ಉಪ್ಪಿನಂಗಡಿ: ಗ್ರಾಮ ಪಂಚಾಯತ್ ಅಧೀನದಲ್ಲಿರುವ ಉಪ್ಪಿನಂಗಡಿ ಬಸ್ ನಿಲ್ದಾಣ ತೀರಾ ಇಕ್ಕಟ್ಟಾಗಿದ್ದು, ಆದ್ದರಿಂದ ಉಪ್ಪಿನಂಗಡಿಯಲ್ಲಿ ಪೂರ್ಣ ಪ್ರಮಾಣದಲ್ಲಿ ವ್ಯವಸ್ಥಿತವಾಗಿ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ನಿರ್ಮಾಣಕ್ಕೆ ಜಾಗ ಮಂಜೂರಾತಿ ಮಾಡುವಂತೆ ದ.ಕ. ಜಿಲ್ಲಾಧಿಕಾರಿಯವರಿಗೆ ಮನವಿ ನೀಡಲಾಗಿದೆ.
ಉಪ್ಪಿನಂಗಡಿಯು ಮಂಗಳೂರು, ಬೆಂಗಳೂರು, ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಪುತ್ತೂರು ಮುಂತಾದ ಪ್ರಮುಖ ನಗರಗಳಿಗೆ ನೇರ ಸಂಪರ್ಕ ಕಲ್ಪಿಸುವ ಪಟ್ಟಣವಾಗಿದ್ದು, ಇಲ್ಲಿ ವ್ಯವಸ್ಥಿತ ಬಸ್ ನಿಲ್ದಾಣದ ಕೊರತೆ ಇದೆ. ಆದ್ದರಿಂದ ಇಲ್ಲಿಗೆ ಸುಸಜ್ಜಿತ ಬಸ್ ನಿಲ್ದಾಣದ ಅಗತ್ಯ ಇದ್ದು, ಇದಕ್ಕೆ ಜಾಗ ಮಂಜೂರು ಮಾಡುವಂತೆ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ
ಸಮಿತಿಯ ಸದಸ್ಯ ಜಿ. ಕೃಷ್ಣರಾವ್ ಅರ್ತಿಲ ಮತ್ತು ಸಾಮಾಜಿಕ ಕಾರ್ಯಕರ್ತ ಅಶ್ರಫ್ ಬಸ್ತಿಕ್ಕಾರ್ ದ. ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ಉಪ್ಪಿನಂಗಡಿಯಲ್ಲಿ ಬಸ್ ನಿಲ್ದಾಣ ನಿರ್ಮಾಣ ಮಾಡಲು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ 2 ಕಡೆಯಲ್ಲಿ ಸೂಕ್ತವಾದ ಜಾಗ ಇದ್ದು, ಇದನ್ನು ಪರಿಶೀಲನೆ ನಡೆಸಿ ಮಂಜೂರಾತಿ ನೀಡಿ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ನಿರ್ಮಾಣ ಮಾಡಲು ಮೀಸಲಿಡುವಂತೆ ಮನವಿಯಲ್ಲಿ ಆಗ್ರಹಿಸಲಾಗಿದೆ.
ಸ್ಥಳ ಪರಿಶೀಲನೆಗೆ ಸೂಚನೆ:
ಮನವಿ ಸ್ವೀಕರಿಸಿ ಪೂರಕವಾಗಿ ಸ್ಪಂದಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಪುತ್ತೂರು ಉಪ ವಿಭಾಗಾಧಿಕಾರಿ ಜುಬಿನ್ ಮಹಾಪಾತ್ರ ಅವರಿಗೆ ಸ್ಥಳ ಪರಿಶೀಲನೆ ನಡೆಸಿ, ವರದಿ ಒಪ್ಪಿಸುವಂತೆ ಆದೇಶ ನೀಡಿದರು.