ಪರೀಕ್ಷಾ ಕೇಂದ್ರದ 200ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ
ದ.ಕ.ಜಿಲ್ಲೆಯಲ್ಲಿ 36,147 ಅಭ್ಯರ್ಥಿಗಳು ನೋಂದಾವಣೆ
ಪುತ್ತೂರು: 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಮಾ.1ರಿಂದ ಆರಂಭವಾಗಲಿದ್ದು ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ 200ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ದ.ಕ.ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಆದೇಶಿಸಿದ್ದಾರೆ.
ನಿಷೇಧಿತ ಪ್ರದೇಶದಲ್ಲಿ ಯಾವುದೇ ರೀತಿಯ ನಕಲು ಮಾಡಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು ಅಥವಾ ಇನ್ನಾವುದೇ ವಸ್ತುಗಳನ್ನು ಹಂಚುವುದು/ರವಾನಿಸುವುದು ಇತ್ಯಾದಿ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ. ಈ ಪ್ರದೇಶದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳ ಮಾಹಿತಿ ರವಾನಿಸುವ ಅಥವಾ ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಮತ್ತಿತರ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳಿಂದ 200ಮೀ. ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಕಾರ್ಯನಿರ್ವಹಿಸುವುದನ್ನು ಕೂಡ ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ದ.ಕ.ಜಿಲ್ಲೆಯಲ್ಲಿ 36,147 ವಿದ್ಯಾರ್ಥಿಗಳ ನೋಂದಣಿ:
ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಗೆ ದ.ಕ.ಜಿಲ್ಲೆಯಲ್ಲಿ 36,147 ಅಭ್ಯರ್ಥಿಗಳು ನೋಂದಾಯಿಸಿದ್ದಾರೆ. ರೆಗ್ಯುಲರ್ 34,125, ಖಾಸಗಿಯಾಗಿ 1635, ಪುನರಾವರ್ತಿತರಾಗಿ 387 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಮಾ.1ರಿಂದ 22ರವರೆಗೆ ಬೆಳಿಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.