ವಿಶ್ವವನ್ನು ಮಾದಕವಸ್ತುಗಳಿಂದ ಮುಕ್ತವಾಗಿಸುವ ಜವಾಬ್ದಾರಿ ನಮಗಿದೆ: ಶ್ರೀಕಾಂತ್ ರಾಥೋಡ್
ಪುತ್ತೂರು: ವಿಶ್ವದಾದ್ಯಂತ ಮಾದಕ ವಸ್ತುಗಳ ದುಶ್ಚಟಗಳಿಗೆ ಮಕ್ಕಳು ಮತ್ತು ಯುವಕರು ಹೆಚ್ಚು ಬಲಿಯಾಗುತ್ತಿದ್ದಾರೆ. ಮಾದಕ ವಸ್ತುಗಳ ಮಾರಾಟ ಹಾಗೂ ಸಾಗಾಣೆ ಕಾನೂನಬಾಹಿರ ಎಂದು ಗೊತ್ತಿದ್ದರೂ ಇದರ ದಂಧೆ ಎಗ್ಗಿಲ್ಲದೆ ನಡೆಯುತ್ತಿದ್ದ ಮಾದಕ ವಸ್ತುಗಳ ಸೇವನೆಯಿಂದ ಮನುಷ್ಯ ಅನೇಕ ದೈಹಿಕ ಹಾಗೂ ಮಾನಸಿಕ ಕಾಯಿಲೆಗೆ ಒಳಗಾಗಿ ತನ್ನ ಜೀವವನ್ನೇ ಕಳೆದುಕೊಳ್ಳುತ್ತಾನೆ ಹಾಗೂ ಆರ್ಥಿಕವಾಗಿ ದಿವಾಳಿ ಕೂಡ ಆಗುತ್ತಾನೆ. ಇದರಿಂದ ಕುಟುಂಬ ಹಾಗೂ ಸಮಾಜದ ಮೇಲೆ ಕೆಟ್ಟ ಪರಿಣಾಮ ಉಂಟಾಗುತ್ತದೆ ಎಂದು ಪುತ್ತೂರು ನಗರ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಶ್ರೀಕಾಂತ್ ರಾಥೋಡ್ ವಿವರಿಸಿದರು. ಅವರು ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಡೆದ ಅಂತಾರಾಷ್ಟ್ರೀಯ ಮಾದಕ ವಾಸ್ತು ವಿರೋಧಿ ದಿನಾಚರಣೆಯ ಪ್ರಯುಕ್ತ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಡ್ರಗ್ಸ್ ಮುಕ್ತ ಸಮಾಜದ ನಿರ್ಮಾಣದಲ್ಲಿ ಯುವಜನತೆಯ ಪಾತ್ರ ಎಂಬ ವಿಷಯದ ಕುರಿತು ಮಾತನಾಡಿದ ಅವರು, ಡ್ರಗ್ ಮಾಫಿಯಾ ಹತೋಟಿಗೆ ತರಲು ವಿಶ್ವದೆಲ್ಲೆಡೆ ಕಾನೂನು ಪ್ರಯತ್ನಗಳು ನಡೆಯುತ್ತಿವೆ. ಆದರೆ ಇದನ್ನು ಬುಡ ಸಮೇತ ಕಿತ್ತು ಹಾಕಲು ಸಾಧ್ಯವಾಗಿಲ್ಲ. ಪ್ರತಿಯೊಬ್ಬ ನಾಗರಿಕನೂ ಈ ಬಗ್ಗೆ ಜಾಗೃತಿ ಹೊಂದಿ ವಿಶ್ವವನ್ನು ಮಾದಕವಸ್ತುಗಳಿಂದ ಮುಕ್ತವಾಗಿಸುವ ಜವಾಬ್ದಾರಿ ತೆಗೆದು ಕೊಳ್ಳಬೇಕಿದೆ ಎಂದು ಹೇಳಿದರು. ಉಪನ್ಯಾಸದ ನಂತರ ವಿದ್ಯಾರ್ಥಿಗಳ ಜೊತೆಗೆ ಸಂವಾದ ನಡೆಯಿತು.
ವಿವೇಕಾನಂದ ಕಾನೂನು ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ, ಎನ್ ಎಸ್ ಎಸ್ ಘಟಕದ ಕಾರ್ಯಕ್ರಮಾಧಿಕಾರಿ ಲಕ್ಷ್ಮೀಕಾಂತ ಎ., ಕಾರ್ಯಕ್ರಮದ ಕುರಿತು ಪ್ರಾಸ್ತವಿಕ ಮಾತುಗಳನ್ನಾಡಿ, ಮಾದಕ ವಸ್ತುಗಳ ದುರ್ಬಳಕೆ ಮತ್ತು ಅಕ್ರಮ ಕಳ್ಳಸಾಗಣೆ ವಿರುದ್ಧದ ಅಂತಾರಾಷ್ಟ್ರೀಯ ದಿನವನ್ನು ವಿಶ್ವ ಮಾದಕ ವಸ್ತು ಬಳಕೆ ವಿರೋಧಿ ದಿನ ಎಂದು ಕರೆಯಲಾಗುತ್ತದೆ. ಇದನ್ನು ಪ್ರತಿ ವರ್ಷ ಜೂ.26ರಂದು ಮಾದಕ ವ್ಯಸನ ಮುಕ್ತ ಜಗತ್ತನ್ನು ನಿರ್ಮಿಸಲು ಕ್ರಮ ಮತ್ತು ಸಹಕಾರವನ್ನು ಬಲಪಡಿಸಲು ಆಚರಿಲಾಗುತ್ತದೆ. ಪ್ರತಿ ವರ್ಷ ಪ್ರಪಂಚದಾದ್ಯಂತದ ವಿವಿಧ ಸಂಸ್ಥೆಗಳು ವಿಶ್ವ ಮಾದಕವಸ್ತು ದಿನವನ್ನು ಆಚರಿಸುತ್ತವೆ. ಜೊತೆಗೆ ಸಮಾಜಕ್ಕೆ ನಿಷೇಧಿತ ಮಾದಕವಸ್ತುಗಳು ಉಂಟುಮಾಡುವ ಪ್ರಮುಖ ಸಮಸ್ಯೆಯ ಬಗ್ಗೆ ಜಾಗೃತಿ ಮೂಡಿಸುವ ಜವಾಬ್ದಾರಿಯುತವಾದ ಕೆಲಸವನ್ನು ವಿವೇಕಾನಂದ ಕಾನೂನು ಮಹಾವಿದ್ಯಾಲಯವು ನಿರಂತರವಾಗಿ ಮಾಡುತ್ತಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕರಾದ ನವೀನ್ ಕುಮಾರ್ ಎಂ.ಕೆ. ವಹಿಸಿದ್ದರು. ಕಾಲೇಜಿನ ವಿದ್ಯಾರ್ಥಿ ನಾಯಕ ಅಭಿಷೇಕ್ ಲಾಲ್ ಸ್ವಾಗತಿಸಿ, ಎನ್ ಎಸ್ ಎಸ್ ಸ್ವಯಂಸೇವಕಿ ಚೈತನ್ಯ ಬಿ ವಂದಿಸಿದರು. ವಿದ್ಯಾರ್ಥಿನಿ ಪ್ರಿಯಾ ಎಸ್ ಕಾರ್ಯಕ್ರಮ ನಿರೂಪಿಸಿದರು.