






ಬಡಗನ್ನೂರು: “ಶಿಕ್ಷಣದಿಂದ ವಿದ್ಯಾರ್ಥಿಗಳು ಸಂಸ್ಕಾರವಂತರಾಗಬೇಕು, ಸತ್ಪ್ರಜೆಗಳಾಗಬೇಕು. ಶೈಕ್ಷಣಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಅತ್ಯುತ್ತಮ ಸಾಧಕರಾಗಬೇಕು” ಎಂದು ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ಅಧ್ಯಕ್ಷ ಗೋಪಾಲಕೃಷ್ಣ ಭಟ್ ಕರೆ ನೀಡಿದರು.ಅವರು 2026-27ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.



ಜೂನ್ 1ರಂದು ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ ನೂತನವಾಗಿ ದಾಖಲಾದ ಹಾಗೂ ಇತರ ವಿದ್ಯಾರ್ಥಿಗಳನ್ನು ಶಾಲಾ ಪ್ರವೇಶದ್ವಾರದಿಂದ ಬ್ಯಾಂಡ್ ಸೆಟ್‌ನೊಂದಿಗೆ ಕರೆತರಲಾಯಿತು. ಎಲ್ಲಾ ವಿದ್ಯಾರ್ಥಿಗಳಿಗೆ ಆರತಿ ಬೆಳಗಿ, ತಿಲಕವನ್ನಿಟ್ಟು ತರಗತಿಗೆ ಸ್ವಾಗತಿಸಲಾಯಿತು.



ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಮಂಡಳಿಯ ನಿರ್ದೇಶಕ ಗಣರಾಜ ಕುಂಬ್ಳೆ, ಸಂಚಾಲಕ ವಿಘ್ನೇಶ್ ಹಿರಣ್ಯ, ಪ್ರೌಢಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಲಿಂಗಪ್ಪಗೌಡ ಮೋಡಿಕೆ, ಪ್ರಾಥಮಿಕ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಕೇಶವ ಪ್ರಸಾದ್ ನೀಲಗಿರಿ, ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಸತೀಶ್ ಕೊಪ್ಪಳ, ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಗುರು ಪುಷ್ಪಾವತಿ ಡಿ. ಉಪಸ್ಥಿತರಿದ್ದರು. ಪ್ರಾಥಮಿಕ ಶಾಲಾ ಮುಖ್ಯ ಗುರು ರಾಜಗೋಪಾಲ್ ಎನ್ ಸ್ವಾಗತಿಸಿ, ಪ್ರೌಢಶಾಲಾ ಮುಖ್ಯ ಗುರು ಸುಮನ ವಂದಿಸಿದರು. ಪ್ರೌಢಶಾಲಾ ಶಿಕ್ಷಕ ವಿಶ್ವನಾಥ್ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಶಿಕ್ಷಕ ವೃಂದ ಹಾಗೂ ಸಿಬ್ಬಂದಿ ಸಹಕರಿಸಿದರು.










