ಪುತ್ತೂರು: ಮೇ.10ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಮೇ.9ರಂದು ಇಲ್ಲಿನ ತೆಂಕಿಲ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಮಸ್ಟರಿಂಗ್ ಕಾರ್ಯ ನಡೆಯಿತು.
ಪುತ್ತೂರು ವಿಧಾನ ಸಭಾ ಕ್ಷೇತ್ರದ ಚುನಾವಣಾಧಿಕಾರಿಯಾಗಿರುವ ಸಹಾಯಕ ಆಯುಕ್ತರಾದ ಗಿರೀಶ್ ನಂದನ್‌ರವರ ಮೇಲುಸ್ತುವಾರಿಯಲ್ಲಿ ಮಸ್ಟರಿಂಗ್ ಕಾರ್ಯ ನೆರವೇರಿತು. ಚುನಾವಣಾ ಕರ್ತವ್ಯ ನಿರ್ವಹಿಸಲಿರುವ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಮಸ್ಟರಿಂಗ್ ಕೇಂದ್ರದಲ್ಲಿ ಅಂಚೆ ಮೂಲಕ ಮತ ಚಲಾವಣೆಗೆ ಅವಕಾಶ ನೀಡಲಾಗಿತ್ತು.
ಚುನಾವಣಾ ಕರ್ತವ್ಯ ನಿರ್ವಹಿಸಲಿರುವ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಶಾಲೆಯ 20 ಕೊಠಡಿಗಳಲ್ಲಿ ಮತಗಟ್ಟೆಗಳಲ್ಲಿ ನಿರ್ವಹಿಸುವ ಕರ್ತವ್ಯಗಳ ಬಗ್ಗೆ ಮಾರ್ಗದರ್ಶನ ನೀಡಿದ ಬಳಿಕ ವಿದ್ಯುನ್ಮಾನ ಮತಯಂತ್ರ, ವಿವಿ ಪ್ಯಾಟ್ ಹಾಗೂ ಮತದಾನಕ್ಕೆ ಆವಶ್ಯಕವಾದ ಪರಿಕರಗಳನ್ನು ಪರಿಶೀಲಿಸಿ ವಿತರಿಸಲಾಯಿತು. ಮಧ್ಯಾಹ್ನದ ಭೋಜನದ ಬಳಿಕ ನಿಗದಿಪಡಿಸಿದ ರೂಟ್‌ಗಳಲ್ಲಿ ಮತಗಟ್ಟೆಳಿಗೆ ಅಧಿಕಾರಿ, ಸಿಬ್ಬಂದಿಗಳನ್ನು ಕಳುಹಿಸಿಕೊಡಲಾಗಿದೆ.
ಮೇ.10 ಬೆಳಿಗ್ಗೆ 7 ಗಂಟೆಯಿಂದ ಮತದಾನ ಪ್ರಕ್ರಿಯೆಗಳು ಪ್ರಾರಂಭಗೊಳ್ಳಲಿದ್ದು, ಸಂಜೆ 6 ಗಂಟೆಯ ತನಕ ಮತದಾನ ನಡೆದು ಸಂಜೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಡಿ ಮಸ್ಟರಿಂಗ್ ಕಾರ್ಯಗಳು ನಡೆಯಲಿದೆ.