ರಾಮಕುಂಜ: ಗ್ರಾಮ ಪಂಚಾಯತಿ ರಾಮಕುಂಜ, ಪ್ರಾಥಮಿಕ ಆರೋಗ್ಯ ಕೇಂದ್ರ ಕೊೖಲ, ರೋಟರಿ ಕ್ಲಬ್ ಪುತ್ತೂರು ಕಣ್ಣಿನ ಆಸ್ಪತ್ರೆ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಪುತ್ತೂರು, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) ಮಂಗಳೂರು, ಡಾ.ಪಿ.ದಯಾನಂದ ಪೈ ಹಾಗೂ ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್, ಸೆಂಚುರಿ ಗ್ರೂಪ್ ಬೆಂಗಳೂರು ಇವರ ಜಂಟಿ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ ಜು.20ರಂದು ರಾಮಕುಂಜ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.
ಕೊೖಲ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶಿಶಿರ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮನುಷ್ಯನ ದೇಹದಲ್ಲಿ ಇರುವ ಪ್ರಮುಖ ಅಂಗಗಳಲ್ಲಿ ಕಣ್ಣು ಒಂದು ಆಗಿದೆ. ಕಣ್ಣಿನ ಆರೋಗ್ಯವನ್ನು ಕಾಪಾಡುವುದು ಅತ್ಯಂತ ಮಹತ್ವ, ವಯೋಸಹಜವಾಗಿ ಕಣ್ಣಿನಲ್ಲಿ ದೋಷ ಕಾಣಿಸಿಕೊಳ್ಳುವುದು ಸರ್ವೆ ಸಾಮಾನ್ಯ, ತೊಂದರೆಗಳು ಆಗುತ್ತಿರುವುದು ಗಮನಕ್ಕೆ ಬಂದ ತಕ್ಷಣ ನುರಿತ ವೈದ್ಯಾಧಿಕಾರಿಗಳನ್ನು ಭೇಟಿಯಾಗಿ ಅವರ ಸಲಹೆಯಂತೆ ಚಿಕಿತ್ಸೆಯನ್ನು ಪಡೆದುಕೊಳ್ಳುವಂತೆ ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಮಕುಂಜ ಗ್ರಾಮ ಪಂಚಾಯಿತಿನ ಅಧ್ಯಕ್ಷೆ ಸುಚೇತಾ ಬಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರಾಮಕುಂಜ ಗ್ರಾಮ ಪಂಚಾಯತಿನ ಅಭಿವೃದ್ಧಿ ಅಧಿಕಾರಿ ಮೋಹನಕುಮಾರ ಜಿ ಉಪಸ್ಥಿತರಿದ್ದರು. ಶಿಬಿರದಲ್ಲಿ ಉಚಿತ ಕಣ್ಣಿನ ತಪಾಸಣೆ, ಅಗತ್ಯ ಉಳ್ಳವರಿಗೆ ಉಚಿತ ಕಣ್ಣಿನ ಪೊರೆ ಚಿಕಿತ್ಸೆ, ರಿಯಾಯಿತಿ ದರದಲ್ಲಿ ಕನ್ನಡಕಗಳ ವಿತರಣೆ ಮಾಡಲಾಯಿತು. ಸುಮಾರು 100 ಜನ ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.