ಪುತ್ತೂರು: 2022-23ನೇ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಗಳು ಮಾ.೩೧ರಂದು ಪ್ರಾರಂಭಗೊಂಡಿದ್ದು ಪ್ರಥಮ ದಿನದ ಪ್ರಥಮ ಭಾಷೆ ವಿಷಯಕ್ಕೆ ತಾಲೂಕಿನಲ್ಲಿ ಒಟ್ಟು 69 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಪುತ್ತೂರು, ಕಡಬ ತಾಲೂಕಲ್ಲಿ ಖಾಸಗಿ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 4883 ವಿದ್ಯಾರ್ಥಿಗಳ ಪೈಕಿ 4814 ವಿದ್ಯಾರ್ಥಿಗಳು ಹಾಜರಾಗಿದ್ದು 69 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಪುತ್ತೂರು ಹಾಗೂ ಕಡಬದಲ್ಲಿ ಒಟ್ಟು 15 ಕೇಂದ್ರಗಳಲ್ಲಿ ಒಟ್ಟು 220 ಕೊಠಡಿಗಳಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯುತ್ತಿದೆ. ಪ್ರತಿ ಕೊಠಡಿಗಳಲ್ಲಿ 12 ಡೆಸ್ಕ್ಗಳನ್ನು ಅಳವಡಿಸಲಾಗಿದೆ. ಒಂದು ಡೆಸ್ಕ್ನಲ್ಲಿ ಇಬ್ಬರು ವಿದ್ಯಾರ್ಥಿಗಳಂತೆ ಪ್ರತಿ ಕೊಠಡಿಗಳಲ್ಲಿ 24 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ವಿಶೇಷಚೇತನ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ಹಾಗೂ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.
ನೆಹರುನಗರ ಸುದಾನ ವಸತಿಯುತ ಶಾಲೆ ಹಾಗೂ ಕಡಬ ಕ್ನಾನಾಯಜ್ಯೋತಿ ಆಂಗ್ಲ ಮಾಧ್ಯಮ ಶಾಲಾ ಕೇಂದ್ರದಲ್ಲಿ ಶೇ.100 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಉಳಿದಂತೆ ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ-4, ದರ್ಬೆ ಸಂತ ಫಿಲೋಮಿನಾ ಪ್ರೌಢಶಾಲೆಯಲ್ಲಿ-5, ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆ-2, ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ-5, ಕಡಬ ಸರಕಾರಿ ಪದವಿ ಪೂರ್ವ ಕಾಲೇಜು-4, ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜು-2, ಉಪ್ಪಿನಂಗಡಿ ಸಂತ ಮೇರೀಸ್ ಪ್ರೌಢಶಾಲೆ-3, ಕುಂಬ್ರ ಕರ್ನಾಟಕ ಪಬ್ಲಿಕ್ ಸ್ಕೂಲ್-2, ಸವಣೂರು ವಿದ್ಯಾರಶ್ಮಿ ಪ್ರೌಢಶಾಲೆ-1, ನೆಲ್ಯಾಡಿ ಸೈಂಟ್ ಜಾರ್ಜ್ ಪದವಿ ಪೂರ್ವ ಕಾಲೇಜು-4, ಈಶ್ವರಮಂಗಲ ಗಜಾನನ ಆಂಗ್ಲ ಮಾಧ್ಯಮ ಶಾಲೆ-1, ರಾಮಕುಂಜ ರಾಮಕುಂಜೇಶ್ವರ ಪ್ರೌಢಶಾಲೆ-1, ಹಾಗೂ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 17 ಮಂದಿ ವಿದ್ಯಾರ್ಥಿಗಳು ಗೈರಾಗಿದ್ದಾರೆ.
144 ಸೆಕ್ಷನ್ ಜಾರಿ: ಪರೀಕ್ಷೆಯನ್ನು ಸುಗಮವಾಗಿ ನಡೆಸುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರದ ಸುತ್ತ ಸೆಕ್ಷನ್ ಜಾರಿಗೊಳಿಸಲಾಗಿದೆ. ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ಜೆರಾಕ್ಸ್ ಅಂಗಡಿಗಳನ್ನು ಬಂದ್ ಮಾಡುವಂತೆ ಸೂಚಿಸಲಾಗಿದೆ.