ಕಡಬ ತಾಲೂಕು ಪ್ರಜಾಸೇವಾ ಆಂದೋಲನ

0

ಪ್ರಜಾಸೇವಾ ಆಂದೋಲನದಿಂದ ಜನರ ಸಮಸ್ಯೆಗಳಿಗೆ ಶೀಘ್ರ ಪರಿಹಾರ ದೊರೆಯಲಿ ಕಡಬ ತಾಲೂಕು ಮಾದರಿ ತಾಲೂಕಾಗಬೇಕು: ಶಾಸಕಿ ಭಾಗೀರಥಿ ಮುರುಳ್ಯ

ಕಡಬ: ನಾಗರಿಕರು ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಸರ್ಕಾರಿ ಕಚೇರಿಗಳಿಗೆ ಬಂದಾಗ ಅಧಿಕಾರಿಗಳು ಹಾಗೂ ಸಿಬ್ಬಂದಿ ಲಭ್ಯವಿಲ್ಲದಿರುವುದು, ಸಣ್ಣಪುಟ್ಟ ಕೆಲಸಗಳಿಗೂ ತಿಂಗಳುಗಟ್ಟಲೆ ಕಚೇರಿಗಳಿಗೆ ಅಲೆದಾಡಬೇಕಾಗಿರುವುದು ಸೇರಿದಂತೆ ಹಲವು ಸಮಸ್ಯೆಗಳು ಎದುರಾಗುತ್ತಿವೆ. ಇಂತಹ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಆಯೋಜಿಸಲಾಗಿರುವ ಪ್ರಜಾಸೇವಾ ಆಂದೋಲನ ಯಶಸ್ವಿಯಾಗಬೇಕು ಎಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.


ಅವರು ಹೊಸಮಠ ಕೃಷಿ ಪತ್ತಿನ ಸಹಕಾರ ಸಂಘದ ಸಭಾಭವನದಲ್ಲಿ ನಡೆದ ಕಡಬ ತಾಲೂಕು ಮಟ್ಟದ ಪ್ರಜಾಸೇವಾ ಆಂದೋಲನ ಮಾತನಾಡಿದ ಅವರು, ನಾಗರಿಕರು ತಮ್ಮ ಸಮಸ್ಯೆಗಳನ್ನು ಹೊತ್ತುಕೊಂಡು ಕಚೇರಿಗೆ ಬಂದಾಗ ಸಂಬಂಧಪಟ್ಟ ಅಧಿಕಾರಿಗಳು ಕಚೇರಿಯಲ್ಲಿ ಇಲ್ಲದಿರುವ ಪರಿಸ್ಥಿತಿ ಇರಬಾರದು. ಜನರ ಅರ್ಜಿಗಳು ಸಕಾಲದಲ್ಲಿ ವಿಲೇವಾರಿಯಾಗಬೇಕು. ಒಂದು ಕೆಲಸಕ್ಕಾಗಿ ತಿಂಗಳುಗಟ್ಟಲೆ ಕಾಯುವಂತಹ ಪರಿಸ್ಥಿತಿ ನಿರ್ಮಾಣವಾಗಬಾರದು ಎಂದರು.


ಪ್ರಜಾಸೇವಾ ಆಂದೋಲನದ ಮೂಲಕ ಜನರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ದೊರೆಯಬೇಕು. ಪ್ರಜಾಸೇವಾ ಕಾರ್ಯಕ್ರಮದಿಂದ ನಮ್ಮ ಕೆಲಸ ಆಗುತ್ತದೆ ಎಂಬ ವಿಶ್ವಾಸ ಜನರಲ್ಲಿ ಮೂಡಿಸುವ ರೀತಿಯಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ವಿವಿಧ ಇಲಾಖೆಗಳ ಅಧಿಕಾರಿಗಳು ಒಂದೇ ವೇದಿಕೆಯಲ್ಲಿ ಲಭ್ಯವಿರುವುದರಿಂದ ಜನರು ತಮ್ಮ ಸಮಸ್ಯೆಗಳನ್ನು ನೇರವಾಗಿ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಪಡೆಯಲು ಇದು ಉತ್ತಮ ಅವಕಾಶವಾಗಿದೆ ಎಂದು ಹೇಳಿದರು.


ಕಡಬ ತಾಲೂಕು ರಚನೆಯಾದ ಬಳಿಕವೂ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳ ನೇಮಕಾತಿ ಸೇರಿದಂತೆ ಹಲವು ಆಡಳಿತಾತ್ಮಕ ಸಮಸ್ಯೆಗಳು ಮುಂದುವರಿದಿವೆ. ತಾಲೂಕು ಮಟ್ಟದ ಅಧಿಕಾರಿಗಳ ನೇಮಕಾತಿ ಸಮರ್ಪಕವಾಗಿ ನಡೆದಾಗ ಮಾತ್ರ ಕಡಬ ತಾಲೂಕಿನ ಹಲವು ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದರು.
ಕಡಬ ತಾಲೂಕು ಅಭಿವೃದ್ಧಿಯ ದೃಷ್ಟಿಯಿಂದ ಮಾದರಿ ತಾಲೂಕಾಗಬೇಕು. ಜನರ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ಆದ್ಯತೆಯ ಮೇರೆಗೆ ಪರಿಹಾರ ಕಲ್ಪಿಸುವುದು ಆಡಳಿತದ ಪ್ರಮುಖ ಉದ್ದೇಶವಾಗಬೇಕು. ಅಧಿಕಾರಿಗಳು ಜನಸಾಮಾನ್ಯರೊಂದಿಗೆ ಸ್ಪಂದನಾಶೀಲವಾಗಿ ನಡೆದುಕೊಂಡು, ಸರ್ಕಾರಿ ಯೋಜನೆಗಳು ಹಾಗೂ ಸೇವೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಕ್ರಮ ಕೈಗೊಳ್ಳಬೇಕು ಎಂದು ಶಾಸಕಿ ತಿಳಿಸಿದರು.

ಅಧಿಕಾರಿಗಳನ್ನು ಒಂದೆಡೆ ಸೇರಿಸಿ ಸಮಸ್ಯೆ ಪರಿಹಾರ: ಸುಧೀರ್ ಕುಮಾರ್ ಶೆಟ್ಟಿ
ಪಂಚ ಗ್ಯಾರಂಟಿ ಯೋಜನೆಯ ಕಡಬ ತಾಲೂಕು ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಮಾತನಾಡಿ, ಹಿಂದೆ ಜನರು ತಮ್ಮ ಕೆಲಸಗಳಿಗಾಗಿ ಸಂಬಂಧಪಟ್ಟ ಅಧಿಕಾರಿಗಳ ಕಚೇರಿಗೆ ತೆರಳಿ, ಹಲವು ಬಾರಿ ಭೇಟಿ ನೀಡಿ ಮನವಿ ಮಾಡಬೇಕಾದ ಪರಿಸ್ಥಿತಿ ಇತ್ತು. ಆದರೆ ಇದೀಗ ಸರ್ಕಾರವೇ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಂದೆಡೆ ಸೇರಿಸಿ ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಪ್ರಯತ್ನ ಮಾಡುತ್ತಿದೆ ಎಂದರು.
ಪ್ರಜಾಸೇವಾ ಆಂದೋಲನದ ಮೂಲಕ ಜನರಿಗೆ ನೇರವಾಗಿ ಅಧಿಕಾರಿಗಳನ್ನು ಭೇಟಿಯಾಗಿ ತಮ್ಮ ಸಮಸ್ಯೆಗಳನ್ನು ತಿಳಿಸಲು ಅವಕಾಶ ದೊರೆಯುತ್ತಿದೆ. ವಿಶೇಷವಾಗಿ ಅರಣ್ಯ ಹಾಗೂ ಕಂದಾಯ ಇಲಾಖೆಗೆ ಸಂಬಂಧಿಸಿದ ಹಲವು ಸಮಸ್ಯೆಗಳನ್ನು ಪರಿಹರಿಸಲು ಈ ಕಾರ್ಯಕ್ರಮ ಪರಿಣಾಮಕಾರಿಯಾಗಬೇಕು. ಜನರು ಎದುರಿಸುತ್ತಿರುವ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸಿ, ಸಾಧ್ಯವಾದಷ್ಟು ಶೀಘ್ರವಾಗಿ ಅರ್ಜಿಗಳನ್ನು ವಿಲೇವಾರಿ ಮಾಡುವ ಮೂಲಕ ಕಾರ್ಯಕ್ರಮದ ಉದ್ದೇಶ ಸಾರ್ಥಕಗೊಳಿಸಬೇಕು ಎಂದು ಹೇಳಿದರು.


ಕಾರ್ಯಕ್ರಮದಲ್ಲಿ ಕಡಬ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ತಮನ್ನಾ ಜಬೀನ್, ಕಡಬ ತಹಸೀಲ್ದಾರ್ ಗಣೇಶ್ ಸವಣೂರು, ಹೊಸಮಠ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೃಷ್ಣಪ್ಪ ದೇವಾಡಿಗ ಸನಿಲ ಉಪಸ್ಥಿತರಿದ್ದರು. ಕಡಬ ಉಪತಹಸೀಲ್ದಾರ್ ಗೋಪಾಲ್ ಕೆ. ಸ್ವಾಗತಿಸಿದರು. ಸಭೆಯಲ್ಲಿ ಎಲ್ಲಾ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು. ಸಾರ್ವಜನಿಕರು ತಮ್ಮ ಸಮಸ್ಯೆ ಗಳ ಬಗ್ಗೆ ಅಹವಾಲು ಸಲ್ಲಿಸಿದರು.

LEAVE A REPLY

Please enter your comment!
Please enter your name here