ಮಕ್ಕಳ ಪ್ರತಿಭೆಗಳ ಅನಾವರಣಕ್ಕೆ ಶಿಬಿರಗಳು ಪೂರಕ: ತ್ರಿವೇಣಿ ಪಲ್ಲತ್ತಾರು
ಪುತ್ತೂರು: ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಒಂದಲ್ಲ ಒಂದು ಪ್ರತಿಭೆ ಇದ್ದೇ ಇರುತ್ತದೆ. ಮಕ್ಕಳಲ್ಲಿರುವ ಪ್ರತಿಭೆಗಳಿಗೆ ಸರಿಯಾದ ವೇದಿಕೆ ದೊರಕಿಸಿಕೊಡುವ ಮೂಲಕ ಅವರ ಪ್ರತಿಭೆಗಳ ಅನಾವರಣಗೊಳಿಸುವಲ್ಲಿ ಇಂತಹ ಬೇಸಿಗೆ ಶಿಬಿರಗಳು ಪೂರಕವಾಗಲಿದೆ ಎಂದು ಒಳಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು ಹೇಳಿದರು.
ಅವರು ಒಳಮೊಗ್ರು ಗ್ರಾಮ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ರಾಜ್ ಇಲಾಖೆ, ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಂಸ್ಥೆ ಇವುಗಳ ಆಶ್ರಯದಲ್ಲಿ ಮೇ.14ರಿಂದ16 ರ ತನಕ ನಡೆಯಲಿರುವ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವನ್ನು ಮೇ.೧೪ ರಂದು ಒಳಮೊಗ್ರು ಗ್ರಾಪಂ ಸಭಾಭವನದಲ್ಲಿ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಮೂರು ದಿನಗಳ ನಡೆಯುವ ಈ ಶಿಬಿರದಲ್ಲಿ ಯೋಗ, ಕ್ರಾಪ್ಟ್ ಸೇರಿದಂತೆ ಹಲವು ವಿಷಯಗಳ ಬಗ್ಗೆ ತರಬೇತಿ ನೀಡಲಾಗುತ್ತಿದ್ದು ಮಕ್ಕಳು ಇದರ ಪ್ರಯೋಜನ ಪಡೆದುಕೊಳ್ಳುವ ಮೂಲಕ ತಮ್ಮಲ್ಲಿರುವ ಪ್ರತಿಭೆಗಳನ್ನು ಸಮಾಜಕ್ಕೆ ತೋರಿಸುವ ಕೆಲಸವನ್ನು ಮಾಡಬೇಕು ಎಂದು ಹೇಳಿದ ತ್ರಿವೇಣಿ ಪಲ್ಲತ್ತಾರುರವರು ಶಿಬಿರದಲ್ಲಿ ಭಾಗವಹಿಸಿದ ಎಲ್ಲಾ ಮಕ್ಕಳಿಗೆ ಶುಭ ಹಾರೈಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಕೈಕಾರ ಹಿರಿಯ ಪ್ರಾಥಮಿಕ ಶಾಲಾ ಮುಖ್ಯಗುರು, ಯೋಗ ಶಿಕ್ಷಕ ರಾಮಣ್ಣ ರೈಯವರು ಮಾತನಾಡಿ, ಯಾವುದೇ ಪ್ರತಿಭೆಗಳಿಗೆ ಸರಿಯಾದ ಮಾರ್ಗದರ್ಶನ ಹಾಗೂ ತರಬೇತು ದೊರೆತಾಗ ಪ್ರತಿಭೆಗಳು ಇನ್ನಷ್ಟು ಬೆಳೆಯಲು ಸಾಧ್ಯವಿದೆ. ಒಬ್ಬ ವ್ಯಕ್ತಿ ರೋಗಮುಕ್ತನಾಗಿ ಬದುಕಲು ಯೋಗ ಅತ್ಯಂತ ಮುಖ್ಯವಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿ ಕೂಡ ಯೋಗವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿ ಶುಭ ಹಾರೈಸಿದರು. ಗ್ರಾಮ ಪಂಚಾಯತ್ ಸದಸ್ಯೆ ಶಾರದಾ ಸಂದರ್ಭೋಚಿತವಾಗಿ ಮಾತನಾಡಿ ಶುಭ ಹಾರೈಸಿದರು.
ಸ್ಮೃತಿ ಪಲ್ಲತ್ತಾರು ಪ್ರಾರ್ಥಿಸಿದರು. ಗ್ರಂಥಾಲಯ ಮೇಲ್ವಿಚಾರಕಿ ಸಿರೀನಾ ಸ್ವಾಗತಿಸಿ, ವಂದಿಸಿ ಕಾರ್ಯಕ್ರಮ ನಿರೂಪಿಸಿದರು.
3 ದಿನಗಳ ಶಿಬಿರ
ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದಲ್ಲಿ 20 ಕ್ಕೂ ಅಧಿಕ ಮಕ್ಕಳು ಭಾಗವಹಿಸಿದ್ದು ಶಿಬಿರವು ಮೂರು ದಿನಗಳ ಕಾಲ ನಡೆಯಲಿದೆ. ಯೋಗ, ಕ್ರಾಪ್ಟ್ ಹಾಗೂ ಸಾಂಸ್ಕೃತಿಕ ಚಟುವಟಿಕೆ ಇತ್ಯಾದಿ ವಿಷಯಗಳ ಬಗ್ಗೆ ನುರಿತ ಶಿಕ್ಷಕರು ಮಾಹಿತಿ, ತರಬೇತು ನೀಡಲಿದ್ದಾರೆ.