ನೆಲ್ಯಾಡಿ: ಭೂಕುಸಿತ ಸಂಭವಿಸುತ್ತಿರುವ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಸಕಲೇಶಪುರ ತಾಲೂಕು ವ್ಯಾಪ್ತಿಯ ಶಿರಾಡಿ ಘಾಟ್‌ನ ದೊಡ್ಡತಪ್ಲುಗೆ ಆ.3ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೆಸರಲ್ಲೇ ಗುಡ್ಡ ಕುಸಿತದ ಜಾಗ ಪರಿಶೀಲಿಸಿದ ಸಿದ್ದರಾಮಯ್ಯ ಅವರು, ಮಣ್ಣು ತೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದ ಎಸ್‌ಡಿಆರ್‌ಎಫ್ ತಂಡದೊಂದಿಗೆ ಕೆಲ ಹೊತ್ತು ಚರ್ಚಿಸಿದರು. ಘಟನೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಸಿದ್ದರಾಮಯ್ಯ ಅವರು ಸಮಸ್ಯೆ ನಿವಾರಣೆಗೆ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು. ರಸ್ತೆ ಕಾಮಗಾರಿ ಕುರಿತಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಮುಖ್ಯಮಂತ್ರಿಯವರಿಗೆ ಮಾಹಿತಿ ನೀಡಿದರು.
ಅಧಿಕಾರಿಗೆ ತರಾಟೆ:
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ವಿಲಾಸ್ ಅವರನ್ನು ತರಾಟೆಗೆ ತೆಗೆದುಕೊಂಡ ಸಿದ್ದರಾಮಯ್ಯ ಅವರು, ಹಣ ಉಳಿಸುವ ಉದ್ದೇಶದಿಂದ ಕಡಿಮೆ ಭೂಮಿ ಸ್ವಾಧಿನ ಮಾಡಿಕೊಂಡಿದ್ದು, ಖರ್ಚು ಉಳಿಸಲು 90 ಡಿಗ್ರಿಯಲ್ಲಿ ಗುಡ್ಡಗಳನ್ನು ಕತ್ತರಿಸಿದ್ದೀರಿ. ಇದು ಅವೈಜ್ಞಾನಿಕ ಕಾಮಗಾರಿ ಅಲ್ಲವೇ ? ಗುಡ್ಡಗಳನ್ನು 30 ರಿಂದ 45 ಡಿಗ್ರಿಯಲ್ಲಿ ಕತ್ತರಿಸಿ ತಡೆಗೋಡೆ ನಿರ್ಮಿಸಿದ್ದರೆ ಮಣ್ಣು ಕುಸಿತವನ್ನು ತಡೆಯಬಹುದಿತ್ತಲ್ಲವೇ ?, ಕಾಮಗಾರಿ ಆರಂಭಿಸುವ ಮೊದಲು ಮಣ್ಣಿನ ಗುಣಮಟ್ಟ ಪರೀಕ್ಷೆ ನಡೆಸಿದ್ದೀರಾ ?, ಅದಕ್ಕೆ ತಕ್ಕಂತೆ ಮುಂಜಾಗ್ರತಾ ಕ್ರಮ ಏಕೆ ವಹಿಸಿಲ್ಲ ಎಂದು ಪ್ರಶ್ನಿಸಿದ್ದಾರೆ.
ಕೇಂದ್ರ ಸಚಿವರಿಗೆ ಪತ್ರ:
ಸಕಲೇಶಪುರ ಭಾಗದಲ್ಲಿ ವಾಡಿಕೆಗಿಂತ ಈ ಬಾರಿ ಶೇ.65ರಷ್ಟು ಹೆಚ್ಚು ಮಳೆ ಆಗಿದೆ. ಶಿರಾಡಿ ಘಾಟ್‌ನಲ್ಲಿ ಅವೈಜ್ಞಾನಿಕ ಕಾಮಗಾರಿಯಿಂದ ಭೂಕುಸಿತವಾಗುತ್ತಿದೆ. ಸ್ಥಳೀಯರ ಅಭಿಪ್ರಾಯವನ್ನು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರಿಗೆ ಪತ್ರ ಬರೆದು ತಿಳಿಸುತ್ತೇನೆ. ದೆಹಲಿಗೆ ಹೋದಾಗ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರಿಗೆ ಮನವರಿಕೆ ಮಾಡುವೆ ಎಂದು ಹೇಳಿದ್ದಾರೆ. ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ, ಗೃಹ ಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇ ಗೌಡ, ಶಾಸಕ ಸಿಮೆಂಟ್ ಮಂಜು, ಜಿಲ್ಲಾಧಿಕಾರಿ ಸಿ.ಸತ್ಯಭಾಮಾ, ಜಿಲ್ಲಾ ಪಂಚಾಯಿತಿ ಸಿಇಒ ಬಿ.ಆರ್.ಪೂರ್ಣಿಮಾ ಉಪಸ್ಥಿತರಿದ್ದರು.