ಹಸಿರು ಪಟಾಕಿ ಮಾತ್ರ ಬಳಕೆಗೆ ರಾಜ್ಯ ಸರಕಾರದಿಂದ ಸುತ್ತೋಲೆ

0

ಬೆಂಗಳೂರು:ದೀಪಾವಳಿ ಹಬ್ಬದ ಆಚರಣೆ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಎಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.
ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಮಾರ್ಗಸೂಚಿಯನ್ನು ಉಲ್ಲೇಖಿಸಿ ಈ ಸುತ್ತೋಲೆ ಹೊರಡಿಸಿರುವ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು, ಎಲ್ಲ ಮಹಾನಗರಪಾಲಿಕೆಗಳು, ಸ್ಥಳೀಯಾಡಳಿತ ಸಂಸ್ಥೆಗಳು ಕಡ್ಡಾಯವಾಗಿ ಅನುಸರಿಸಬೇಕು ಎಂದು ಸೂಚಿಸಿದ್ದಾರೆ.


ಸುಪ್ರೀಂ ಕೋರ್ಟ್ ಆದೇಶಗಳನ್ನು ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ತಮ್ಮ ವ್ಯಾಪ್ತಿಯ ಅಧೀನ ಅಧಿಕಾರಿಗಳ ಗಮನಕ್ಕೆ ತಂದು, ಆದೇಶ ಪಾಲಿಸಲು ಕ್ರಮ ತೆಗೆದುಕೊಳ್ಳಬೇಕು. ಜಿಲ್ಲಾಧಿಕಾರಿಗಳು ಕಾರ್ಯಪಡೆಗಳನ್ನು ರಚಿಸಿ ಪಟಾಕಿ ಮಾರಾಟಗಾರರ ಗೋದಾಮುಗಳನ್ನು ಪರಿಶೀಲಿಸಬೇಕು.ಹಸಿರು ಪಟಾಕಿ ಹೊರತುಪಡಿಸಿ ಇತರ ಯಾವುದೇ ನಿಷೇಧಿತ ಪಟಾಕಿಗಳನ್ನು ದಾಸ್ತಾನು ಮಾಡಿದ್ದರೆ ಗೋದಾಮು ಮುಟ್ಟಗೋಲು ಹಾಕಬೇಕು. ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ಹೂಡಬೇಕು ಎಂದೂ ಸುತ್ತೋಲೆಯಲ್ಲಿ ವಿವರಿಸಲಾಗಿದೆ.


ಎಲ್ಲ ಹಸಿರು ಪಟಾಕಿಗಳ ಮೇಲೆ ಮತ್ತು ಅವುಗಳ ಪ್ಯಾಕೆಟಿನ ಮೇಲೆ ಹಸಿರು ಪಟಾಕಿಯ ಚಿಹ್ನೆ ಮತ್ತು ಕ್ಯೂಆರ್ ಕೋಡ್ ಇರುತ್ತದೆ.ಸಂಬಂಧಪಟ್ಟ ಜಿಲ್ಲೆಯ ಪರಿಸರ ಅಧಿಕಾರಿಗಳಿಂದ ಈ ಚಿಹ್ನೆಯ ಬಗ್ಗೆ ಖಚಿತಪಡಿಸಿಕೊಳ್ಳಬೇಕು.ಚಿಹ್ನೆ ಇಲ್ಲದ ಯಾವುದೇ ಪಟಾಕಿ ಹಸಿರು ಪಟಾಕಿ ಆಗಿರುವುದಿಲ್ಲ.ಅವುಗಳನ್ನು ಮುಟ್ಟಗೋಲು ಹಾಕಬೇಕು. ಯಾವುದೇ ಹಸಿರು ಪಟಾಕಿಗಳ ಪ್ಯಾಕೆಟ್‌ಗಳನ್ನು ರ‍್ಯಾಂಡಮ್ ಆಗಿ ಸಂಗ್ರಹಿಸಿ ನಿಗದಿತ ವಿಧಿ ವಿಧಾನಗಳ ಮೂಲಕ ಅವುಗಳ ಶಬ್ದದ ಮಟ್ಟ ಮಾಪನ ಮಾಡಬೇಕು. ನಿಗದಿತ ಗುಣಮಾಪನಗಳಿಗೆ ಸರಿಹೊಂದದೇ ಇದ್ದರೆ ತಕ್ಷಣ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದೂ ತಿಳಿಸಲಾಗಿದೆ.
ಹೊರ ರಾಜ್ಯಗಳಿಂದ ಅನಧಿಕೃತವಾಗಿ ಯಾವುದೇ ರೀತಿಯ ನಿಷೇಧಿತ ಪಟಾಕಿಗಳನ್ನು ಸಾಗಣೆ ಮಾಡುತ್ತಿದ್ದರೆ ವಾಣಿಜ್ಯ ಇಲಾಖೆಯು ರಾಜ್ಯದ ಗಡಿಗಳಲ್ಲಿರುವ ತಮ್ಮ ತನಿಖಾ ಠಾಣೆಗಳ ಮೂಲಕ ಮುಟ್ಟಗೋಲು ಹಾಕಿಕೊಳ್ಳಬೇಕು. ಪರಿಸರ ಸ್ನೇಹಿ ದೀಪಾವಳಿ ಆಚರಣೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದೂ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here