







- ಹೆದ್ದಾರಿ ಇಲಾಖೆ ಅಧಿಕಾರಿಗಳ ಆಗಮನಕ್ಕೆ ಆಗ್ರಹ
ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆ ಹಾಗೂ ಬೆಥನಿ ವಿದ್ಯಾಸಂಸ್ಥೆ ನಡುವೆ ಯು-ಟರ್ನ್ ಕಲ್ಪಿಸುವಂತೆ ಆಗ್ರಹಿಸಿ ಸೆ.9ರಂದು ಬೆಳಗ್ಗೆಯಿಂದ ನೆಲ್ಯಾಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ.



ಈ ಪ್ರತಿಭಟನೆಗೆ ನೆಲ್ಯಾಡಿ ವ್ಯಾಪ್ತಿಯ 51ಕ್ಕೂ ಹೆಚ್ಚು ಸಂಘ-ಸಂಸ್ಥೆಗಳು ಬೆಂಬಲ ಸೂಚಿಸಿದ್ದು ಹೆದ್ದಾರಿ ಇಲಾಖೆ ಅಧಿಕಾರಿಗಳು ಬರುವ ತನಕ ಪ್ರತಿಭಟನೆ ನಡೆಸಲು ನಿರ್ಧಾರ ಮಾಡಲಾಗಿದೆ.




ನೆಲ್ಯಾಡಿ ಸಂತಜಾರ್ಜ್ ಹಾಗೂ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆ ಮಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಯು-ಟರ್ನ್ ಕಲ್ಪಿಸುವಂತೆ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿ ಆರಂಭವಾದ ದಿನದಿಂದಲೇ ಸ್ಥಳೀಯರು ಸಂಸದರಿಗೆ, ಶಾಸಕರಿಗೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ, ಸ್ಥಳೀಯ ಗ್ರಾಮ ಪಂಚಾಯಿತಿ ಹಾಗೂ ಕಾಮಗಾರಿ ಗುತ್ತಿಗೆದಾರರಿಗೆ ಮನವಿ ಸಲ್ಲಿಸಿದ್ದರು. ಆರಂಭದಲ್ಲಿ ಈ ಭಾಗದಲ್ಲಿ ಯು-ಟರ್ನ್ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಲಾಗಿತ್ತು. ಆದರೆ ಇದೀಗ ಕಾಮಗಾರಿ ಅಂತಿಮ ಹಂತ ತಲುಪಿದರೂ ಯು-ಟರ್ನ್ ಕಲ್ಪಿಸದೆ ಕಾಮಗಾರಿ ನಡೆಸುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಭಾಗವು ಸುತ್ತಮುತ್ತಲಿನ ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಪ್ರದೇಶವಾಗಿದೆ. ರಾಜ್ಯ ಹೆದ್ದಾರಿಗೆ ಸಂಪರ್ಕ ಸಾಧಿಸುವ ಮಾರ್ಗವೂ ಇಲ್ಲಿದ್ದು, ಹಲವು ಶಿಕ್ಷಣ ಸಂಸ್ಥೆಗಳು, ಧಾರ್ಮಿಕ ಕೇಂದ್ರಗಳು ಮತ್ತು ಸಾರ್ವಜನಿಕ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಪ್ರತಿನಿತ್ಯ ನೂರಾರು ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು, ಸಾರ್ವಜನಿಕರು ಹಾಗೂ ವಾಹನ ಸವಾರರು ಈ ಮಾರ್ಗವನ್ನು ಬಳಸುತ್ತಿದ್ದಾರೆ. ಇಲ್ಲಿ ಯು-ಟರ್ನ್ ವ್ಯವಸ್ಥೆ ಇಲ್ಲದಿದ್ದರೆ ವಾಹನ ಸವಾರರು ಸುಮಾರು 2 ರಿಂದ 3 ಕಿ.ಮೀ. ಸುತ್ತು ಬಳಸಿ ಪ್ರಯಾಣಿಸಬೇಕಾದ ಅನಿವಾರ್ಯತೆ ಎದುರಾಗಲಿದೆ ಎಂದು ಆರೋಪಿಸಿರುವ ಸಾರ್ವಜನಿಕರು ಯು-ಟರ್ನ್ ಕಲ್ಪಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.










