ಸಾರೆಪುಣಿಯ ವಿವಾಹಿತ ಮಹಿಳೆಯ ಸಾವಿನ ಪ್ರಕರಣ : ಕೌಟುಂಬಿಕ ಕಿರುಕುಳದ ಆರೋಪ – ಮೂವರ ವಿರುದ್ಧ ಕೇಸ್ ದಾಖಲು

0

ಪುತ್ತೂರು: ಕೌಟುಂಬಿಕ ಕಿರುಕುಳದಿಂದಾಗಿ ವಿವಾಹಿತೆ ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೃತೆಯ ಮಾವ, ಅತ್ತೆ ಹಾಗೂ ನಾದಿನಿ ವಿರುದ್ದ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ಸಾರೆಪುಣಿ ನಿವಾಸಿ ಜುಬೈದ ಅವರ ಪುತ್ರಿ ಫಾತಿಮತ್ ನಿಶಾನ(22ವ) ಅವರನ್ನು ನಾಲ್ಕು ವರ್ಷಗಳ ಹಿಂದೆ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಕಡಪ್ಪಾಲದ ಅನ್ಸಾರ್ ಜೊತೆ ವಿವಾಹ ಮಾಡಿಕೊಡಲಾಗಿತ್ತು. ಜು.18ರಂದು ರಾತ್ರಿ ಫಾತಿಮತ್ ನಿಶಾನ ಅವರು ತಾಯಿಗೆ ಕರೆ ಮಾಡಿ, ತನ್ನ ಮಾವ ಅಲವಿ, ಅತ್ತೆ ಆಯಿಷ ಹಾಗೂ ನಾದಿನಿ ಫಸೀಲಾ ಅವರು ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿದ್ದಾರೆ ಎಂದು ತಿಳಿಸಿದ್ದರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ತಾಯಿ ಜುಬೈದಾ ಮಗಳೊಂದಿಗೆ ಮಾತನಾಡುತ್ತಿದ್ದ ವೇಳೆ ಫಾತಿಮತ್ ನಿಶಾನಾ ಅವರ ಫೋನ್ ಅನ್ನು ಕಸಿದುಕೊಂಡ ಮಾವ ಅಲವಿ ಅವರು, “ನಿನ್ನ ಮಗಳನ್ನು ಕೊಲ್ಲುತ್ತೇನೆ” ಎಂದು ಬೆದರಿಕೆ ಹಾಕಿದ್ದರೆಂದು ಆರೋಪಿಸಲಾಗಿದೆ. ಈ ಮಾಹಿತಿ ತಿಳಿದ ಬಳಿಕ ಜುಬೈದಾ ಅವರು ಮಗಳ ಮನೆಗೆ ತೆರಳಿದಾಗ, ಫಾತಿಮತ್ ನಿಶಾನ ಮೃತಪಟ್ಟಿರುವುದು ಕಂಡುಬಂದಿದೆ.

ಕೌಟುಂಬಿಕ ಮನಸ್ತಾಪದ ಹಿನ್ನೆಲೆಯಲ್ಲಿ ತನ್ನ ಮಗಳನ್ನು ಆರೋಪಿಗಳಾದ ಮಾವ ಅಲವಿ, ಅತ್ತೆ ಆಯಿಷ ಹಾಗೂ ನಾದಿನಿ ಫಸೀಲಾ ಕೊಲೆ ಮಾಡಿರುವುದಾಗಿ ಜುಬೈದ್ ಅವರು ನೀಡಿದ ದೂರಿನ ಮೇರೆಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ.100/2026, ಕಲಂ 85, 103(1) ಸಹಪಠಿತ 3(5) ಭಾರತೀಯ ನ್ಯಾಯ ಸಂಹಿತೆ (BNS)-2023ರಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ. ಪೊಲೀಸರು ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here