ಕುಂತೂರಿನ ರಾಜಿಕ್ಗೆ ಮೂರುವರೆ ವರ್ಷ ಜೈಲು ಶಿಕ್ಷೆ
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ
ಕಡಬ: 11 ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಕುಂತೂರಿನ ರಾಜಿಕ್ ಎಂಬವರಿಗೆ ಪುತ್ತೂರು ನ್ಯಾಯಾಲಯವು ಜೈಲು ಶಿಕ್ಷೆ ನೀಡಿ ತೀರ್ಪು ನೀಡಿದೆ.
2012ನೇ ಇಸವಿಯಲ್ಲಿ ಕುಂತೂರಿನ ರಾಜಿಕ್ ಎಂಬವರು ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದಲ್ಲಿ ಬಂಧಿತರಾಗಿದ್ದರು, ಬಳಿಕ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು. ಆ ಬಳಿಕ ಕೋರ್ಟ್ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ನ್ಯಾಯಾಲಯ ಈತನ ಬಂಧನಕ್ಕೆ ವಾರಂಟ್ ಹೊರಡಿಸಿತ್ತು, ನಾಲ್ಕು ತಿಂಗಳಿನ ಹಿಂದೆ ಕಡಬ ಪೋಲಿಸರು ಆರೋಪಿ ರಾಜಿಕ್ವನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಬಳಿಕ ಅವರು ನ್ಯಾಯಾಂಗ ಬಂಧನದಲ್ಲಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ಪುತ್ತೂರು 2ನೇ ಎ.ಸಿ.ಜೆ.ಮತ್ತು ಜೆ.ಎಮ್.ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶ ಯೋಗೇಂದ್ರ ಶೆಟ್ಟಿ ಅವರು ಆರೋಪಿ ರಾಜಿಕ್ಗೆ ಮೂರು ವರ್ಷ ಆರು ತಿಂಗಳು ಕಾರಾಗೃಹವಾಸ ಮತ್ತು 1500 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಪ್ರಾಸಿಕ್ಯೂಶನ್ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕಿ ಕವಿತಾ ಅವರು ವಾದಿಸಿದ್ದರು.