5 ಬೇಡಿಕೆಗಳ ಈಡೇರಿಕೆಗೆ ಆಗ್ರಹ : ಆ. 31ರಂದು ಹಿಂದು ಸಂಘಟನೆಗಳಿಂದ ‘ಪುತ್ತೂರು ಚಲೋ’ ಜನಜಾಗೃತಿ ಆಂದೋಲನ

0

ಪುತ್ತೂರು: ಆ. 21ರಂದು ದರ್ಬೆಯಲ್ಲಿ ನಡೆದ ಘಟನೆಯನ್ನು ಖಂಡಿಸಿ, ಐದು ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿಶ್ವ ಹಿಂದು ಪರಿಷತ್, ಬಜರಂಗದಳ ಹಾಗೂ ಹಿಂದು ಜಾಗರಣ ವೇದಿಕೆ ಜಂಟಿಯಾಗಿ ಆ.31ರಂದು ‘ಪುತ್ತೂರು ಚಲೋ’ ಜನಜಾಗೃತಿ ಆಂದೋಲನ ಹಮ್ಮಿಕೊಂಡಿದೆ ಎಂದು ಹಿಂದು ಜಾಗರಣ ವೇದಿಕೆ ಜಿಲ್ಲಾ ಸಂಯೋಜಕ ಮೋಹನ್‌ದಾಸ ಕಾಣಿಯೂರು ತಿಳಿಸಿದ್ದಾರೆ.


ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದರ್ಬೆ ಘಟನೆಯಲ್ಲಿ ಗಾಯಗೊಂಡಿರುವ ಅಂಜನಾ ಪೈ ಅವರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕೊಲೆ ಯತ್ನದ ಸೆಕ್ಷನ್‌ನಡಿ ಪ್ರಕರಣ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಅಶಾಂತಿಗೆ ಕಾರಣರಾದರೆಂದು ಆರೋಪಿಸಲಾಗಿರುವ ಹಾಗೂ ನಿಷೇಧಿತ ಪಿಎಫ್‌ಐ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದಾರೆ ಎನ್ನಲಾದ ನಿಯಾಜ್ ಮತ್ತು ನೌಷಾದ್ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ ಕೈಗೊಳ್ಳಬೇಕು. ಘಟನೆಯಲ್ಲಿ ನಿಷೇಧಿತ ಪಿಎಫ್‌ಐ ಸಂಘಟನೆಯ ಪಾತ್ರವಿದೆಯೇ ಎಂಬುದರ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಸಾಮಾಜಿಕ ಸಂಘಟನೆಗಳಲ್ಲಿ ತೊಡಗಿಸಿಕೊಂಡಿರುವ ಕಾರ್ಯಕರ್ತರ ವಿರುದ್ಧ ಆಧಾರ ರಹಿತ ಆರೋಪ ಮಾಡಿ ಪ್ರಕರಣ ದಾಖಲಿಸುವುದನ್ನು ನಿಲ್ಲಿಸಬೇಕು ಹಾಗೂ ಪೊಲೀಸ್ ಇಲಾಖೆ ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು. ದರ್ಬೆ ಘಟನೆಯಲ್ಲಿ ಅಂಗಡಿ ಮಾಲೀಕ ಸದಾಶಿವ ಪೈ ಅವರ ಪತ್ನಿ ಅಂಜನಾ ಪೈ ಮತ್ತು ಸುದರ್ಶನ ಪೈ ನೊಂದವರಾಗಿದ್ದು, ಅಂಜನಾ ಪೈ ಅವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆಯಲ್ಲಿ ಅವರ ಕೈ ಮತ್ತು ಕಾಲಿಗೆ ಮುರಿತವಾಗಿದ್ದು, ಬೆರಳುಗಳಿಗೂ ಗಾಯಗಳಾಗಿವೆ ಎಂದು ಮೋಹನ್‌ದಾಸ ಕಾಣಿಯೂರು ಹೇಳಿದರು. ಘಟನೆ ನಡೆದ ಬಳಿಕ ದೊಡ್ಡ ಗುಂಪೊಂದು ಸ್ಥಳಕ್ಕೆ ಆಗಮಿಸಿ ಹಲ್ಲೆ ನಡೆಸಿದೆ. ಈ ಸಂದರ್ಭದಲ್ಲಿ ಜೀಪ್‌ನೊಳಗೆ ನುಗ್ಗಿ ಹಲ್ಲೆ ನಡೆಸಿದರೆಂದು ಆರೋಪಿಸಲಾಗಿರುವ ನೌಷಾದ್ ಮತ್ತು ನಿಜಾಮ್ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದರೂ, ಇದುವರೆಗೆ ಬಂಧಿಸಿಲ್ಲ. ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪವೊಂದನ್ನೇ ಪ್ರಮುಖವಾಗಿ ಉಲ್ಲೇಖಿಸಲಾಗಿದೆ. ಪೊಲೀಸ್ ಇಲಾಖೆ ಆರಂಭದಿಂದಲೇ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಂಡಿದ್ದರೆ ಪರಿಸ್ಥಿತಿ ಈ ಮಟ್ಟಕ್ಕೆ ತಲುಪುತ್ತಿರಲಿಲ್ಲ ಎಂದು ಅವರು ಆರೋಪಿಸಿದರು.

ಜೀಪ್‌ನೊಳಗೆ ನುಗ್ಗಿ ಹಲ್ಲೆ ನಡೆಸಿದವರು ಹಾಗೂ ದಾಳಿ ನಡೆಸಿದ ಗುಂಪಿನ ಹಿನ್ನೆಲೆ, ಅವರು ಎಲ್ಲಿಂದ ಬಂದರು, ಯಾರೊಂದಿಗೆ ಸಂಪರ್ಕ ಹೊಂದಿದ್ದರು ಎಂಬುದರ ಕುರಿತು ತನಿಖೆ ನಡೆಸಬೇಕು. ಹಿಂದೆ ನಿಷೇಧಿತ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದವರ ಪಾತ್ರವಿದೆಯೇ ಎಂಬ ಅನುಮಾನಗಳ ಬಗ್ಗೆಯೂ ಪೊಲೀಸರು ತನಿಖೆ ನಡೆಸಿ ಸತ್ಯವನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದರು.

ಘಟನೆಯ ಹಿನ್ನೆಲೆಯಲ್ಲಿ ಹಿಂದು ಜಾಗರಣ ವೇದಿಕೆ ನೀಡಿದ್ದ ಸ್ವಯಂಪ್ರೇರಿತ ಮುಷ್ಕರಕ್ಕೆ ಪುತ್ತೂರಿನ ಹಿಂದು ವರ್ತಕರು ಉತ್ತಮ ಸಹಕಾರ ನೀಡಿದ್ದಾರೆ. ಇದೀಗ ನ್ಯಾಯಕ್ಕಾಗಿ ಮುಂದಿನ ಹಂತವಾಗಿ ಆ.31ರಂದು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಿಂದ ಜನರು ಭಾಗವಹಿಸುವ ‘ಪುತ್ತೂರು ಚಲೋ’ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮಕ್ಕೆ ಈಗಾಗಲೇ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಅವರು ತಿಳಿಸಿದ ಅವರು ಆ. 31ರಂದು ದರ್ಬೆಯ ಐ.ಬಿ. ಪಕ್ಕದಿಂದ ಮೆರವಣಿಗೆ ಆರಂಭವಾಗಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆಯೊಂದಿಗೆ ‘ಪುತ್ತೂರು ಚಲೋ’ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ ಎಂದು ಮೋಹನ್‌ದಾಸ ಕಾಣಿಯೂರು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯ ದಯಾನಂದ ಅಂಬುಲ, ಬಜರಂಗದಳ ಪುತ್ತೂರು ಜಿಲ್ಲಾ ಸಂಯೋಜಕ ಪ್ರವೀಣ್ ಕಲ್ಲೇಗ, ಪುತ್ತೂರು ನಗರ ಸಂಯೋಜಕ ರೂಪೇಶ್ ಬಲ್ನಾಡು ಹಾಗೂ ವಿಶ್ವಹಿಂದು ಪರಿಷತ್ ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ ಉಪಸ್ಥಿತರಿದ್ದರು.

ಐದು ಪ್ರಮುಖ ಬೇಡಿಕೆಗಳು
ಅಂಜನಾ ಪೈ ಅವರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕೊಲೆ ಯತ್ನದ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕು.ನಿಯಾಜ್ ಹಾಗೂ ನೌಷಾದ್ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ ಕೈಗೊಳ್ಳಬೇಕು. ಘಟನೆಯಲ್ಲಿ ನಿಷೇಧಿತ ಪಿಎಫ್‌ಐ ಸಂಘಟನೆಯ ಪಾತ್ರದ ಕುರಿತು ಸಮಗ್ರ ತನಿಖೆ ನಡೆಸಬೇಕು. ಸಾಮಾಜಿಕ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಆಧಾರರಹಿತ ಪ್ರಕರಣ ದಾಖಲಿಸುವುದನ್ನು ನಿಲ್ಲಿಸಬೇಕು. ಪೊಲೀಸ್ ಇಲಾಖೆ ರಾಜಕೀಯ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು.
ಮೋಹನ್‌ದಾಸ್ ಕಾಣಿಯೂರು

LEAVE A REPLY

Please enter your comment!
Please enter your name here