





ಪುತ್ತೂರು: ಇತ್ತೀಚೆಗೆ ಬೆಂಗಳೂರಿನ ವಿಧಾನಸೌಧದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ನಡೆದ ರಾಜ್ಯಮಟ್ಟದ ಮಕ್ಕಳ ದಿನಾಚರಣೆ ಹಾಗೂ ಶಿಕ್ಷಕರು ಮತ್ತು ಪೋಷಕರ ಮಹಾಸಭೆ ಕಾರ್ಯಕ್ರಮದಲ್ಲಿ ಪುತ್ತೂರಿನ ಕೊಂಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ
ಅರುಣ್ ಕುಮಾರ್ ಅವರಿಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೂತನ ತಂತ್ರಜ್ಞಾನದ ಆವಿಷ್ಕಾರಕ್ಕಾಗಿ ನೀಡುವ ಪುರಸ್ಕಾರವನ್ನು ನೀಡಿ ಅಭಿನಂದಿಸಿದರು.



ಅರುಣ್ ಕುಮಾರ್ ಅವರು ವಿದ್ಯಾರ್ಥಿಗಳ ಮುಖ ಚಹರೆಯನ್ನು ಗುರುತಿಸಿ ದಾಖಲಿಸುವ ಹಾಜರಾತಿ ಉಪಕರಣವನ್ನು ಆವಿಷ್ಕರಿಸಿದ್ದು, ಇದು ಈಗಾಗಲೇ ರಾಜ್ಯದ ಗಮನ ಸೆಳೆದಿದೆ. ಪದವಿಪೂರ್ವ ಶಿಕ್ಷಣ ಇಲಾಖೆಯು ರಾಜ್ಯದ ಆಯ್ದ ಜಿಲ್ಲೆಗಳಲ್ಲಿ ಈ ತಂತ್ರಜ್ಞಾನವನ್ನು ಪ್ರಾಯೋಗಿಕವಾಗಿ ಅಳವಡಿಸಿದೆ. ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಅವರು ಅರುಣ್ ಕುಮಾರ್ ಸಾಧನೆಯನ್ನು ಮೆಚ್ಚಿ ವಿದ್ಯಾರ್ಥಿಯನ್ನು ಬೆಂಗಳೂರಿಗೆ ಕರೆಸಿ ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಿ ಅಭಿನಂದಿಸಿರುತ್ತಾರೆ.





ಇದೀಗ ನವೆಂಬರ್ 14ರಂದು ನಡೆದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಅರುಣ್ ಕುಮಾರ್ ಅವರಿಗೆ ವಿಧಾನ ಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು 15 ಸಾವಿರ ರೂಪಾಯಿ ಮೊತ್ತದ ನಗದು ಬಹುಮಾನ ನೀಡಿ ಪುರಸ್ಕರಿಸಿದ್ದಾರೆ.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಉಪಸ್ಥಿತರಿದ್ದರು. ಅರುಣ್ ಕುಮಾರ್ ಅವರ ಈ ಸಾಧನೆಗೆ ಕಾಲೇಜಿನ ಉಪನ್ಯಾಸಕ ಆಶ್ಲೇಶ್ ಕುಮಾರ್ ಅವರು ಮಾರ್ಗದರ್ಶನ ಮಾಡಿರುತ್ತಾರೆ. ಬೊಳ್ವಾರಿನ ವಿನೋದ್ ಕುಮಾರ್ ಮತ್ತು ರಾಜೇಶ್ವರಿ ದಂಪತಿಯ ಪುತ್ರನಾದ ಅರುಣ್ ಕುಮಾರ್ ಅವರನ್ನು ಕಾಲೇಜಿನ
ಪ್ರಾಂಶುಪಾಲ ಗೋಪಾಲ ಗೌಡ ಮತ್ತು ಉಪನ್ಯಾಸಕರು ಅಭಿನಂದಿಸಿರುತ್ತಾರೆ.







