ನೆಲ್ಯಾಡಿ ವಿಶ್ವವಿದ್ಯಾನಿಲಯ ಕಾಲೇಜಿನ ವಾರ್ಷಿಕೋತ್ಸವ ಸಂಭ್ರಮ

0

ನೆಲ್ಯಾಡಿ: ವಿಶ್ವವಿದ್ಯಾನಿಲಯ ಕಾಲೇಜು, ನೆಲ್ಯಾಡಿಯ ವಾರ್ಷಿಕೋತ್ಸವ ಸಮಾರಂಭ ಮೇ 27, 2026ರ ಬುಧವಾರ ಸಂತ ಜಾರ್ಜ್ ಸಭಾಂಗಣದಲ್ಲಿ ವಿಜೃಂಭಣೆಯಿಂದ ಜರುಗಿತು.ಬೆಳಗ್ಗೆ 10.30ಕ್ಕೆ ಕಾಲೇಜು ಸಂಯೋಜಕ ಡಾ. ಸುರೇಶ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಆರಂಭವಾಯಿತು. ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಮುಖ್ಯ ಅತಿಥಿ ಸಂತ ಜಾರ್ಜ್ ವಿದ್ಯಾಸಂಸ್ಥೆ ನೆಲ್ಯಾಡಿಯ ಸ್ಥಾಪಕ ಕಾರ್ಯದರ್ಶಿ ಅಬ್ರಹಾಂ ವರ್ಗೀಸ್ ಕಾಲೇಜು ಮ್ಯಾಗ್ಜೀನ್ ‘ತಳಿರು’ ಬಿಡುಗಡೆಗೊಳಿಸಿ ಮಾತನಾಡಿ, “ವಿದ್ಯಾರ್ಥಿಗಳು ಸ್ಪಷ್ಟ ಗುರಿಯೊಂದಿಗೆ ಛಲ ಬಿಡದೆ ಪ್ರಯತ್ನಿಸಬೇಕು. ಸಾಹಿತ್ಯ, ವೈಚಾರಿಕ ಕೃತಿಗಳನ್ನು ಓದಬೇಕು. ಪ್ರೀತಿ, ಸೌಹಾರ್ದತೆಯೊಂದಿಗೆ ಉತ್ತಮ ಜೀವನ ಕಟ್ಟಿಕೊಳ್ಳಬೇಕು” ಎಂದು ಹಾರೈಸಿದರು. ಕಾಲೇಜು ಆರಂಭದ ಕಷ್ಟದ ದಿನಗಳನ್ನು ಸ್ಮರಿಸಿದರು. ಕಾಲೇಜು ಅನುಷ್ಠಾನ ಸಮಿತಿ ಅಧ್ಯಕ್ಷೆ ಉಷಾ ಅಂಚನ್ ಕಾಲೇಜಿನ ಶೈಕ್ಷಣಿಕ ಸಾಧನೆಯನ್ನು ಶ್ಲಾಘಿಸಿ, ಸರ್ಕಾರಿ ಕಾಲೇಜಿನ ಉಳಿವಿನ ಅಗತ್ಯತೆ ಕುರಿತು ಮಾತನಾಡಿ ವಿದ್ಯಾರ್ಥಿಗಳ ಸಾಧನೆಗೆ ಅಭಿನಂದಿಸಿದರು.ಗೌರವ ಸಲಹೆಗಾರ ಪಿ.ಪಿ. ವರ್ಗೀಸ್ ಮಾತನಾಡಿ, “ವಿಶ್ವವಿದ್ಯಾನಿಲಯ ಕಾಲೇಜು ಭವಿಷ್ಯದಲ್ಲಿ ಮುಂದುವರಿಯಬೇಕು. ಈ ನಿಟ್ಟಿನಲ್ಲಿ ಪ್ರಯತ್ನ ಮುಂದುವರಿಸುತ್ತೇವೆ” ಎಂದು ಹೇಳಿದರು.ಕೊಕ್ಕಡ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಿಶ್ವನಾಥ ಶೆಟ್ಟಿ ಮಾತನಾಡಿ, “ಸರ್ಕಾರಿ ಕಾಲೇಜನ್ನು ಸದುಪಯೋಗಪಡಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ” ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿ ಪ್ರಶಸ್ತಿ ವಿಜೇತರನ್ನು ಅಭಿನಂದಿಸಿದರು.

ಸಂತ ಜಾರ್ಜ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಏಲಿಯಾಸ್ ಎಂ.ಕೆ. ವಿದ್ಯಾರ್ಥಿಗಳ ಸಾಂಸ್ಕೃತಿಕ, ಶೈಕ್ಷಣಿಕ ಸಾಧನೆಗೆ ಶುಭ ಹಾರೈಸಿದರು.ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಉಮ್ಮರ್ ಬೈಲಂಗಡಿ ಸರ್ಕಾರಿ ಕಾಲೇಜಿನ ಉಳಿವಿನ ಕುರಿತು ಮಾತನಾಡಿ ವಿದ್ಯಾರ್ಥಿಗಳಿಗೆ ಶುಭ ಕೋರಿದರು.ಅನುಷ್ಠಾನ ಸಮಿತಿಯ ಗೌರವ ಸಲಹೆಗಾರ ಸರ್ವೋತ್ತಮ ಗೌಡ, ಖಜಾಂಚಿ ವಿಶ್ವನಾಥ್ ಶೆಟ್ಟಿ, ಸದಸ್ಯ ಸತೀಶ್ ದುರ್ಗಾಶ್ರೀ, ಶಿಕ್ಷಕ-ರಕ್ಷಕ ಸಂಘದ ಸದಸ್ಯೆ ಸೇಸಮ್ಮ ಉಪಸ್ಥಿತರಿದ್ದರು.ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಫಲಕ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

ಡಾ. ಸೀತಾರಾಮ ಪಿ. ಸ್ವಾಗತಿಸಿದರು. ಡಾ. ಆನಂದ ಎಂ. ಕಾಲೇಜಿನ ವಾರ್ಷಿಕ ವರದಿ ಮಂಡಿಸಿದರು. ಪಾವನಾ ರೈ ವಂದಿಸಿದರು. ಶ್ರುತಿ ಮತ್ತು ವೆರೋನಿಕಾ ಪ್ರಭಾ ವಿ.ಪಿ. ಕಾರ್ಯಕ್ರಮ ನಿರೂಪಿಸಿದರು. ಮಧ್ಯಾಹ್ನ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.ವಿದ್ಯಾರ್ಥಿಗಳು, ಶಿಕ್ಷಕ-ರಕ್ಷಕ ಸಂಘದ ಪದಾಧಿಕಾರಿಗಳು, ಅನುಷ್ಠಾನ ಸಮಿತಿಯ ಸದಸ್ಯರು, ಪೋಷಕರು, ಬೋಧಕ-ಬೋಧಕೇತರ ಸಿಬ್ಬಂದಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here