ಎನ್. ಎಸ್. ಎಸ್. ಶಿಬಿರಗಳು ವಿದ್ಯಾರ್ಥಿಗಳಿಗೆ ಓದಿನ ಜೊತೆಗೆ ಸಮಾಜವನ್ನು ಪರಿಚಯಿಸುತ್ತದೆ: ಲಕ್ಷ್ಮೀಕಾಂತ ರೈ ಅನಿಕೂಟೇಲ್
ಪುತ್ತೂರು: ವಿದ್ಯಾರ್ಥಿಗಳು ಪರಿಪೂರ್ಣವಾಗಿ ಬೆಳೆಯಲು, ವ್ಯಕ್ತಿತ್ವ ವೃದ್ಧಿಸಿಕೊಳ್ಳಲು, ಓದುವುದರ ಜೊತೆಗೆ ಸಮಾಜದ ಪರಿಸ್ಥಿತಿಯನ್ನು ತಿಳಿದುಕೊಂಡು ಅಲ್ಲಿ ವಹಿಸಬೇಕಾದ ಜವಾಬ್ದಾರಿಯನ್ನು ಅರಿಯಲು ರಾಷ್ಟ್ರೀಯ ಸೇವಾ ಯೋಜನೆಯಿಂದ ನಡೆಸುವ ಏಳು ದಿನಗಳ ವಾರ್ಷಿಕ ವಿಶೇಷ ಶಿಬಿರ ಪೂರಕವಾಗಿದೆ. ವಿದ್ಯಾರ್ಥಿಗಳ ಭವಿಷ್ಯದ ಜೀವನವನ್ನು ಸುಭದ್ರವಾಗಿ ರೂಪಿಸಿಕೊಳ್ಳಲು ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ಒಂದು ರಹಾದಾರಿಯಾಗಿದೆ ಎಂದು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮಾಧಿಕಾರಿ ಲಕ್ಷ್ಮೀಕಾಂತ ರೈ ಅನಿಕೂಟೇಲ್ ಹೇಳಿದರು. ಅವರು ಒಡ್ಯದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಏಳು ದಿನಗಳ ವಾರ್ಷಿಕ ವಿಶೇಷ ಶಿಬಿರದ ಕುರಿತಾದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಏಳು ದಿನಗಳ ವಾರ್ಷಿಕ ವಿಶೇಷ ಶಿಬಿರದ ರೂಪುರೇಷೆಗಳನ್ನು ವಿವರಿಸಿದರು. ಈ ಪೂರ್ವಬಾವಿ ಸಬಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಶ್ರೀಮತಿ ಪ್ರೇಮ ಪಡ್ಯಂಬೆಟ್ಟು ವಹಿಸಿದರು. ಮುಖ್ಯ ಗುರುಗಳಾದ ಜನಾರ್ಧನ ಅಲ್ಜಾರು ಪ್ರಾಸ್ತವಿಕವಾಗಿ ಮಾತನಾಡಿದರು. ಕಾರ್ಯಕ್ರಮದ ಕುರಿತು ಸಭೆಯಲ್ಲಿ ಚರ್ಚೆಯನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಊರ ಪ್ರಮುಖರಾದ ಶ್ರೀಕೃಷ್ಣ ಭಟ್ ಬಟ್ಯಮೂಲೆ, ಶಂಕರ್ ರೈ ಬಾಳೆಮೂಲೆ, ರಮಾನಾಥ ರೈ ಪಡ್ಯಂಬೆಟ್ಟು ಸೇರಿದಂತೆ ಹಲವು ಗಣ್ಯರು ಭಾಗವಹಿಸಿ ಸಲಹೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ. ಸದಸ್ಯರು, ಪೋಷಕರು ಹಾಗೂ ಶಿಕ್ಷಕ ವರ್ಗ ಉಪಸ್ಥಿತರಿದ್ದರು.
ಜು.30- ಆ. 5ರವರೆಗೆ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ- 2023-24:
ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಈ ವರ್ಷದ ಏಳು ದಿನಗಳ ವಾರ್ಷಿಕ ವಿಶೇಷ ಶಿಬಿರ-2023-24 ಜುಲೈ 30ರಿಂದ ಆಗಸ್ಟ್ 5ರವರೆಗೆ ಒಡ್ಯದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯು ಜು. 30ರಂದು ಮದ್ಯಾಹ್ನ 3.30ಕ್ಕೆ ನಡೆಯಲಿದ್ದು, ಪುತ್ತೂರು ತಾಲೂಕು ಅರೋಗ್ಯಾಧಿಕಾರಿ ಡಾ. ದೀಪಕ್ ರೈ ಉದ್ಘಾಟಿಸಲಿದ್ದು, ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ಸುರೇಂದ್ರ ಕಿಣಿ ಅಧ್ಯಕ್ಷತೆ ವಹಿಸಲಿದ್ದು, ವಿವಿಧ ಗಣ್ಯರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಅದೇ ರೀತಿ ಈ ಏಳು ದಿನಗಳ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭವು ಆಗಸ್ಟ್ 5ರಂದು ನಡೆಯಲಿದ್ದು, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಲೋಕೇಶ್ ಎಸ್. ಆರ್. ಸಮಾರೋಪ ಭಾಷಣ ಮಾಡಲಿದ್ದು, ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಸಂಚಾಲಕರಾದ ವಿಜಯನಾರಾಯಣ ಕೆ. ಎಂ. ಅಧ್ಯಕ್ಷತೆ ವಹಿಸಲಿದ್ದು, ವಿವಿಧ ಗಣ್ಯರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.