







ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನೆ: ಸ್ವಚ್ಛತೆ, ಮೂಲಸೌಕರ್ಯಕ್ಕೆ ಆದ್ಯತೆ ನೀಡಲು ಸೂಚನೆ





ಕಡಬ: ಕರ್ನಾಟಕ ವಿಧಾನ ಪರಿಷತ್ತಿನ ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು ಅವರು ಬುಧವಾರ ಕಡಬ ಪಟ್ಟಣ ಪಂಚಾಯತಿಗೆ ಭೇಟಿ ನೀಡಿ, ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಅಭಿವೃದ್ಧಿ ಯೋಜನೆಗಳ ಅನುಷ್ಠಾನ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿದರು.ಪಟ್ಟಣ ಪಂಚಾಯತ್ ಅಧ್ಯಕ್ಷೆ ತಮನ್ನಾ ಜಬೀನ್, ಉಪಾಧ್ಯಕ್ಷೆ ನೀಲಾವತಿ ಶಿವರಾಮ್, ಸ್ಥಾಯಿ ಸಮಿತಿ ಅಧ್ಯಕ್ಷ ಹಾಜಿ ಹನೀಫ್ ಕೆ.ಎಂ, ಆಡಳಿತ ಮಂಡಳಿ ಸದಸ್ಯರು, ಮುಖ್ಯಾಧಿಕಾರಿ ಲೀಲಾವತಿ .ಇ ಇಂಜಿನಿಯರ್ ಹಾಗೂ ಇತರ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ 15ನೇ ಹಣಕಾಸು ಆಯೋಗದ ಅನುದಾನ, ರಾಜ್ಯ ಹಣಕಾಸು ಆಯೋಗದ ಅನುದಾನ, ಅಮೃತ ನಗರೋತ್ಥಾನ ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಸಾರ್ವಜನಿಕ ಹಾಗೂ ವೈಯಕ್ತಿಕ ಕಾಮಗಾರಿಗಳು, ಡಾ. ಬಿ.ಆರ್. ಅಂಬೇಡ್ಕರ್ ವಸತಿ ಯೋಜನೆ ಸೇರಿದಂತೆ ವಿವಿಧ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಲಾಯಿತು.

ಪಟ್ಟಣ ಪಂಚಾಯತ್ ವ್ಯಾಪ್ತಿಯ ಎಲ್ಲಾ ವಸತಿ ಹಾಗೂ ವಾಣಿಜ್ಯ ಕಟ್ಟಡಗಳಿಂದ ಹಸಿ ಮತ್ತು ಒಣ ಕಸವನ್ನು ಸಮರ್ಪಕವಾಗಿ ಸಂಗ್ರಹಿಸುವುದು, ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವುದು, ಘನತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದು ಹಾಗೂ ಕಟ್ಟಡ ತೆರಿಗೆ ಸೇರಿದಂತೆ ವಿವಿಧ ತೆರಿಗೆಗಳನ್ನು ಸಮರ್ಪಕವಾಗಿ ಸಂಗ್ರಹಿಸುವ ಕುರಿತು ಸಭೆಯಲ್ಲಿ ವಿಶೇಷವಾಗಿ ಚರ್ಚಿಸಲಾಯಿತು.ಸರ್ಕಾರದಿಂದ ಲಭ್ಯವಾಗುವ ಅನುದಾನವನ್ನು ಸಮರ್ಪಕವಾಗಿ ಹಾಗೂ ಪಾರದರ್ಶಕವಾಗಿ ಬಳಸಿಕೊಂಡು ಸಾರ್ವಜನಿಕರಿಗೆ ಗರಿಷ್ಠ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು. ಅಭಿವೃದ್ಧಿ ಕಾಮಗಾರಿಗಳಲ್ಲಿ ಗುಣಮಟ್ಟವನ್ನು ಕಾಪಾಡುವುದರ ಜೊತೆಗೆ, ಸಾರ್ವಜನಿಕರ ಸಮಸ್ಯೆಗಳಿಗೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು ಎಂದು ಕಿಶೋರ್ ಕುಮಾರ್ ಪುತ್ತೂರು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಕಡಬ ಪಟ್ಟಣ ಪಂಚಾಯತಿಗೆ ಸಮಗ್ರ ಕುಡಿಯುವ ನೀರಿನ ಯೋಜನೆ, ನಿವೇಶನ ವಿತರಿಸಲು ಜಮೀನು ಮಂಜೂರಾತಿ, ಖಾಲಿ ಹುದ್ದೆಗಳ ಭರ್ತಿ, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಅನುದಾನ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಪಟ್ಟಣ ಪಂಚಾಯತ್ ಆಡಳಿತ ಮಂಡಳಿಯವರು ಶಾಸಕರಿಗೆ ಮನವಿ ಸಲ್ಲಿಸಿದರು.ಸಭೆಯ ಬಳಿಕ ಶಾಸಕರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಘನತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಘಟಕದ ಕಾರ್ಯನಿರ್ವಹಣೆ, ಕಸ ವಿಂಗಡಣೆ, ಸಂಗ್ರಹಣೆ ಹಾಗೂ ವಿಲೇವಾರಿ ವ್ಯವಸ್ಥೆಯನ್ನು ಪರಿಶೀಲಿಸಿದ ಅವರು, ಘಟಕವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.

“ಸ್ವಚ್ಛತೆ ಮತ್ತು ಮೂಲಭೂತ ಸೌಲಭ್ಯಗಳು ಪ್ರತಿಯೊಬ್ಬ ನಾಗರಿಕನ ಹಕ್ಕು. ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛ, ಸುಂದರ ಹಾಗೂ ಸುಸಜ್ಜಿತ ವಾತಾವರಣ ನಿರ್ಮಾಣಕ್ಕೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು. ಸರ್ಕಾರದ ಯೋಜನೆಗಳ ಪ್ರಯೋಜನ ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು”. ಎಂದು ಕಿಶೋರ್ ಕುಮಾರ್ ಪುತ್ತೂರು ಹೇಳಿದರು.










