







ಉಪ್ಪಿನಂಗಡಿ: ಮರದ ಮಿಲ್ಲಿನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ವಿದ್ಯುತ್ ಆಘಾತಕ್ಕೆ ಬಲಿಯಾದ ಘಟನೆ ಬೆಳ್ತಂಗಡಿ ತಾಲೂಕಿನ ಕಣಿಯೂರಿನಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಬಂದಾರು ನಿವಾಸಿ ಲಿಂಗಪ್ಪ ಗೌಡ ಎಂಬವರ ಪುತ್ರ ಜಯಪ್ರಕಾಶ್ (30) ಮೃತ ಕಾರ್ಮಿಕ. ಇವರು ಪದ್ಮುಂಜದಲ್ಲಿರುವ ಮರದ ಮಿಲ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಏಕಾಏಕಿ ವಿದ್ಯುತ್ ಆಘಾತಕ್ಕೊಳಗಾಗಿ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ಇದನ್ನು ಗಮನಿಸಿದ ಸಹ ಕಾರ್ಮಿಕರು ಹಾಗೂ ಸ್ಥಳೀಯರು ತಕ್ಷಣ ಅವರನ್ನು ರಕ್ಷಿಸಿ ಚಿಕಿತ್ಸೆಗಾಗಿ ಬೆಳ್ತಂಗಡಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಆದರೆ, ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಜಯಪ್ರಕಾಶ್ ಅವರ ಸ್ಥಿತಿ ಗಂಭೀರವಾಗಿದ್ದು, ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.


ಮೃತರು ಪತ್ನಿ , ಹಾಗೂ ಎಳೆಯ ವಯಸ್ಸಿನ ಮಗುವೊಂದನ್ನು ಅಗಲಿದ್ದಾರೆ. ಸಾವಿಗೆ ವಿದ್ಯುತ್ ಅವಘಡ ಕಾರಣವೋ ಅಥವಾ ಅನ್ಯ ಕಾರಣವೋ ಎನ್ನುವ ಬಗ್ಗೆ ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕವೇ ಖಚಿತವಾಗಬೇಕಾಗಿದ್ದು,. ಶನಿವಾರದಂದು ಬೆಳಗ್ಗೆ ಮರಣೋತ್ತರ ಪರೀಕ್ಷೆ ನಡೆಸಲು ವೈದ್ಯಾಧಿಕಾರಿಯವರು ತೀರ್ಮಾನಿಸಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ.













