ಪುತ್ತೂರು: ಮುಂದಿನ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದ ಸಾಧನೆಗಳ ಬಗ್ಗೆ ಜನತೆಗೆ ಅರಿವು ಮೂಡಿಸಲು ‘ವಿಜಯ ಸಂಕಲ್ಪ ಯಾತ್ರೆ ದ.ಕ.ಜಿಲ್ಲೆಯಲ್ಲಿ ಸಂಚರಿಸಲಿದ್ದು, ಪುತ್ತೂರಿನಲ್ಲಿ ಮಾ.11ರಂದು ಸಂಜೆ ಗಂಟೆ 5.30 ಕ್ಕೆ ವಿಜಯ ಸಂಕಲ್ಪ ಸಮಾವೇಶ ನಡೆಯಲಿದೆ ಎಂದು ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಸಿಎಂ ಬಸವರಾಜ ಬೊಮ್ಮಾಯಿ ಮಾರ್ಗದರ್ಶನದಲ್ಲಿ ವಿಜಯ ಸಂಕಲ್ಪ ಯಾತ್ರೆ ಹಾಗೂ ಪ್ರಗತಿ ಯಾತ್ರೆಗೆ ಈಗಾಗಲೇ ಚಾಲನೆ ನೀಡಲಾಗಿದೆ. ನಾಯಕರಾದ ಈಶ್ವರಪ್ಪ, ಅಶೋಕ್, ಪ್ರಹ್ಲಾದ್ ಜೋಶಿ, ಜಗದೀಶ್ ಶೆಟ್ಟರ್, ಡಾ.ಅಶ್ವತ್ಥನಾರಾಯಣ್ ನೇತೃತ್ವದಲ್ಲಿ ನಾಲ್ಕು ವಿಭಾಗದಲ್ಲಿ ಸಂಚರಿಸಲಿರುವ ಈ ಯಾತ್ರೆಯುದ್ದಕ್ಕೂ ರೋಡ್‌ಶೋ ಹಾಗೂ ಸಾರ್ವಜನಿಕ ಸಮಾವೇಶ, ಧಾರ್ಮಿಕ ಸ್ಥಳಗಳ ಭೇಟಿ ನೀಡಲಿದ್ದು ಪುತ್ತೂರಿನಲ್ಲಿ ವಿಜಯ ಸಂಕಲ್ಪ ಸಮಾವೇಶವು ಮಾ.11ರಂದು ಶ್ರೀ ಲಕ್ಷ್ಮೀ ವೆಂಕಟ್ರಮಣ ದೇವಸ್ಥಾನದ ಬಳಿಯಲ್ಲಿ ನಡೆಯಲಿದೆ. ಪುತ್ತೂರಿನ ಸಮಾವೇಶದಲ್ಲಿ ಅಣ್ಣಾಮಲೈ ಭಾಗವಹಿಸುವ ನಿರೀಕ್ಷೆ ಇದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ನಗರ ಮಂಡಲದ ಪ್ರಧಾನ ಕಾರ್ಯದರ್ಶಿ ಜಯಶ್ರೀ ಎಸ್ ಶೆಟ್ಟಿ, ವಿಜಯ ಸಂಕಲ್ಪ ಸಮಾವೇಶದ ಸಂಚಾಲಕ ಸುನಿಲ್ ದಡ್ಡು, ಸಹ ಸಂಚಾಲಕರಾದ ಯತೀನ್ ಕೊಚ್ಚಿ, ಶಿವಪ್ರಸಾದ್, ಬಿಜೆಪಿ ವಿಭಾಗ ಸಹಸಂಚಾಲಕ ಗೋಪಾಲಕೃಷ್ಣ ಹೇರಳೆ, ಜಿಲ್ಲಾ ಸಮಿತಿ ಸದಸ್ಯ ಚಂದ್ರಶೇಖರ್ ರಾವ್ ಬಪ್ಪಳಿಗೆ, ಮಾಜಿ ಪುರಸಭಾ ಅಧ್ಯಕ್ಷ ರಾಜೇಶ್ ಬನ್ನೂರು ಉಪಸ್ಥಿತರಿದ್ದರು.