







ಕಡಬ: ನೂಜಿಬಾಳ್ತಿಲ ಗ್ರಾಮದ ಕೈಪನಡ್ಕದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಗಲಾಟೆ ನಡೆಸಿ, ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದ ಮೇರೆಗೆ ನಾಲ್ವರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಅ.3ರಂದು ಸಂಜೆ 5ರಿಂದ 5.30ರ ನಡುವೆ ಘಟನೆ ನಡೆದಿದೆ ಎನ್ನಲಾಗಿದೆ. ಆಂಧ್ರಪ್ರದೇಶದಿಂದ ಎಪಿ 40 ಸಿಎನ್ 5633 ನೋಂದಣಿ ಸಂಖ್ಯೆಯ ಕಾರಿನಲ್ಲಿ ಧರ್ಮಸ್ಥಳದಿಂದ ಬಂದಿದ್ದ ಪ್ರವಾಸಿಗರು ಕೈಪನಡ್ಕದ ರಸ್ತೆ ಬದಿಯಲ್ಲಿರುವ ತೋಟದಲ್ಲಿನ ಅಡಿಕೆ ಹಾಗೂ ತೆಂಗಿನ ಗಿಡಗಳನ್ನು ತೆಗೆಯುತ್ತಿದ್ದರೆನ್ನಲಾಗಿದ್ದು, ಇದನ್ನು ಮೇಹಿ ಜಾರ್ಜ್ ಮತ್ತು ಜಾನ್ಸನ್ ಎಂಬವರು ತಡೆದ ಸಂದರ್ಭದಲ್ಲಿ ಮಾತಿನ ಚಕಮಕಿ ನಡೆದು ಗಲಾಟೆ ಉಂಟಾಗಿದೆ ಎಂದು ಪೊಲೀಸ್ ವರದಿಯಲ್ಲಿ ತಿಳಿಸಲಾಗಿದೆ.



ಘಟನೆಯ ಕುರಿತು ಮಾಹಿತಿ ಪಡೆದ ಕಡಬ ಪೊಲೀಸ್ ಠಾಣೆಯ ಬೀಟ್ ಸಿಬ್ಬಂದಿ ಸ್ಥಳಕ್ಕೆ ತೆರಳಿದಾಗ ನಾಲ್ವರು ಸಾರ್ವಜನಿಕ ರಸ್ತೆಯಲ್ಲಿ ಅವಾಚ್ಯ ಶಬ್ದಗಳಿಂದ ಬೈಯುತ್ತಾ ಗಲಾಟೆ ನಡೆಸುತ್ತಿದ್ದರೆನ್ನಲಾಗಿದೆ. ಇದರಿಂದ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದು, ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಈ ಸಂಬಂಧ ಮೇಹಿ ಜಾರ್ಜ್ (44), ಜಾನ್ಸನ್, ಆಂಧ್ರಪ್ರದೇಶದ ರಾಜಪಲ್ಲಿ ಹರ್ಷವರ್ಧನ (25) ಹಾಗೂ ಕೂಡೂರು ಯೋಗಾನಂದ ಅಲಿಯಾಸ್ ರಾಮಚಂದ್ರ (28) ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ. 117/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 194 ಹಾಗೂ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 92ರಡಿ ಪ್ರಕರಣ ದಾಖಲಾಗಿದೆ. ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.










