ಲೋಕಸಭಾ ಚುನಾವಣೆಗೆ ಪುತ್ತಿಲ ಸ್ಪರ್ಧೆ ಘೋಷಣೆ-ಬಿಜೆಪಿ ಕೋರ್ ಕಮಿಟಿ ತುರ್ತು ಸಭೆಯಲ್ಲಿ ಚರ್ಚೆ

0

ಪುತ್ತೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್ ಕುಮಾರ್ ಪುತ್ತಿಲ ಸ್ಪರ್ಧೆ ಮಾಡಲಿದ್ದಾರೆ ಮತ್ತು ಮುಂದಿನ ಎಲ್ಲಾ ಚುನಾವಣೆಗಳಲ್ಲಿಯೂ ದ.ಕ.ಜಿಲ್ಲೆಯಲ್ಲಿ ಪುತ್ತಿಲ ಪರಿವಾರದ ಸ್ಪರ್ಧೆ ಇರಲಿದೆ ಎಂದು ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ ಅವರು ಬಹಿರಂಗವಾಗಿ ಘೋಷಿಸಿರುವ ಬೆನ್ನಲ್ಲೇ ಮಾ.1ರಂದು ಸಂಜೆ ಪುತ್ತೂರಿನಲ್ಲಿ ಬಿಜೆಪಿ ಕೋರ್ ಕಮಿಟಿಯ ತುರ್ತು ಸಭೆ ನಡೆದು ಈ ವಿಚಾರದಲ್ಲಿ ಚರ್ಚೆ ನಡೆದಿದೆ.


ಕೋರ್ ಕಮಿಟಿ ಸಭೆಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಸಹಿತ ಪ್ರಮುಖರು ಉಪಸ್ಥಿತರಿದ್ದರು. ಪುತ್ತೂರು ಮಂಡಲದ ಅಧ್ಯಕ್ಷ ಸ್ಥಾನ ನೀಡುವುದಾದರೆ ಅರುಣ್ ಕುಮಾರ್ ಪುತ್ತಿಲ ಅವರು ಬಿಜೆಪಿಗೆ ಸೇರ್ಪಡೆಯಾಗುವ ಜೊತೆಗೆ ಪುತ್ತಿಲ ಪರಿವಾರ ಬಿಜೆಪಿಯೊಂದಿಗೆ ವಿಲೀನವಾಗಲಿದೆ ಎಂದು ಈ ಹಿಂದೆ ಪುತ್ತಿಲ ಪರಿವಾರದ ಪ್ರಮುಖರು ಬಹಿರಂಗವಾಗಿ ಹೇಳಿಕೆ ನೀಡಿದ್ದರು. ಈ ವಿಚಾರವೂ ಕೋರ್ ಕಮಿಟಿ ಸಭೆಯಲ್ಲಿ ಪ್ರಸ್ತಾಪವಾಗಿ, ಅರುಣ್ ಕುಮಾರ್ ಪುತ್ತಿಲ ಅವರು ಬೇಷರತ್ ಆಗಿ ಪಕ್ಷಕ್ಕೆ ಬರುವುದಾದರೆ ಇನ್ನೂ ಅವಕಾಶ ನೀಡುವುದು, ಪಕ್ಷದ ಹುದ್ದೆ ನೀಡುವ ವಿಚಾರ ಏನಿದ್ದರೂ ಸೇರ್ಪಡೆಯಾದ ಬಳಿಕ ಎಂದು ಸಭೆಯಲ್ಲಿ ಚರ್ಚೆಯಾಗಿರುವುದಾಗಿ ತಿಳಿದು ಬಂದಿದೆ.

ಅರುಣ್ ಕುಮಾರ್ ಪುತ್ತಿಲ ಅವರಿಗೆ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸ್ಥಾನ ಅಥವಾ ಬೇರೆ ಯಾವುದಾದರೂ ಹುದ್ದೆ ನೀಡಿ ಪುತ್ತೂರು ಕ್ಷೇತ್ರದ ಉಸ್ತುವಾರಿ ನೀಡುವ ಕುರಿತು ಈ ಹಿಂದೆ ಪಕ್ಷದ ಪ್ರಮುಖರು ತೀರ್ಮಾನಿಸಿದ್ದರು. ಆದರೆ, ಪುತ್ತೂರು ಮಂಡಲ ಬಿಜೆಪಿ ಅಧ್ಯಕ್ಷತೆಯನ್ನೇ ಪುತ್ತಿಲ ಅವರಿಗೆ ನೀಡಬೇಕು ಎಂದು ಪುತ್ತಿಲ ಪರಿವಾರದ ಪ್ರಮುಖರು ಪಟ್ಟು ಹಿಡಿದಿದ್ದರು. ಜಿಲ್ಲೆಯಲ್ಲಿ ಇತರ ಎಲ್ಲಾ ಮಂಡಲಗಳ ಅಧ್ಯಕ್ಷರ ಘೋಷಣೆಯಾಗಿದ್ದರೂ ಪುತ್ತೂರು ಮಂಡಲದ ಅಧ್ಯಕ್ಷರ ಘೋಷಣೆ ಇನ್ನೂ ಆಗದೇ ಇರುವುದು, ಪುತ್ತಿಲ ಪರಿವಾರದವರ ಬೇಡಿಕೆಯಂತೆ ಅರುಣ್ ಕುಮಾರ್ ಪುತ್ತಿಲ ಅವರಿಗೆ ಪುತ್ತೂರು ಮಂಡಲದ ಅಧ್ಯಕ್ಷ ಸ್ಥಾನ ನೀಡುವ ಸಾಧ್ಯತೆ ಇದೆ ಎನ್ನುವುದನ್ನು ಪುಷ್ಟೀಕರಿಸಿತ್ತು. ಆದರೆ, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಹಿತ ಪ್ರಮುಖರು, ಬೇಷರತ್ ಆಗಿ ಪಕ್ಷಕ್ಕೆ ಬರುವಂತೆ ಅರುಣ್ ಕುಮಾರ್ ಪುತ್ತಿಲ ಅವರಿಗೆ ಸೂಚನೆ ನೀಡಿದ್ದರು. ಈ ಎಲ್ಲಾ ಬೆಳವಣಿಗೆಗಳ ಮಧ್ಯೆಯೇ, ಇದೀಗ ಅರುಣ್ ಕುಮಾರ್ ಪುತ್ತಿಲ ಅವರು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದು ಖಚಿತ ಎಂದು ಪುತ್ತಿಲ ಪರಿವಾರದ ಅಧ್ಯಕ್ಷರು ಘೋಷಣೆ ಮಾಡಿರುವುದರಿಂದ ಬಿಜೆಪಿ ಕೋರ್ ಕಮಿಟಿ ತುರ್ತು ಸಭೆ ನಡೆಸಿ ಈ ಕುರಿತು ಚರ್ಚಿಸಿದೆ. ಅರುಣ್ ಕುಮಾರ್ ಪುತ್ತಿಲ ಅವರು ಬೇಷರತ್ ಆಗಿ ಪಕ್ಷಕ್ಕೆ ಬರುವುದಾದರೆ ಸ್ವಾಗತಿಸುವುದು, ಪಕ್ಷಕ್ಕೆ ಸೇರ್ಪಡೆಯಾದ ಬಳಿಕ ಹುದ್ದೆ ವಿಚಾರವನ್ನು ಪ್ರಮುಖರು ನಿರ್ಧರಿಸಲಿದ್ದಾರೆ ಎಂದು ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನವಾಗಿದೆ.

ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಅವರನ್ನು ಪುತ್ತೂರು ಕ್ಷೇತ್ರದ ಚುನಾವಣಾ ಉಸ್ತುವಾರಿಯಾಗಿ ನೇಮಕ ಮಾಡುವ ವಿಚಾರವೂ ಸಭೆಯಲ್ಲಿ ಪ್ರಸ್ತಾಪವಾಗಿದೆ ಎಂದು ಹೇಳಲಾಗುತ್ತಿದೆ. ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಮಾಜಿ ಶಾಸಕ ಸಂಜೀವ ಮಠಂದೂರು, ಉಸ್ತುವಾರಿಗಳಾದ ಗೋಪಾಲಕೃಷ್ಣ ಹೇರಳೆ, ಅಪ್ಪಯ್ಯ ಮಣಿಯಾಣಿ, ಚನಿಲ ತಿಮ್ಮಪ್ಪ ಶೆಟ್ಟಿ, ಜಿಲ್ಲಾ ಪ್ರಮುಖರಾದ ಪ್ರೇಮಾನಂದ ಶೆಟ್ಟಿ,ಸುನಿಲ್ ಮತ್ತಿತರ ಪ್ರಮುಖರು ಸಭೆಯಲ್ಲಿದ್ದರು ಎಂದು ತಿಳಿದು ಬಂದಿದೆ.

ಇಂದು ಪ್ರೆಸ್ ಮೀಟ್‌ನಲ್ಲಿ ಮಾಹಿತಿ?
ಅರುಣ್ ಕುಮಾರ್ ಪುತ್ತಿಲ ಅವರು ಬಿಜೆಪಿಗೆ ಬರುವುದಾದರೆ ಇನ್ನೂ ಅವಕಾಶ ನೀಡುವುದು, ಪುತ್ತೂರು ಮಂಡಲ ಬಿಜೆಪಿಯ ನೂತನ ಅಧ್ಯಕ್ಷ, ಪದಾಧಿಕಾರಿಗಳ ಘೋಷಣೆ ಸಹಿತ ಕೆಲವೊಂದು ಪ್ರಮುಖ ವಿಚಾರಗಳ ಕುರಿತು ಪಕ್ಷದ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರ ನೇತೃತ್ವದಲ್ಲಿ ಪಕ್ಷದ ಪ್ರಮುಖರು ಮಾ.2ರಂದು ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಖಚಿತ ಮಾಹಿತಿ ಲಭ್ಯವಾಗಿಲ್ಲ.

LEAVE A REPLY

Please enter your comment!
Please enter your name here