ಸ್ಪೋರ್ಟ್ಸ್ ಪ್ರಾಕ್ಟಿಸ್ ಸಂದರ್ಭ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ-ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಶಿಕ್ಷೆ

0

ಪುತ್ತೂರು:ಪೋಕ್ಸೋ ಪ್ರಕರಣವೊಂದರಲ್ಲಿ ಪುತ್ತೂರು ಫಿಲೋಮಿನಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋ ಎಂಬವರಿಗೆ ಜೈಲು ಶಿಕ್ಷೆ ವಿಧಿಸಿ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ಕೊಂಬೆಟ್ಟು ಶ್ರೀ ಮಹಾಲಿಂಗೇಶ್ವರ ಐಟಿಐ ಬಳಿಯ ದಿ|ಆಂಟೋನಿ ಪಿಂಟೋ ಎಂಬವರ ಪುತ್ರ ಎಲಿಯಾಸ್ ಪಿಂಟೋ(55ವ)ರವರು ಕಾಲೇಜಿನ ಅಪ್ರಾಪ್ತ ಬಾಲಕಿಗೆ 2021ರ ಅ.23ರಂದು ಸ್ಪೋರ್ಟ್ಸ್ಸ್ ಪ್ರಾಕ್ಟೀಸ್ ಸಂದರ್ಭ ಲೈಂಗಿಕ ಕಿರುಕುಳ ನೀಡಿದ್ದಾಗಿ ಆರೋಪಿಸಿ ನೀಡಿದ್ದ ದೂರಿನಂತೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ತನಿಖೆ ನಡೆಸಿದ ದ.ಕ.ಮಹಿಳಾ ಪೊಲೀಸ್ ಠಾಣೆಯ ಆಗಿನ ಪೊಲೀಸ್ ನಿರೀಕ್ಷಕ ತಿಮ್ಮಪ್ಪ ನಾಯ್ಕ ಅವರು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಪೋಕ್ಸೋ ವಿಶೇಷ ನ್ಯಾಯಾಲಯವು ಪ್ರಕರಣದಲ್ಲಿ ಒಟ್ಟು 19 ಸಾಕ್ಷಿಗಳನ್ನು ವಿಚಾರಣೆಗೊಳಪಡಿಸಿತ್ತು.ಸಂತ್ರಸ್ತೆಯು ಆರೋಪಿ ವಿರುದ್ಧ ನ್ಯಾಯಾಲಯದಲ್ಲಿ ಸವಿವರ ಹೇಳಿಕೆ ನೀಡಿದ್ದರು.ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶೆ ಸರಿತಾ ಡಿ.ರವರು ಆಪಾದಿತನಿಗೆ,ಪೋಕ್ಸೋ ಕಾಯ್ದೆ ಕಲಂ 11ರಡಿಯ ಅಪರಾಧಕ್ಕೆ 5 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ಮತ್ತು ರೂ.20 ಸಾವಿರ ದಂಡ ವಿಧಿಸಿದ್ದಾರೆ.

ದಂಡ ತೆರಲು ತಪ್ಪಿದಲ್ಲಿ 6 ತಿಂಗಳ ಸಾದಾ ಶಿಕ್ಷೆ ಅನುಭವಿಸಬೇಕು.ಭಾ.ದಂ.ಸಂ.ಕಲಂ 354(ಎ) ರಡಿಯ ಅಪರಾಧಕ್ಕೆ 3 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ಮತ್ತು ರೂ.10 ಸಾವಿರ ದಂಡ, ದಂಡ ತೆರಲು ತಪ್ಪಿದಲ್ಲಿ 3 ತಿಂಗಳ ಸಾದಾ ಶಿಕ್ಷೆ ಅನುಭವಿಸುವಂತೆ ಆದೇಶಿಸಲಾಗಿದೆ.ದಂಡದ ಮೊತ್ತದಲ್ಲಿ ರೂ.20 ಸಾವಿರವನ್ನು ನೊಂದ ಬಾಲಕಿಗೆ ನೀಡಲು ಆದೇಶಿಸಲಾಗಿದೆ.

ನೊಂದ ಬಾಲಕಿಗೆ ದಂಡ ಪ್ರಕ್ರಿಯಾ ಸಂಹಿತೆ ಕಲಂ 357Aರಡಿಯಲ್ಲಿ ರೂ.20 ಸಾವಿರವನ್ನು ನೀಡಲು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ನ್ಯಾಯಾಲಯವು ಆದೇಶಿಸಿದೆ.ಸರಕಾರದ ಪರ ಪೋಕ್ಸೋ ವಿಶೇಷ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕ ಕುದ್ರಿಯ ಪುಷ್ಪರಾಜ ಅಡ್ಯಂತಾಯರವರು ವಾದಿಸಿದ್ದರು.

LEAVE A REPLY

Please enter your comment!
Please enter your name here