ಪೆರಾಬೆ: ಪೆರಾಬೆ ಗ್ರಾ.ಪಂ.ನ ತ್ರೈಮಾಸಿಕ ಕೆಡಿಪಿ ಸಭೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಗ್ರಾ.ಪಂ.ಅಧ್ಯಕ್ಷೆ ಸಂಧ್ಯಾ ಕೆ.,ಅವರು ಮಾತನಾಡಿ, ಗ್ರಾಮ ಪಂಚಾಯತ್ ಮಟ್ಟದಲ್ಲಿ ತ್ರೈಮಾಸಿಕ ಕೆಡಿಪಿ ಸಭೆಯನ್ನು ಪರಿಣಾಮಕಾರಿಯಾಗಿ ನಡೆಸುವಂತೆ ಸರಕಾರದಿಂದ ಸುತ್ತೋಲೆ ಬಂದಿದೆ. ಅದರಂತೆ ಎಲ್ಲಾ ಇಲಾಖೆಗಳಿಗೆ ಕೆಡಿಪಿ ಸಭೆಯಲ್ಲಿ ಭಾಗವಹಿಸುವಂತೆ ನೋಟಿಸ್ ನೀಡಿದ್ದರೂ ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಸಾಮಾಜಿಕ ಅರಣ್ಯ, ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗ, ಗ್ರಾಮೀಣ ಕುಡಿಯುವ ನೀರು ಮತ್ತು ನೈಮರ್ಲ್ಯ ಇಲಾಖೆ, ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ, ಕೃಷಿ ಉತ್ಪನ್ನ ಮಾರುಕಟ್ಟೆ, ಅರಣ್ಯ ಇಲಾಖೆ, ಗ್ರಾಮ ಆಡಳಿತಾಧಿಕಾರಿ, ಆಹಾರ ನಿರೀಕ್ಷಕರು ಸಭೆಗೆ ಗೈರು ಹಾಜರಿಯಾಗಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ಇಲಾಖೆಗಳಲ್ಲಿ ಸಿಬ್ಬಂದಿ ಕೊರತೆ ಇರಬಹುದು. ಆದರೆ ಇಲಾಖಾ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳದೇ ಇದ್ದಲ್ಲಿ ಕೆಡಿಪಿ ಸಭೆಯನ್ನು ಗ್ರಾಮ ಪಂಚಾಯತ್ ಮಟ್ಟದಲ್ಲಿ ಪರಿಣಾಮಕಾರಿಯಾಗಿ ನಡೆಸುವುದು ಅಸಾಧ್ಯ ಎಂದು ಅಭಿಪ್ರಾಯಿಸಿದರು. ಈ ಬಗ್ಗೆ ಚರ್ಚೆ ನಡೆದರು. ಕೆಡಿಪಿ ಸಭೆಗೆ ಇಲಾಖಾಧಿಕಾರಿಗಳ ಗೈರು ಹಾಜರಿ ಬಗ್ಗೆ ಮೇಲಾಧಿಕಾರಿಗಳಿಗೆ ಬರೆಯಲು ನಿರ್ಣಯಿಸಲಾಯಿತು.
ಶಾಲಾ ಕಟ್ಟಡ ದುರಸ್ತಿ ಬಗ್ಗೆ ಚರ್ಚೆ:
ಶಿಕ್ಷಣ ಇಲಾಖೆಗೆ ಸಂಬಂಧಪಟ್ಟಂತೆ ಶಾಲೆಗಳ ಮೂಲ ಸೌಕರ್ಯ, ಶಿಥಿಲಗೊಂಡ ಶಾಲಾ ಕಟ್ಟಡಗಳ ದುರಸ್ತಿ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಗನವಾಡಿ ಕಟ್ಟಡಗಳ ದುರಸ್ತಿ, ವಿಸ್ತರಣೆ ಬಗ್ಗೆಯೂ ಚರ್ಚೆ ನಡೆಯಿತು. ಪೆರಾಬೆ ಮತ್ತು ಸುರುಳಿ ಅಂಗನವಾಡಿ ಕೇಂದ್ರಕ್ಕೆ ಹೊಸ ಕಟ್ಟಡ ನಿರ್ಮಾಣದ ಬಗ್ಗೆ ಸಭೆಯಲ್ಲಿ ಪ್ರಸ್ತಾಪವಾಯಿತು.
ಖಾಯಂ ವೈದ್ಯರು ಇಲ್ಲ:
ಪೆರಾಬೆ ಗ್ರಾಮ ಪಂಚಾಯತ್ ಕೊಯಿಲ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಬರುತ್ತದೆ. ಆದರೆ ಕೊಯಿಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಯಂ ವೈದ್ಯರು ಇಲ್ಲದೆ ಜನರಿಗೆ ಸಮಸ್ಯೆಯಾಗಿದೆ. ಪೆರಾಬೆ ಗ್ರಾಮದಲ್ಲಿಯೂ ಸಿಹೆಚ್‌ಒ ಹುದ್ದೆ ಖಾಲಿ ಇದೆ ಎಂಬ ವಿಚಾರ ಸಭೆಯಲ್ಲಿ ಪ್ರಸ್ತಾಪಗೊಂಡಿತು. ಈ ಬಗ್ಗೆ ಇಲಾಖೆಯ ಗಮನಕ್ಕೆ ತರಲು ನಿರ್ಧರಿಸಲಾಯಿತು.
ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ, ಪಶುಸಂಗೋಪನೆ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಮೆಸ್ಕಾಂ, ಗ್ರಂಥಾಲಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು. ಗ್ರಾ.ಪಂ.ಉಪಾಧ್ಯಕ್ಷೆ ವೇದಾವತಿ ಕೆ., ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಬಿ.ಕೆ.ಕುಮಾರ, ಗ್ರಾ.ಪಂ.ಸದಸ್ಯ ಸಿ.ಎಂ.ಫಯಾಜ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಾಲಿನಿ ಕೆ.ಬಿ.,ಸ್ವಾಗತಿಸಿ ನಿರೂಪಿಸಿದರು. ಸಿಬ್ಬಂದಿಗಳು ಸಹಕರಿಸಿದರು.