





ವಿದ್ಯಾರ್ಥಿಗಳು ಧನಾತ್ಮಕ ಚಿಂತನೆಯೊಂದಿಗೆ ಬೆಳೆಯಬೇಕು : ಸುಬ್ರಹ್ಮಣ್ಯ ನಟ್ಟೋಜ


ಪುತ್ತೂರು: ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಒಂದಲ್ಲ ಒಂದು ರೀತಿಯ ಪ್ರತಿಭೆಯಿದೆ, ಕಲೆಯಿದೆ. ಅದನ್ನು ಹೊರತೆಗೆಯುವ ಕೆಲಸ ಶಿಕ್ಷಕರಿಂದಾಗುತ್ತದೆ. ನಿರಂತರ ಕಲಿಕೆಯಿಂದ ಯಶಸ್ಸು ಗಳಿಸಲು ಸಾಧ್ಯವಿದೆ. ಮಕ್ಕಳು ಕಲಿಕಾ ಸಮಯದಲ್ಲಿ ಧನಾತ್ಮಕ ಚಿಂತನೆಗಳನ್ನು ಮಾಡಬೇಕು. ಮಾನಸಿಕವಾಗಿ ಸದೃಢರಾಗಬೇಕು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು.





ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಸತಿಯುತ ಪದವಿ ಪೂರ್ವ ವಿದ್ಯಾಲಯದ ವತಿಯಿಂದ ಆಯೋಜಿಸಲಾದ ರಕ್ಷಕ ಶಿಕ್ಷಕ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಮ್ಮ ದೇಶದ ವಂದೇ ಮಾತರಂ ಗಾಯನದ 150ನೇ ವರ್ಷಾಚರಣೆ ಜಾರಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಅಂಬಿಕಾ ಸಂಸ್ಥೆಗಳ ವತಿಯಿಂದ ವಿದ್ಯಾರ್ಥಿಗಳಿಗಷ್ಟೇ ಅಲ್ಲದೆ ವಿದ್ಯಾರ್ಥಿ ಪೋಷಕರಿಗೂ ಬೇರೆ ಬೇರೆ ಬಗೆಯಲ್ಲಿ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರಲ್ಲದೆ ನಮ್ಮದೇ ಆದ ರೀತಿಯಲ್ಲಿ ದೇಶಸೇವೆಯನ್ನು ಮಾಡುವ ಮೂಲಕ ಪ್ರತಿಯೊಬ್ಬರೂ ನಿಜವಾದ ದೇಶಭಕ್ತರೆನಿಸಿಕೊಳ್ಳಬೇಕು ಎಂದರು.
ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ಎಸ್ ನಟ್ಟೋಜ ಮಾತನಾಡಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಲ್ಲಿ ಶಿಕ್ಷಕರು ಹಾಗೂ ಪೋಷಕರ ಪಾತ್ರ ಮಹತ್ತವಾದುದು. ಈ ನಿಟ್ಟಿನಲ್ಲಿ ಮಕ್ಕಳ ಭವಿಷ್ಯದ ಕಡೆ ಪೋಷಕರು ಸದಾ ಎಚ್ಚರ ವಹಿಸಬೇಕು. ವಿದ್ಯಾರ್ಥಿಗಳು ಕಲಿಕೆಗೆ ಹೆಚ್ಚಿನ ಸಮಯವನ್ನು ವಿನಿಯೋಗಿಸಿ ಯಾವುದೇ ಸಂದೇಹಗಳು ಬಂದಲ್ಲಿ ಅದಕ್ಕೆ ತಕ್ಕ ಪರಿಹಾರಗಳನ್ನು ಸಂಬಂಧ ಪಟ್ಟ ಉಪನ್ಯಾಸಕರಲ್ಲಿ ಕೇಳಿಕೊಂಡು ಪರಿಹರಿಸಿಕೊಳ್ಳಬೇಕು. ಜತೆಗೆ ಆರೋಗ್ಯದ ಕಡೆಗೂ ಗಮನ ಹರಿಸಬೇಕು ಎಂದು ತಿಳಿಸಿದರು.
ವೇದಿಕೆಯಲ್ಲಿ ಸಂಸ್ಥೆಯ ಉಪ ಪ್ರಾಂಶುಪಾಲ ಪ್ರದೀಪ್ ಕೆ ವೈ, ಮುಖ್ಯ ಮಾರ್ಗದರ್ಶಕಿ ಸುಚಿತ್ರಾ ಪ್ರಭು, ಸ್ಪರ್ಧಾತ್ಮಕ ಪರೀಕ್ಷೆಗಳ ಮುಖ್ಯಸ್ಥ ಕಿಶೋರ್ ಭಟ್ ಹಾಗೂ ಸಂಸ್ಥೆ ಯ ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದರು. ಪೂರ್ವಿ, ನಿರೀಕ್ಷಾ, ಸಿಂಚನ ಮತ್ತು ವೈಷ್ಣವಿ ಪ್ರಾರ್ಥಿಸಿದರು. ಕನ್ನಡ ಉಪನ್ಯಾಸಕ ಸತೀಶ್ ಇರ್ದೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.








