ಪುತ್ತೂರು : ಫಿಲೋ ಪ್ರತಿಭಾ-2023 ಮಕ್ಕಳ ಮುಂದಿನ ಭವಿಷ್ಯದಲ್ಲಿ ಅವರು ಯಾವ ಕ್ಷೇತ್ರದಲ್ಲಿ ಉತ್ತಮ ಆಸಕ್ತಿ ಹೊಂದಿದ್ದಾರೆ ಎಂಬುದನ್ನು ಗುರುತಿಸಲು ಪೂರಕವಾಗುತ್ತದೆ. ಅಷ್ಟೇ ಅಲ್ಲ ವರ್ಷಂಪ್ರತಿ ಪಾಠಗಳನ್ನು ಆಲಿಸುವ ಮಕ್ಕಳಿಗೆ ಇದರಿಂದ ಹೊಸತನ ದೊರೆಯುತ್ತದೆ. ಮನುಷ್ಯನ ಪ್ರತಿಯೊಂದು ಅಂಗಗಳಲ್ಲಿ ಪ್ರತಿಭೆಯು ಅಡಕವಾಗಿರುತ್ತದೆ. ಮಕ್ಕಳಿಗೆ ಸಿಗುವ ಉತ್ತಮ ಅವಕಾಶವೇ ಫಿಲೋ ಪ್ರತಿಭಾ- 2023. ಇದು ಮಕ್ಕಳ ಸುಪ್ತ ವೇದಿಕೆಯಾಗಿದೆ ಎಂದು ಪುತ್ತೂರಿನ ಬೊಳ್ವಾರ್ ಮೆಘಾ ಸೆಂಟರ್ ನ ಮಾಲಕರಾದ ರೊಟೆರಿಯನ್ ಆಸ್ಕರ್ ಆನಂದ್ ಹೇಳಿದರು.
ಅವರು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಸೆಪ್ಟೆಂಬರ್ 14ರಂದು ಕಾಲೇಜಿನ ಬೆಳ್ಳಿ ಹಬ್ಬದ ಸಭಾಂಗಣದಲ್ಲಿ ನಡೆದ ಪ್ರೌಢ ಶಾಲಾ ವಿದ್ಯಾರ್ಥಿಗಳ ಪ್ರತಿಭೆಯನ್ನು ಅನಾವರಣಗೊಳಿಸಲು ಆಯೋಜಿಸಲಾದ ಜಿಲ್ಲಾಮಟ್ಟದ ‘ಪ್ರತಿಭಾ – 2023’ ಕಾರ್ಯಕ್ರಮವನ್ನು ಉದ್ಘಾಟಸಿ ಮಾತನಾಡಿದ ಅವರು ಪಠ್ಯ ಚಟುವಟಿಕೆಗಳೊಂದಿಗೆ ಪಠ್ಯೇತರ ಚಟುವಟಿಕೆಗಳನ್ನು ನಡೆಸುವುದರಿಂದ ಮಕ್ಕಳಲ್ಲಿನ ಕಲಿಕಾ ಕ್ರಿಯಾಶೀಲತೆ ಹೆಚ್ಚಾಗಿ, ಪ್ರತಿಭಾವಂತ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರಗತಿಗೆ ಒತ್ತು ಕೊಟ್ಟು ಉನ್ನತ ಶಿಕ್ಷಣದ ಗುರಿ ಹೊಂದುತ್ತಾರೆಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಕಾಲೇಜಿನ ಕ್ಯಾಂಪಸ್ ನಿರ್ದೇಶಕರಾದ ರೆ.ಫಾ. ಸ್ಟ್ಯಾನಿ ಪಿಂಟೋ ಮಾತನಾಡಿ ಮಕ್ಕಳಲ್ಲಿನ ಸುಪ್ತ ಪ್ರತಿಭೆ ಗುರುತಿಸಿ ಅವಕಾಶ ಸಿಕ್ಕಾಗ ಪ್ರಬುದ್ಧತೆಯ ಪ್ರದರ್ಶನಕ್ಕೆ ಶಿಕ್ಷಕರು, ಪೋಷಕರು ಪ್ರೋತ್ಸಾಹಿಸಬೇಕೆಂದು ಎಂದು ಹೇಳಿದರು.
ಅಧ್ಯಕ್ಷತೆಯನ್ನು ವಹಿಸಿದ ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ರೆ.ಫಾ. ಲಾರೆನ್ಸ್ ಮಸ್ಕರೇನಸ್ ಮಾತನಾಡಿ ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ಪ್ರತಿಭೆ ಅಡಗಿರುತ್ತದೆ. ಅವನ ಸಾಮರ್ಥ್ಯಕ್ಕೆ ತಕ್ಕಂತೆ ಪ್ರತಿಭೆ ಗುರುತಿಸಿ, ವೇದಿಕೆಗಳಲ್ಲಿ ಪ್ರದರ್ಶನಕ್ಕೆ ಉತ್ತೇಜನ ನೀಡಿ, ಹೊರ ಜಗತ್ತಿಗೆ ತಿಳಿಸುವ ಪ್ರಯತ್ನ ಮಾಡಬೇಕು. ಶಾಲಾ ಮಟ್ಟದಲ್ಲಿ ಇಂತಹ ಪ್ರತಿಭೆಗಳನ್ನು ಗುರುತಿಸಿದರೆ ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲೂ ಭಾಗವಹಿಸುವ ಅವಕಾಶವಿದೆ. ಇದರಿಂದ ಅವರು ಜೀವನದಲ್ಲಿ ಮತ್ತಷ್ಟು ಸಂಶೋಧನೆ-ಪ್ರಯೋಗಗಳನ್ನು ಮಾಡುತ್ತಾರೆ. ಪ್ರತಿಭಾನ್ವಿತ ವಿದ್ಯಾರ್ಥಿಗಳು ಒಳ್ಳೆಯ ಮನಸ್ಸಿನ ವ್ಯಕ್ತಿಗಳಾಗಿ ಎಲ್ಲರನ್ನೂ ಪ್ರೀತಿಸುವ ಮತ್ತು ಗೌರವಿಸುವ ವಿನಯಶೀಲತೆಯ ವ್ಯಕ್ತಿಗಳಾಗಿ ಬಾಳಬೇಕು ಎಂದರು.
ವೇದಿಕೆಯಲ್ಲಿ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಜೆರಾಲ್ಡ್ ಡಿ ಕೋಸ್ಟಾ , ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಎ .ಜಗಜೀವನದಾಸ ರೈ ಹಾಗೂ ಕಾಲೇಜಿನ ವಿದ್ಯಾರ್ಥಿ ನಿಲಯದ ಪಾಲಕರಾದ ರೆ. ಫಾ ರೂಪೇಶ್ ತಾವ್ರೋ ಉಪಸ್ಥಿತರಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ 42 ಪ್ರೌಢಶಾಲೆಗಳ 1000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ರಸಪ್ರಶ್ನೆ, ಕನ್ನಡ ಹಾಗೂ ಇಂಗ್ಲಿಷ್ ವಿಚಾರ ಸಂಕಿರಣ, ಪೆನ್ಸಿಲ್ ಸ್ಕೆಚ್, ಮಣ್ಣಿನ ಮಾದರಿ ತಯಾರಿ, ವಿಜ್ಞಾನ ಮಾದರಿ ತಯಾರಿ, ಜಾನಪದ ಗಾಯನ ಸ್ಪರ್ಧೆ, ಕೊಲಾಜ್ ತಯಾರಿಕೆ, ಸ್ಟ್ಯಾಂಡ್ ಅಪ್ ಕಾಮಿಡಿ, ಜಾಹೀರಾತು ಸ್ಪರ್ಧೆ, ತ್ಯಾಜ್ಯದಿಂದ ಉಪಯುಕ್ತ ವಸ್ತು ತಯಾರಿ , ಫೇಸ್ ಪೈಂಟಿಂಗ್ ಹಾಗೂ ನೃತ್ಯ ಸ್ಪರ್ಧೆ ಹೀಗೆ 13 ವಿವಿಧ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರೌಢಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು, ರಕ್ಷಕ ಶಿಕ್ಷಕ ಸಂಘದ ಪದಾಧಿಕಾರಿಗಳು, ಕಾಲೇಜಿನ ಬೋಧಕ ಹಾಗೂ ಬೋಧಕೇತರ ವರ್ಗದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಪ್ರದರ್ಶನ ಕಲಾ ಸಂಘದ ವಿದ್ಯಾರ್ಥಿಗಳು ಪ್ರಾರ್ಥಿಸಿ, ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ಅತಿಥಿಗಳನ್ನ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ‘ಪ್ರತಿಭಾ 2023’ ಇದರ ನಿರ್ದೇಶಕರಾದ ಡಾ.ಆಶಾ ಸಾವಿತ್ರಿ ವಂದಿಸಿ, ಉಪನ್ಯಾಸಕರಾದ ಸಂತೋಷ್ ಸಿ .ಡಿ ಸೋಜಾ ಕಾರ್ಯಕ್ರಮವನ್ನು ನಿರೂಪಿಸಿದರು.