







ಪುತ್ತೂರು:ಕ್ರೀಡಾ ತರಬೇತಿ ಸಂದರ್ಭ ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದಲ್ಲಿ ಪೋಕ್ಸೋ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದ ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋ ಅವರನ್ನು ಕರ್ನಾಟಕ ಹೈಕೋರ್ಟ್ ದೋಷಮುಕ್ತಗೊಳಿಸಿದೆ.


ಫಿಲೋಮಿನಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾಗಿದ್ದ,ಕೊಂಬೆಟ್ಟು ಶ್ರೀ ಮಹಾಲಿಂಗೇಶ್ವರ ಐಟಿಐ ಬಳಿಯ ನಿವಾಸಿ ಎಲಿಯಾಸ್ ಪಿಂಟೋ(55ವ.)ಅವರು 2021ರ ಅ.23ರಂದು ಕ್ರೀಡಾ ತರಬೇತಿ ಸಂದರ್ಭದಲ್ಲಿ ಮಡಿಕೇರಿ ಮೂಲದ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಆರೋಪಿಸಿ ನೀಡಲಾಗಿದ್ದ ದೂರಿನ ಮೇರೆಗೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.ಆರೋಪಿಯನ್ನು ಪೊಲೀಸರು ಬಂಧಿಸಿದ್ದರು.ಬಳಿಕ ನ್ಯಾಯಾಲಯ ಅವರನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಿತ್ತು.ಮಹಿಳಾ ಪೊಲೀಸ್ ಠಾಣೆಯ ಆಗಿನ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ್ ಅವರು ಪ್ರಕರಣದ ತನಿಖೆ ನಡೆಸಿ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.



ಪ್ರಕರಣದ ವಿಚಾರಣೆ ನಡೆಸಿದ್ದ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಪೊಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧಿಶರಾಗಿದ್ದ ಸರಿತಾ ಡಿ.ಅವರು,ಆರೋಪಿ ಎಲಿಯಾಸ್ ಪಿಂಟೋ ತಪ್ಪಿತಸ್ಥ ಎಂದು ತೀರ್ಮಾನಿಸಿ ಪೊಕ್ಸೋ ಕಾಯ್ದೆ ಕಲಂ 10ರಡಿಯ ಅಪರಾಧಕ್ಕೆ 5 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ಮತ್ತು ರೂ.20 ಸಾವಿರ ದಂಡ ವಿಧಿಸಿದ್ದರು.ದಂಡ ತೆರಲು ತಪ್ಪಿದಲ್ಲಿ 6 ತಿಂಗಳ ಸಾದಾ ಶಿಕ್ಷೆ ಅನುಭಿಸುವಂತೆ ನ್ಯಾಯಾಲಯ ಆದೇಶಿಸಿತ್ತು.ಕಲಂ 354(2)ಐಪಿಸಿಯಡಿಯ ಅಪರಾಧಕ್ಕಾಗಿ 3 ವರ್ಷಗಳ ಸಾದಾ ಶಿಕ್ಷೆ ಮತ್ತು ರೂ.10 ಸಾವಿರ ದಂಡ ವಿಽಸಲಾಗಿತ್ತು.ದಂಡ ತೆರಲು ತಪ್ಪಿದಲ್ಲಿ 3 ತಿಂಗಳ ಸಾದಾ ಶಿಕ್ಷೆ ಅನುಭವಿಸಬೇಕು ಎಂದು ಕಳೆದ ಜ.19ರಂದು ತೀರ್ಪು ನೀಡಿತ್ತು.
ಹೈಕೋರ್ಟ್ಗೆ ಮೇಲ್ಮನವಿ:
ಪುತ್ತೂರು ಜಿಲ್ಲಾ ಮತ್ತು ಪೋಕ್ಸೋ ನ್ಯಾಯಾಲಯದ ತೀರ್ಪಿನ ವಿರುದ್ಧ ಎಲಿಯಾಸ್ ಪಿಂಟೋ ಅವರು ಕರ್ನಾಟಕ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.ಕೆಳ ನ್ಯಾಯಾಲಯದ ತೀರ್ಪಿಗೆ ತಡೆ ನೀಡಿ ಹೈಕೋರ್ಟ್ ಮಧ್ಯಂತರ ಆದೇಶ ನೀಡಿತ್ತು. ನ್ಯಾಯಮೂರ್ತಿ ರಾಚಯ್ಯ ಅವರಿದ್ಧ ಏಕಸದಸ್ಯ ಪೀಠ, ಮೇಲ್ಮನವಿಯ ವಿಚಾರಣೆ ಪೂರ್ಣಗೊಳಿಸಿ, ಪುತ್ತೂರು ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ಮತ್ತು ಪೋಕ್ಸೋ ವಿಶೇಷ ನ್ಯಾಯಾಲಯದ ತೀರ್ಪನ್ನು ರದ್ದುಪಡಿಸಿ, ಎಲಿಯಾಸ್ ಪಿಂಟೋ ಅವರನ್ನು ಖುಲಾಸೆಗೊಳಿಸಿದೆ.










