ಗ್ರಾಮೀಣಾಭಿವೃದ್ಧಿ,ಪಂಚಾಯತ್ ರಾಜ್ ಸಿಬ್ಬಂದಿಗಳಿಂದ ಅನಿರ್ಧಿಷ್ಟ ಮುಷ್ಕರ – ವಿವಿಧ ಬೇಡಿಕೆಗಳ ಈಡೇರಿಕೆಗೆ ಸರಕಾರಕ್ಕೆ ಆಗ್ರಹ

0

*ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಮುಷ್ಕರ
*ಪುತ್ತೂರು,ಕಡಬದಲ್ಲೂ ಗ್ರಾ.ಪಂ.ಗಳಲ್ಲಿ ಸೇವೆ ಸ್ಥಗಿತ
*ಕುಡಿಯುವ ನೀರು, ಬೀದಿ ದೀಪ ಹಾಗೂ ಸ್ವಚ್ಛತೆ ಕಾರ್ಯ ನಿರಾತಂಕ

ಪುತ್ತೂರು: ಅಧಿಕಾರಿ, ನೌಕರರಿಗೆ ಕಾಲ ಕಾಲಕ್ಕೆ ನೀಡಬೇಕಾದ ಭಡ್ತಿಯನ್ನು ಕ್ರಮಬದ್ಧವಾಗಿ ನೀಡುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖಾಧಿಕಾರಿಗಳು, ನೌಕರರು, ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಅನಿರ್ಧಿಷ್ಟಾವಧಿ ಮುಷ್ಕರ ಅ.4ರಂದು ಪ್ರಾರಂಭಗೊಂಡಿದೆ.


ಗ್ರಾಮ ಆಡಳಿತಾಧಿಕಾರಿಗಳ ಅನಿರ್ಧಿಷ್ಟಾವಧಿ ಮುಷ್ಕರ ಮುಗಿದು ಅ.4ರಿಂದ ಎಂದಿನಂತೆ ಕೆಲಸ ಕಾರ್ಯಗಳು ಆರಂಭಗೊಂಡ ಬೆನ್ನಲ್ಲೇ ಇದೀಗ ಗ್ರಾಮ ಪಂಚಾಯತ್ ನೌಕರರೂ ಅನಿರ್ಧಿಷ್ಟ ಮುಷ್ಕರ ಆರಂಭಿಸಿರುವುದರಿಂದಾಗಿ ಪುತ್ತೂರು,ಕಡಬ ತಾಲೂಕಿನಲ್ಲಿ 44 ಗ್ರಾಮ ಪಂಚಾಯತ್‌ಗಳಲ್ಲಿಯೂ ಕುಡಿಯುವ ನೀರು, ಬೀದಿ ದೀಪ, ಸ್ವಚ್ಛತೆ ಹೊರತು ಇತರೆಲ್ಲಾ ಸೇವೆಗಳು ಸ್ಥಗಿತಗೊಂಡಿದೆ.


ರಾಜ್ಯದ ಶೇ.68ರಿಂದ 7೦ರಷ್ಟು ಜನರಿಗೆ ಸ್ಥಳೀಯ ಸಂಸ್ಥೆಯಾಗಿರುವ ಗ್ರಾಮ ಪಂಚಾಯತ್‌ಗಳ ಮೂಲಕ ಶೇ.70ರಷ್ಟು ಸೇವೆಗಳನ್ನು ನೀಡಲಾಗುತ್ತಿದೆ. ಈ ವ್ಯವಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು, ಗ್ರಾಮ ಪಂಚಾಯತ್‌ನ ಎಲ್ಲ ಪಂಚ ನೌಕರರಾದ ಪಿಡಿಒ, ಕರ ವಸೂಲಿಗಾರರು, ಜಲಗಾರರು, ಕಚೇರಿ ಸಹಾಯಕರು, ಸ್ವಚ್ಛತಾಗಾರರು ಕಾರ್ಯನಿರ್ವಹಣೆಯಲ್ಲಿ ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನು ಪರಿಹರಿಸುವಂತೆ ಹಾಗೂ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸರಕಾರ ಮತ್ತು ಇಲಾಖೆಗೆ ಹಲವಾರು ವರ್ಷಗಳಿಂದ ಮನವಿ ಸಲ್ಲಿಸುತ್ತಿದ್ದರೂ ಯಾವುದೇ ಸ್ಪಂದನೆ ದೊರೆತಿಲ್ಲ. ಎಲ್ಲ ಸಮಸ್ಯೆಗಳಿಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುತ್ತಿದೆ ಎಂದು ಸರಕಾರ ಮತ್ತು ಇಲಾಖೆಯ ಧೋರಣೆಯನ್ನು ಖಂಡಿಸಿ ಹಾಗೂ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ಅನಿರ್ಧಿಷ್ಟ ಮುಷ್ಕರ ನಡೆಸುವ ಕುರಿತು ಪ್ರತಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿಯನ್ನೂ ಸಲ್ಲಿಸಿದ್ದಾರೆ. ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‌ಗಳ ಜನಪ್ರತಿನಿಧಿಗಳ ಒಕ್ಕೂಟ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಲೆಕ್ಕಸಹಾಯಕರು, ಗ್ರೇಡ್-1 ಮತ್ತು ಗ್ರೇಡ್-2 ಕಾರ್ಯದರ್ಶಿಗಳು, ಗ್ರಾಮ ಪಂಚಾಯತ್‌ನ ಎಲ್ಲಾ ಪಂಚ ನೌಕರರಾದ ಕರವಸೂಲಿಗಾರರು, ಜಲಗಾರರು, ಕಛೇರಿ ಸಹಾಯಕರು ಸೇರಿದಂತೆ ಸುಮಾರು 30 ಸಾವಿರಕ್ಕೂ ಅಧಿಕ ಮಂದಿ ಮುಷ್ಕರದಲ್ಲಿ ಭಾಗವಹಿಸಿದ್ದರು.

ಪುತ್ತೂರು,ಕಡಬದಲ್ಲೂ ಗ್ರಾ.ಪಂ.ಗಳಲ್ಲಿ ಸೇವೆ ಸ್ಥಗಿತ: ಪುತ್ತೂರು ಮತ್ತು ಕಡಬ ತಾಲೂಕಿನ ಗ್ರಾಮ ಪಂಚಾಯತ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳೂ ಮುಷ್ಕರದಲ್ಲಿ ಪಾಲ್ಗೊಂಡಿದ್ದಾರೆ.ಗ್ರಾಮ ಪಂಚಾಯತ್‌ಗಳಲ್ಲಿ ಕುಡಿಯುವ ನೀರು, ಬೀದಿ ದೀಪ ಹಾಗೂ ಸ್ವಚ್ಛತೆ ಹೊರತು ಪಡಿಸಿ ಬಾಪೂಜಿ ಸೇವೆ ಹಾಗೂ ಕಛೇರಿಯ ಎಲ್ಲಾ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸಿ ಮುಷ್ಕರ ನಡೆಸುತ್ತಿರುವುದರಿಂದ ಗ್ರಾಮ ಪಂಚಾಯತ್‌ಗಳಲ್ಲಿ ವಿವಿಧ ಸೇವೆಗಳು ಸ್ಥಗಿತಗೊಂಡು ಜನ ಸಮಸ್ಯೆ ಎದುರಿಸುವಂತಾಗಿದೆ.


ಪರಿಷತ್‌ನಲ್ಲಿ ಪ್ರಸ್ತಾಪ ಛಲವಾದಿ ಭರವಸೆ: ಶಾಸಕರಾದ ಬಿ.ಪಿ.ಹರೀಶ್, ಕರಾವಳಿ ಶಾಸಕರ ಪರವಾಗಿ ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಭೇಟಿ ನೀಡಿ ಪ್ರತಿಭಟನಾನಿರತರ ಮನವಿ ಸ್ವೀಕರಿಸಿದರು. ಮನವಿ ಸ್ವೀಕರಿಸಿದ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಮಾತನಾಡಿ, ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖಾಧಿಕಾರಿಗಳು, ನೌಕರರು, ಸದಸ್ಯರ ಒಕ್ಕೂಟದ ಬೇಡಿಕೆಗಳನ್ನು ವಿಧಾನ ಪರಿಷತ್‌ನಲ್ಲಿ ಪ್ರಸ್ತಾಪಿಸಲಾಗುವುದು. ಅಲ್ಲಿ ಪರಿಹಾರ ದೊರೆಯದಿದ್ದಲ್ಲಿ ಬೆಳಗಾವಿ ಅಧಿವೇಶನದಲ್ಲಿ ಪ್ರಸ್ತಾಪಿಸಿ, ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.

ಮಾತುಕತೆ ವಿಫಲ – ಮುಷ್ಕರ ಮುಂದುವರಿಕೆ
ಅ.4ರ ಬೆಳಿಗ್ಗೆಯಿಂದಲೇ ಮುಷ್ಕರ ಆರಂಭಗೊಂಡಿದ್ದು ಇಲಾಖೆಯ ಮುಖ್ಯ ಕಾರ್ಯದರ್ಶಿ ಹಾಗೂ ಗ್ರಾಮೀಣಾಭಿವೃದ್ಧಿ ಪಂಚಾಯತ್‌ರಾಜ್ ಇಲಾಖೆಯ ಆಯುಕ್ತರು ಭೇಟಿ ನೀಡಿ ಮನವಿ ಸ್ವೀಕರಿಸಿದರು. ನಮ್ಮ ಸಮಸ್ಯೆಗಳನ್ನು ಪರಿಶೀಲನೆ ನಡೆಸುವಂತೆ ಅವರಲ್ಲಿ ಆಗ್ರಹಿಸಲಾಗಿದ್ದು ಅದಕ್ಕೆ ಅವರು ಒಪ್ಪಿಗೆ ಸೂಚಿಸಿಲ್ಲ. ಹೀಗಾಗಿ ವಿವಿಧ ಸಮಿತಿಗಳ ರಾಜ್ಯದ ಅಧ್ಯಕ್ಷರೊಂದಿಗೆ ಸಭೆ ಕರೆಯುವಂತೆ ಮನವಿ ಮಾಡಲಾಗಿದೆ. ಅದರಂತೆ ಹಿರಿಯ ಅಧಿಕಾರಿಗಳು ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಆದರೆ ನಮ್ಮ ಬೇಡಿಕೆಗಳ ಬಗ್ಗೆ ಸೂಕ್ತ ಭರವಸೆ ದೊರೆಯದೇ ಸಭೆ ವಿಫಲವಾಗಿರುವುದರಿಂದ ಅ.5ರಂದೂ ಮುಷ್ಕರ ಮುಂದುವರಿಯಲಿದೆ. ಬೆಳಿಗ್ಗೆ 9 ಗಂಟೆಯಿಂದ ಸಂಜೆ 5.30ರ ತನಕ ಮುಷ್ಕರ ನಡೆಯಲಿದೆ.
-ನಾಗೇಶ್ ಎಂ.,ಅಧ್ಯಕ್ಷರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ದ.ಕ.ಜಿಲ್ಲೆ

LEAVE A REPLY

Please enter your comment!
Please enter your name here