







ಪುತ್ತೂರು: ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಘಟನೆಯೊಂದರಲ್ಲಿ ಅಪ್ರಾಪ್ತ ಪ್ರಾಯದ ವಿದ್ಯಾರ್ಥಿನಿಯನ್ನು ಮದುವೆಯಾಗುವುದಾಗಿ ನಂಬಿಸಿ ಗರ್ಭವತಿಯನ್ನಾಗಿಸಿದ್ದ ಆರೋಪಿಯನ್ನು ಪುತ್ತೂರು ಜಿಲ್ಲಾ ನ್ಯಾಯಾಲಯ ಜಾಮೀನಿನ ಮೇಲೆ ಬಿಡುಗಡೆಗೊಳಿಸಿದೆ.


ಪೈಚಾರಿನ ಬಾತಿಷ್ ಎಂಬಾತ ಪರಿಚಯದ ಅಪ್ತಾಪ್ತ ಪ್ರಾಯದ ಹುಡುಗಿಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿದೆ.ಶಾಲೆಯಲ್ಲಿ ನಡೆದಿದ್ದ ಕೌನ್ಸಿಲಿಂಗ್ ವೇಳೆ ಪ್ರಕರಣ ಬೆಳಕಿಗೆ ಬಂದಿತ್ತು.ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ದು ತಪಾಸಣೆಗೊಳಪಡಿಸಿದಾಗ ಆಕೆ ಗರ್ಭವತಿಯಾಗಿದ್ದ ವಿಚಾರ ತಿಳಿದು ಬಂದಿದ್ದು ಬಳಿಕ ಪೊಲೀಸರಿಗೆ ದೂರು ನೀಡಲಾಗಿತ್ತು. ಆರೋಪಿ ಬಾತೀಷ್ ವಿರುದ್ಧ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದ ಸುಳ್ಯ ಪೊಲೀಸರು ಆತನನ್ನು ಬಂಧಿಸಿದ್ದರು.ಕಳೆದ ಒಂದೂವರೆ ತಿಂಗಳಿನಿಂದ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಯನ್ನು ಪುತ್ತೂರು ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಶರತ್ತು ಬದ್ಧ ಜಾಮೀನಿನ ಮೇಲೆ ಬಿಡುಗಡೆಗೊಳಿಸಿದೆ. ಆರೋಪಿ ಪರ ವಕೀಲರಾದ ಆಶ್ರಫ್ ಅಗ್ನಾಡಿ, ಅಬ್ದುಲ್ ಮಜೀದ್ ಖಾನ್, ಸಲೀನಾ ನೆಕ್ಕಿಲಾಡಿ, ಮಿಶ್ರಿಯಾ ಮಿತ್ತೂರು ವಾದಿಸಿದ್ದರು.












