ಬೆಂಗಳೂರು : ದೇಶಾದ್ಯಂತ ಸಂಚಲನ ಉಂಟು ಮಾಡಿದ್ದ ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಮತ್ತೊಬ್ಬ ಆರೋಪಿಯನ್ನು ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ಬಂಧಿಸಿದ್ದಾರೆ.
ತೌಫೀಲ್ ಬಂಧಿತ ಆರೋಪಿ. ಎನ್‌ಐಎ ಅಧಿಕಾರಿಗಳು ಶನಿವಾರ ರಾತ್ರಿ 9.30ಕ್ಕೆ ಅಮೃತಹಳ್ಳಿ ಠಾಣೆ ವ್ಯಾಪ್ತಿಯ ದಾಸರಹಳ್ಳಿಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಎನ್‌ಐಎ ಅಧಿಕಾರಿಗಳು ಆರೋಪಿ ಪತ್ತೆಗೆ 5 ಲಕ್ಷ ಹಣ ಬಹುಮಾನ ಘೋಷಣೆ ಮಾಡಿದ್ದರು.
ಪ್ರವೀಣ್ ನೆಟ್ಟಾರು ಅವರನ್ನು ಜುಲೈ 26ರಂದು ಅವರ ಕೋಳಿ ಅಂಗಡಿ ಬಳಿ ಹಂತಕರು ಬರ್ಬರವಾಗಿ ಕೊಲೆ ಮಾಡಿದ್ದರು.
ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಒಟ್ಟು 20 ಆರೋಪಿಗಳ ವಿರುದ್ಧ ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. 240 ಸಾಕ್ಷಿಗಳ ಹೇಳಿಕೆಗಳು ಒಳಗೊಂಡಿರುವ ಒಟ್ಟು 1,500 ಪುಟಗಳ ಚಾರ್ಜ್ ಶೀಟ್ ಅನ್ನು NIA ಅಧಿಕಾರಿಗಳು ಕೋರ್ಟ್‌ಗೆ ಸಲ್ಲಿಸಿದ್ದಾರೆ. ಕೊಲೆ ಪ್ರಕರಣ ಸಂಬಂಧ ಈವರೆಗೆ 14 ಆರೋಪಿಗಳನ್ನು ಬಂಧಿಸಿಲಾಗಿದ್ದು, 6 ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಈ ಬಗ್ಗೆ ರಾಷ್ಟ್ರೀಯ ತನಿಖಾ ದಳದಿಂದ ಅಧಿಕೃತ ಮಾಹಿತಿ ಲಭ್ಯವಾಗಿದೆ.