ಪ್ರತಿಭೆ, ಕೌಶಲ್ಯವನ್ನು ಸೂಕ್ತ ಸಮಯದಲ್ಲಿ ಬಳಸಿಕೊಂಡಾಗ ಸಾಧಕರಾಗಲು ಸಾಧ್ಯ: ಸುಬ್ರಹ್ಮಣ್ಯ ಸ್ವಾಮೀಜಿ
ರಾಮಕುಂಜ: ಶ್ರೀ ರಾಮಕುಂಜೇಶ್ವರ ಬಡ ವಿದ್ಯಾರ್ಥಿ ದತ್ತಿನಿಧಿ, ಶ್ರೀ ರಾಮಕುಂಜೇಶ್ವರ ಕ್ರೀಡಾ ಟ್ರಸ್ಟ್ ಮತ್ತು ಭೂಮಿ ಚಾರಿಟೇಬಲ್ ಟ್ರಸ್ಟ್ ಮುಂಬಯಿ, ಕರಾವಳಿ ಗ್ರೂಫ್ ಆಫ್ ಕಾಲೇಜ್ ಎಕ್ಸಲೆಂಟ್ ಅವಾರ್ಡ್ ಇವರ ಸಹಯೋಗದೊಂದಿಗೆ ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲೆಯ ಆಶ್ರಯದಲ್ಲಿ ವಿದ್ಯಾರ್ಥಿ ವೇತನ ವಿತರಣೆ, ಪ್ರತಿಭಾ ಪುರಸ್ಕಾರ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ‘ ಕಲಾ ಸೌರಭ’ ನ.25ರಂದು ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆಯಿತು.
ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀ ಪಾದಂಗಳವರು ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ದತ್ತಿನಿಧಿ, ತರಗತಿವಾರು ಅತೀ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ, ಕ್ರೀಡಾ ಸಾಧಕರಿಗೆ, ಸ್ಕೌಟ್ ಮತ್ತು ಗೈಡ್ಸ್ ಸಾಧಕರಿಗೆ, ಪ್ರತಿಭಾ ಕಾರಂಜಿಯ ವಿಜೇತರಿಗೆ, ಪ್ರಶಸ್ತಿ ಪತ್ರ ಮತ್ತು ನಗದು ವಿತರಿಸಿದರು. ಬಳಿಕ ಆಶೀರ್ವಚನ ನೀಡಿದ ಸ್ವಾಮೀಜಿ, ಪ್ರತಿಭೆ, ಕೌಶಲ್ಯ ಮತ್ತು ಸ್ಪೂರ್ತಿಯನ್ನು ಸೂಕ್ತ ಸಮಯದಲ್ಲಿ ಬಳಸಿಕೊಂಡಾಗ ಉತ್ತಮ ಸಾಧಕರಾಗಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪ್ರಯತ್ನಿಸಬೇಕೆಂದು ಹೇಳಿದರು.
ಮುಖ್ಯ ಅತಿಥಿಗಳಾಗಿದ್ದ ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜಿನ ನಿವೃತ್ತ ಉಪನ್ಯಾಸಕ ಹರಿನಾರಾಯಣ ಆಚಾರ್ಯ, ರಾಮಕುಂಜ ಗ್ರಾ.ಪಂ.ಅಧ್ಯಕ್ಷೆ ಸುಚೇತಾ ಬಿ., ಅವರು ಸಂದರ್ಭೋಚಿತವಾಗಿ ಮಾತನಾಡಿದರು. ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈಯವರು ಸ್ವಾಗತಿಸಿ, ಕಾರ್ಯಕ್ರಮದ ಉದ್ದೇಶದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಸ್ಥೆಯ ಆಡಳಿತಾಧಿಕಾರಿ ಆನಂದ ಎಸ್.ಟಿ., ಪ್ರಾಥಮಿಕ ವಿಭಾಗದ ಮುಖ್ಯಗುರು ಲೋಹಿತ, ಸಂಸ್ಥೆಯ ವ್ಯವಸ್ಥಾಪಕ ರಮೇಶ್ ರೈ ಬಿ., ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರೌಢಶಾಲಾ ಮುಖ್ಯಶಿಕ್ಷಕಿ ಗಾಯತ್ರಿ ಯು.ಎನ್.ವಂದಿಸಿದರು. ಸಹಶಿಕ್ಷಕರಾದ ಕಿಶೋರ್ ಕುಮಾರ್ ಬಿ., ಶೃತಿ ಅವರು ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಎಲ್ಲಾ ಶಿಕ್ಷಕ, ಶಿಕ್ಷಕೇತರ ವೃಂದ, ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕ ರಕ್ಷಕ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಶ್ರೀ ರಾಮಕುಂಜೇಶ್ವರ ಕಿಂಡರ್ ಗಾರ್ಟನ್, ಪ್ರಾಥಮಿಕ ವಿಭಾಗದ 1ರಿಂದ 3ನೇ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಂದ ‘ ಕಲಾ ಸೌರಭ ‘ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.