ಪುತ್ತೂರು: ಲಂಚ, ಭ್ರಷ್ಟಾಚಾರದ ವಿರುದ್ಧ ಸುದ್ದಿ ಜನಾಂದೋಲನ ವೇದಿಕೆ ವತಿಯಿಂದ ನಿರಂತರವಾಗಿ ನಡೆಯುತ್ತಿರುವ ಆಂದೋಲನಕ್ಕೆ ವ್ಯಾಪಕ ಜನಬೆಂಬಲ ವ್ಯಕ್ತವಾಗುತ್ತಿದ್ದು ಇದೀಗ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳೂ ಆಂದೋಲನಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ತಮ್ಮ ಕ್ಷೇತ್ರದಲ್ಲಿ ಲಂಚ, ಭ್ರಷ್ಟಾಚಾರಕ್ಕೆ ಅವಕಾಶ ನೀಡುವುದಿಲ್ಲ. ಒಂದು ವೇಳೆ ಅಧಿಕಾರಿಗಳು ಜನರಿಂದ ಲಂಚ ಪಡೆದುಕೊಂಡಿದ್ದೇ ಆದಲ್ಲಿ ಅದನ್ನು ಕಾನೂನಿನ ನೆಲೆಯಲ್ಲಿ ಹಿಂತಿರುಗಿಸಿ ಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿಯೂ ಪ್ರತಿಜ್ಞೆ ಮಾಡಿದ್ದಾರೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ, ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ, ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕ ಹಾಗೂ ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರು ಲಂಚ, ಭ್ರಷ್ಟಾಚಾರದ ವಿರುದ್ಧ ಪ್ರತಿಜ್ಞೆ ಸ್ವೀಕರಿಸಿ, ಸುದ್ದಿ ಜನಾಂದೋಲನಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.