ಬೆಳಂದೂರು ಸ.ಪ್ರ.ದ. ಕಾಲೇಜಿನಲ್ಲಿ ಶೈಕ್ಷಣಿಕ ಚಟುವಟಿಕೆಗಳಿಗೆ ಚಾಲನೆ

0

ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ, ಪ್ರತಿಭಾ ಪುರಸ್ಕಾರ

ಕಾಣಿಯೂರು: ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ, ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ರಾಘವ ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪದ್ಮನಾಭ ಕೆ, ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾಭಿಮಾನಿಗಳ ಸಂಘದ ಅಧ್ಯಕ್ಷೆ ವಚನ ಜಯರಾಮ್, ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ವೇಣುಗೋಪಾಲ ಕಳುವಾಜೆ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ಇದೇ ಸಂದರ್ಭದಲ್ಲಿ ಕಾಲೇಜಿನ ಶೈಕ್ಷಣಿಕ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು. 2023–26ನೇ ಶೈಕ್ಷಣಿಕ ಸಾಲಿನ ಅಂತಿಮ ಪದವಿ ವಿದ್ಯಾರ್ಥಿಗಳಲ್ಲಿ ಉತ್ತಮ ಸಾಧನೆ ಮಾಡಿದ ಹಾಗೂ ಡಿಸ್ಟಿಂಕ್ಷನ್ ಪಡೆದ ವಿದ್ಯಾರ್ಥಿಗಳನ್ನು ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.


ಅತಿಥಿಗಳು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ಶೈಕ್ಷಣಿಕ ಸಾಧನೆಯೊಂದಿಗೆ ಸಹಪಠ್ಯ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸುವಂತೆ ಕರೆ ನೀಡಿದರು. ವಿದ್ಯಾರ್ಥಿಗಳು ಉತ್ತಮ ಗುರಿಯನ್ನು ಹೊಂದಿ, ನಿರಂತರ ಪರಿಶ್ರಮ ಹಾಗೂ ಶಿಸ್ತಿನ ಮೂಲಕ ಜೀವನದಲ್ಲಿ ಯಶಸ್ಸನ್ನು ಸಾಧಿಸಬೇಕು ಎಂದು ನುಡಿದರು. ವೇದಿಕೆಯಲ್ಲಿ ಕಾಲೇಜಿನ ಐಕ್ಯೂಎಸಿ ಸಂಚಾಲಕ ಮಹೇಶ್. ವಿದ್ಯಾರ್ಥಿ ಪ್ರತಿನಿಧಿಗಳಾದ ದಿನೇಶ್ ಅನಸೂಯಾ, ಅರ್ಪಿತಾ ಮತ್ತು ಶಭರೀಶ ಉಪಸ್ಥಿತರಿದ್ದರು

ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರು, ಕಾಲೇಜಿನ ಉಪನ್ಯಾಸಕರು, ಕಚೇರಿ ಸಿಬ್ಬಂದಿ, ಹಳೆ ವಿದ್ಯಾರ್ಥಿಗಳು, ಪೋಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಬರಮಾಡಿಕೊಳ್ಳುವುದರ ಜೊತೆಗೆ, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಹೊಸ ಉತ್ಸಾಹ, ಆತ್ಮವಿಶ್ವಾಸ ಹಾಗೂ ಸಾಧನೆಯ ಮನೋಭಾವವನ್ನು ಮೂಡಿಸಿದ ಕಾರ್ಯಕ್ರಮವು ಯಶಸ್ವಿಯಾಗಿ ಕೊನೆಗೊಂಡಿತು. ಉಪನ್ಯಾಸಕರಾದ ವಿನುತಾಶ್ರೀ ಸ್ವಾಗತಿಸಿ, ವಿನುತಾ ವಂದಿಸಿದರು.ವಿದ್ಯಾರ್ಥಿನಿ ಹರ್ಷಿತ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here