ಪುತ್ತೂರು: ಪುತ್ತೂರು ತಾಲೂಕಿನ ಖಾಸಗಿ ಮತ್ತು ಸರಕಾರಿ ಆಸ್ಪತ್ರೆಗಳಲ್ಲಿ ಯಶಸ್ವಿನಿ ಯೋಜನೆ ಫಲಾನುಭವಿಗಳಿಗೆ ಚಿಕಿತ್ಸೆಗೆ ಅವಕಾಶ ಕಲ್ಪಿಸುವಂತೆ ಒತ್ತಾಯಿಸಿ ಚಿಕ್ಕಮುಡ್ನೂರು ಕಲಿಯುಗ ಸೇವಾ ಸಮಿತಿ ದ.ಕ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮತ್ತು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಮನವಿ ಸಲ್ಲಿಸಿದೆ.
ಪುತ್ತೂರಿನ ಜನತೆ ಈ ಯೋಜನೆಯ ಚಿಕಿತ್ಸೆ ಪಡೆದುಕೊಳ್ಳಲು ಜಿಲ್ಲಾ ಕೇಂದ್ರದ ಆಸ್ಪತ್ರೆಗಳಿಗೆ ಹೋಗಬೇಕಾಗಿದೆ. ಪುತ್ತೂರು ಹೊರತುಪಡಿಸಿ ಇತರ ತಾಲೂಕು ಕೇಂದ್ರಗಳಲ್ಲಿ ಅಲ್ಲಿನ ಜನರಿಗೆ ತಾಲೂಕು ಮಟ್ಟದ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳಲು ವ್ಯವಸ್ಥೆಗಳಿದ್ದು ಪುತ್ತೂರಿನಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಯಶಸ್ವಿನಿ ಯೋಜನೆ ಫಲಾನುಭವಿಗಳಿಗೆ ಚಿಕಿತ್ಸೆ ಪಡೆಯುವ ಸೌಲಭ್ಯ ಇರುವುದಿಲ್ಲ. ಮಾತ್ರವಲ್ಲದೆ ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲೂ ಈ ಯೋಜನೆಯ ಸೌಲಭ್ಯ ಪಡೆಯಲು ಅವಕಾಶ ಇರುವುದಿಲ್ಲ. ಇದರಿಂದ ಜನರಿಗೆ ತೊಂದರೆ ಆಗಿದ್ದು ಪುತ್ತೂರಿನ ಸರಕಾರಿ ಆಸ್ಪತ್ರೆ ಸೇರಿದಂತೆ ಖಾಸಗಿ ಆಸ್ಪತ್ರೆಗಳಲ್ಲಿ ಯಶಸ್ವಿನಿ ಯೋಜನೆ ಫಲಾನುಭವಿಗಳಿಗೆ ಚಿಕಿತ್ಸೆಗೆ ಅವಕಾಶ ಕಲ್ಪಿಸುವಂತೆ ಮನವಿಯಲ್ಲಿ ಹೇಳಲಾಗಿದೆ.