ಬೆಂಗಳೂರು:ರಾಜ್ಯ ಕಾಂಗ್ರೆಸ್ ಸರಕಾರದ ಐದು ಗ್ಯಾರಂಟಿಗಳ ಪೈಕಿ ಒಂದಾಗಿರುವ ‘ಗೃಹ ಲಕ್ಷ್ಮೀ’ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಜೂ.15ರ ಬದಲು ಜೂ.16ರಂದು ಚಾಲನೆ ದೊರೆಯುವ ಸಾಧ್ಯತೆಯಿದೆ.
ರಾಜ್ಯದ ಪ್ರತಿಯೊಂದು ಕುಟುಂಬದ ಯಜಮಾನಿಗೆ ಮಾಸಿಕ 2 ಸಾವಿರ ರೂ.ಗಳ ಆರ್ಥಿಕ ನೆರವು ಒದಗಿಸುವ ‘ಗೃಹ ಲಕ್ಷ್ಮೀ’ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಜೂ.15ರಿಂದ ಆರಂಭಿಸುವುದಾಗಿ ಸರಕಾರ ಪ್ರಕಟಿಸಿತ್ತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಯೋಜನೆ ಕುರಿತು ಜೂ.14ರಂದು ಅಧಿಕಾರಿಗಳೊಂದಿಗೆ ವಿಧಾನಸೌಧದಲ್ಲಿ ಅಂತಿಮ ಹಂತದ ಸಭೆಯನ್ನು ನಡೆಸಿದರು.
ಈ ಸಂಬಂಧ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್.ಮಂಜುಳಾ, ಗೃಹ ಲಕ್ಷ್ಮೀ ಯೋಜನೆಗೆ ಚಾಲನೆ ನೀಡಲು ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ. ಆದರೆ, ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಯಾವುದೆ ರೀತಿಯ ಗೊಂದಲವಾಗಬಾರದು ಎಂಬ ಕಾರಣಕ್ಕಾಗಿ ಅಗತ್ಯ ತರಬೇತಿ ನೀಡಲು ಒಂದು ದಿನದ ಮಟ್ಟಿಗೆ ಯೋಜನೆಗೆ ಚಾಲನೆ ನೀಡುವುದನ್ನು ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.