ಪುತ್ತೂರು:ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ನೂತನ ಸದಸ್ಯರೋರ್ವರ ಆಯ್ಕೆಗಾಗಿ ಅ.21ರಂದು ನಡೆಯಲಿರುವ ಉಪಚುನಾವಣೆಗೆ ಸಂಬಂಧಿಸಿ ಒಟ್ಟು ಐದು ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದ ಅ.3ರಂದು ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಬೊಟ್ಯಾಡಿ, ಕಾಂಗ್ರೆಸ್ ಅಭ್ಯರ್ಥಿಯಾಗಿ ಎಸ್.ರಾಜು ಪೂಜಾರಿ, ಎಸ್‌ಡಿಪಿಐ ಅಭ್ಯರ್ಥಿಯಾಗಿ ಅನ್ವರ್ ಸಾದತ್ ಬಜತ್ತೂರು ಹಾಗೂ ಎಸ್‌ಡಿಪಿಐನ ಮುಹಮ್ಮದ್ ರಿಯಾಝ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ.ಅವರಿಗೆ ನಾಮಪತ್ರ ಸಲ್ಲಿಸಿದರು.
ಸ್ವತಂತ್ರ ಅಭ್ಯರ್ಥಿಯಾಗಿ ದಿನಕರ ಉಳ್ಳಾಲ ಅವರು ಈ ಮೊದಲೇ ನಾಮಪತ್ರ ಸಲ್ಲಿಸಿದ್ದು, ಒಟ್ಟು ಐದು ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದಂತಾಗಿದೆ.ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಎರಡು ಹಾಗೂ ಕಾಂಗ್ರೆಸ್‌ನ ಎಸ್.ರಾಜು ಪೂಜಾರಿ ಅವರು 3 ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಬಿಜೆಪಿಯ ಕಿಶೋರ್ ಬೊಟ್ಯಾಡಿ ನಾಮಪತ್ರ:
ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಅವರು ನಾಮಪತ್ರ ಸಲ್ಲಿಕೆ ವೇಳೆ ದ.ಕ.ಸಂಸದ ಕ್ಯಾ|ಬ್ರಿಜೇಶ್ ಚೌಟ, ಶಾಸಕರಾದ ಭಾಗೀರಥಿ ಮುರುಳ್ಯ, ಯಶ್‌ಪಾಲ್ ಸುವರ್ಣ, ಪ್ರತಾಪ್‌ಸಿಂಹ ನಾಯಕ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಂದಾಪುರ,ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಉಪಸ್ಥಿತರಿದ್ದರು.
ಕಾಂಗ್ರೆಸ್‌ನ ರಾಜು ಪೂಜಾರಿ ನಾಮಪತ್ರ:
ಕಾಂಗ್ರೆಸ್ ಅಭ್ಯರ್ಥಿ ಎಸ್.ರಾಜು ಪೂಜಾರಿ ಬೈಂದೂರು ಅವರ ನಾಮಪತ್ರ ಸಲ್ಲಿಕೆ ವೇಳೆ ಮಾಜಿ ಸಚಿವರಾದ ಬಿ.ರಮಾನಾಥ ರೈ, ಜಯಪ್ರಕಾಶ್ ಹೆಗ್ಡೆ, ವಿಧಾನ ಪರಿಷತ್ ಶಾಸಕರಾದ ಮಂಜುನಾಥ ಭಂಡಾರಿ, ಐವನ್ ಡಿ’ಸೋಜ ಭಾಗವಹಿಸಿದ್ದರು.
ಎಸ್‌ಡಿಪಿಐನ ಅನ್ವರ್ ಸಾದತ್:
ಎಸ್‌ಡಿಪಿಐ ಅಭ್ಯರ್ಥಿ ಅನ್ವರ್ ಸಾದತ್ ನಾಮಪತ್ರ ಸಲ್ಲಿಕೆ ಸಂದರ್ಭ ಪಕ್ಷದ ರಾಜ್ಯ ಸಮಿತಿ ಸದಸ್ಯ ಅಥಾವುಲ್ಲಾ ಜೋಕಟ್ಟೆ, ಉಡುಪಿ ಜಿಲ್ಲಾ ಸಮಿತಿ ಸದಸ್ಯ ನಝೀರ್ ಉಡುಪಿ, ಬಂಟ್ವಾಳ ಪುರಸಭಾ ಉಪಾಧ್ಯಕ್ಷ ಮೂನಿಶ್ ಅಲಿ, ಅಡ್ಕಾರು ಗ್ರಾ.ಪಂ.ಅಧ್ಯಕ್ಷ ಯಾಸೀನ್ ಅರ್ಕುಳ ಉಪಸ್ಥಿತರಿದ್ದರು.