಡು ಲಕ್ಷ ರೂಪಾಯಿಗಳನ್ನು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಬೆಂಗಳೂರು ವಕೀಲರ ಸಂಘ ಹಾಗೂ ಒಂದು ಲಕ್ಷ ರೂಪಾಯಿಯನ್ನು ವಕೀಲರ ಗುಮಾಸ್ತರ ಕಲ್ಯಾಣ ನಿಧಿಯಲ್ಲಿ ಠೇವಣಿ ಇಡಬೇಕು ಎಂದು ಆದೇಶಿಸಿತ್ತು.

ಚುನಾವಣೆ ವಿಳಂಬಕ್ಕೆ ಅಸಮಾಧಾನ ರೂ.5 ಲಕ್ಷ ದಂಡ ವಿಧಿಸಿದ್ದ ಹೈಕೋರ್ಟ್: ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸಲು ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ರೂ.5 ಲಕ್ಷ ದಂಡ ವಿಧಿಸಿತ್ತು.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ಅಧಿನಿಯಮ ರದ್ದುಪಡಿಸಬೇಕು ಹಾಗೂ ಕ್ಷೇತ್ರ ಪುನರ್‌ವಿಂಗಡಣೆ ಪಟ್ಟಿ ನೀಡಲು ನಿರ್ದೇಶಿಸಬೇಕು ಎಂದು ಕೋರಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಹಾಗೂ ನ್ಯಾಯಮೂರ್ತಿ ಆಶೋಕ್ ಎಸ್.ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠ ದಶಂಬರ್ 14ರಂದು ವಿಚಾರಣೆ ನಡೆಸಿತ್ತು. ಸೀಮಾ ನಿರ್ಣಯ ಆಯೋಗ ಪರ ಹಾಜರಾಗಿದ್ದ ಹಿರಿಯ ವಕೀಲರು, ಕ್ಷೇತ್ರ ಪುನರ್ ವಿಂಗಡಣೆಗೆ ಇನ್ನೂ 90 ದಿನಗಳ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು.ಆದರೆ ಇದನ್ನು ಒಪ್ಪದ ನ್ಯಾಯಪೀಠ, ಪದೇ ಪದೇ ಕಾಲಾವಕಾಶ ಕೇಳುತ್ತಿರುವ ನಿಮ್ಮ ಹಾಗೂ ಸರ್ಕಾರದ ನಡೆ ಸರಿಯಲ್ಲ. ಇದು ಬಸವನಹುಳು ರೀತಿಯ ನಿಧಾನ ಗತಿಯಾಗಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು.
ಹೈಕೋರ್ಟ್ ಈ ವಿಷಯದಲ್ಲಿ ಈಗಾಗಲೇ ಆರು ತಿಂಗಳ ಸುದೀರ್ಘ ಕಾಲಾವಕಾಶ ನೀಡಿದ್ದರೂ ಈ ಪ್ರಕ್ರಿಯೆಯಲ್ಲಿ ಒಂದಿಂಚೂ ಪ್ರಗತಿಯಾಗಿಲ್ಲ.ಇದು ಕೋರ್ಟ್ ಆದೇಶಗಳನ್ನು ನಿಷ್ಕ್ರಿಯಗೊಳಿಸುವ ಧೋರಣೆಯಿಂದ ಕೂಡಿದ ವರ್ತನೆ ಎಂದು ನ್ಯಾಯಪೀಠ ಬೇಸರ ವ್ಯಕ್ತಪಡಿಸಿತ್ತಲ್ಲದೆ, 2023ರ ಫೆಬ್ರವರಿ 1ರೊಳಗೆ ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಕ್ಷೇತ್ರ ಪುನರ್‌ವಿಂಗಡಣೆ ಹಾಗೂ ಮೀಸಲಾತಿ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಗಡುವು ನೀಡಿ ವಿಚಾರಣೆಯನ್ನು ಫೆಬ್ರವರಿ 2ಕ್ಕೆ ಮುಂದೂಡಿತ್ತು.

LEAVE A REPLY

Please enter your comment!
Please enter your name here