







ಬೆಂಗಳೂರು:ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿ ಪುತ್ತೂರು ಎಸಿಯವರು ಹೊರಡಿಸಿದ್ದ ಆದೇಶಕ್ಕೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.


ಮಹೇಶ್ ಶೆಟ್ಟಿ ತಿಮರೋಡಿಯವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಅವರು ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ಏಪ್ರಿಲ್ 30ರಂದು ವಜಾಗೊಳಿಸಿತ್ತು.ಅಗತ್ಯವಿದ್ದರೆ ಸರ್ಕಾರದ ಮುಂದೆ ಮೇಲ್ಮನವಿ ಸಲ್ಲಿಸಿಕೊಳ್ಳುವಂತೆ ನ್ಯಾಯಪೀಠ ಸೂಚಿಸಿತ್ತು.ಏಕಸದಸ್ಯ ಪೀಠದ ಈ ಆದೇಶದ ವಿರುದ್ಧ ಮಹೇಶ್ ಶೆಟ್ಟಿಯವರು ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.ಈ ಮೇಲ್ಮನವಿಯ ವಿಚಾರಣೆ ನ್ಯಾಯಮೂರ್ತಿ ಎಸ್.ಸುನೀಲ್ ದತ್ ಯಾದವ್ ಹಾಗೂ ನ್ಯಾಯಮೂರ್ತಿ ಎಸ್.ರಾಚಯ್ಯ ಅವರಿದ್ದ ರಜಾಕಾಲದ ವಿಭಾಗೀಯ ನ್ಯಾಯಪೀಠದ ಮುಂದೆ ಮೇ 26ರಂದು ನಡೆಯಿತು.



ವಿಚಾರಣೆ ವೇಳೆ ತಿಮರೋಡಿ ಪರ ವಕೀಲರು, ಪ್ರಕರಣವು ಸಂಪೂರ್ಣ ರಾಜಕೀಯ ಪ್ರೇರಿತವಾಗಿದ್ದು,ಅರ್ಜಿದಾರರಿಗೆ ಕಿರುಕುಳ ನೀಡಲೆಂದೇ ಇಡೀ ರಾಜ್ಯದ ಆಡಳಿತ ಯಂತ್ರ ಅವರ ಹಿಂದೆ ಬಿದ್ದಿದೆ.ಖುಲಾಸೆಗೊಂಡ ಪ್ರಕರಣಗಳನ್ನೂ ಉಲ್ಲೇಖಿಸಿ ಗಡಿಪಾರು ಆದೇಶ ಹೊರಡಿಸಲಾಗಿದೆ.ಅದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿದೆ.ಆದ್ದರಿಂದ, ಗಡಿಪಾರು ಆದೇಶಕ್ಕೆ ತಡೆ ನೀಡಬೇಕು ಎಂದು ಮನವಿ ಮಾಡಿದರು.ಗಡಿಪಾರು ಆದೇಶಕ್ಕೆ ತಡೆ ನೀಡುವುದಕ್ಕೆ ರಾಜ್ಯ ಸರ್ಕಾರದ ಪರ ಹಾಜರಿದ್ದ ಅಡ್ವೋಕೇಟ್ ಜನರಲ್ ಬಲವಾಗಿ ಆಕ್ಷೇಪಿಸಿದರು.
ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಪ್ರಕರಣದ ಮೆರಿಟ್ ಬಗ್ಗೆ ಉಲ್ಲೇಖಿಸುವುದಿಲ್ಲ.ಆದರೆ,ಮೇಲ್ಮನವಿ ಸಲ್ಲಿಸಿರುವುದರಲ್ಲಿ ತಾಂತ್ರಿಕವಾಗಿ ತಪ್ಪಾಗಿದೆ.ಏಕಸದಸ್ಯ ನ್ಯಾಯಪೀಠದ ಆದೇಶದಂತೆ ಸರ್ಕಾರದ ಮುಂದೆ ಮೇಲ್ಮನವಿ ಸಲ್ಲಿಸಬೇಕಿತ್ತು.ಅದರ ಬದಲು ನೇರವಾಗಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿರುವುದು ಸೂಕ್ತವಲ್ಲ.ಈ ಹಿನ್ನೆಲೆಯಲ್ಲಿ ಏಕಸದಸ್ಯ ನ್ಯಾಯಪೀಠದ ಆದೇಶಕ್ಕೆ ತಡೆ ನೀಡಲಾಗದು ಎಂದು ಹೇಳಿ, ಅರ್ಜಿ ಸಂಬಂಧ ರಾಜ್ಯ ಸರ್ಕಾರ, ಪುತ್ತೂರು ಉಪವಿಭಾಗಾಧಿಕಾರಿ ಸಹಿತ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಜೂನ್ 1ಕ್ಕೆ ಮುಂದೂಡಿತು.










