ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಮೂಡುಬಿದಿರೆ ಮತ್ತು ಮೂಲ್ಕಿ ಮಧ್ಯಮ ಬರಪೀಡಿತ ಪಟ್ಟಿಗೆ ಸೇರ್ಪಡೆ

0

ಬರಪೀಡಿತ ತಾಲೂಕುಗಳ ಸಂಖ್ಯೆ 226ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಬರದಿಂದ ಉಂಟಾಗಿರುವ ನಷ್ಟದ ಕುರಿತು ಅಂತಿಮ ಮೆಮೊರಾಂಡಮ್ ಸಿದ್ಧಪಡಿಸಲಾಗುತ್ತಿದ್ದು, ಬಹುಶಃ ಇನ್ನೊಂದು ವಾರದಲ್ಲಿ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ. ಜಿ. ಪರಮೇಶ್ವರ ತಿಳಿಸಿದರು.

ರಾಜ್ಯದಲ್ಲಿ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಹಾಗೂ ಸಂಕಷ್ಟದಲ್ಲಿರುವ ರೈತರ ಹಿತ ಕಾಪಾಡಲು ನಮ್ಮ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈಗಾಗಲೇ 217 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದೆವು. ಇದೀಗ ವೈಜ್ಞಾನಿಕ ಮೌಲ್ಯಮಾಪನ ಹಾಗೂ ಸ್ಥಳ ಪರಿಶೀಲನೆಯ ಆಧಾರದಲ್ಲಿ ಹೊಸದಾಗಿ 9 ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಿಸಿ ಆದೇಶ ಹೊರಡಿಸಿದ್ದೇವೆ. ಇದರೊಂದಿಗೆ ರಾಜ್ಯದಲ್ಲಿ ಬರಪೀಡಿತ ತಾಲ್ಲೂಕುಗಳ ಸಂಖ್ಯೆ 226ಕ್ಕೆ ಏರಿಕೆಯಾಗಿದೆ.

ಹೊಸದಾಗಿ ಘೋಷಿಸಲಾದ ತಾಲ್ಲೂಕುಗಳಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತೀವ್ರ ಬರಪೀಡಿತವಾಗಿದ್ದು, ಬೆಳಗಾವಿ ಜಿಲ್ಲೆಯ ಖಾನಾಪುರ, ಶಿವಮೊಗ್ಗ ಜಿಲ್ಲೆಯ ಹೊಸನಗರ ಮತ್ತು ಸಾಗರ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಮೂಡುಬಿದಿರೆ ಮತ್ತು ಮೂಲ್ಕಿ, ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ಮತ್ತು ದಾಂಡೇಲಿ ಸೇರಿದಂತೆ 8 ತಾಲ್ಲೂಕುಗಳು ಮಧ್ಯಮ ಬರಪೀಡಿತವಾಗಿವೆ.

ಇನ್ನುಳಿದ ತಾಲೂಕುಗಳಲ್ಲೂ ಬರ ಪರಿಸ್ಥಿತಿಯ ಮೇಲ್ವಿಚಾರಣೆ ಮುಂದುವರಿಯಲಿದ್ದು, ಮಾನದಂಡಗಳಿಗೆ ಒಳಪಟ್ಟಲ್ಲಿ ಮುಂದಿನ ಹಂತದಲ್ಲಿ ಹೆಚ್ಚುವರಿ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಲಾಗುವುದು. ಬರದಿಂದ ರೈತರ ಜೀವನೋಪಾಯಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳುವುದು, ಬೆಳೆಹಾನಿಗೆ ಸೂಕ್ತ ಪರಿಹಾರ ಒದಗಿಸುವುದು ಹಾಗೂ ಗ್ರಾಮೀಣ ಜನರ ಹಿತ ಕಾಯುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆಈ ತಾಲೂಕುಗಳಲ್ಲಿ ಗ್ರೌಂಡ್ ಟ್ರೂಥಿಂಗ್ ಪ್ರಕ್ರಿಯೆ ಪೂರ್ಣಗೊಂಡಿದೆ. ಇನ್ನುಳಿದ ಕೆಲವು ತಾಲೂಕುಗಳಲ್ಲಿ ಟ್ರಿಗರ್-1 ಮಾನದಂಡಗಳ ಪರಿಶೀಲನೆ ನಡೆಯುತ್ತಿದೆ. ಅವುಗಳು ಅರ್ಹತೆ ಪಡೆದರೆ ಗ್ರೌಂಡ್ ಟ್ರೂಥಿಂಗ್‌ಗೆ ಕಳುಹಿಸಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ ಬರದಿಂದ ಉಂಟಾಗಿರುವ ಒಟ್ಟು ನಷ್ಟದ ಅಂದಾಜು ಅಂತಿಮ ಮೆಮೊರಾಂಡಮ್ ಸಿದ್ಧಪಡಿಸುವ ಸಂದರ್ಭದಲ್ಲಿ ಸ್ಪಷ್ಟವಾಗಲಿದೆ. ಅದರ ಪ್ರಮಾಣಕ್ಕೆ ಅನುಗುಣವಾಗಿ ಎನ್‌ಡಿಆರ್‌ಎಫ್ (NDRF) ಮಾರ್ಗಸೂಚಿಗಳ ಪ್ರಕಾರ ಪರಿಹಾರದ ಮೊತ್ತವನ್ನು ಲೆಕ್ಕಹಾಕಲಾಗುವುದು. ಕಳೆದ ವರ್ಷ ಸುಮಾರು ₹18,000 ಕೋಟಿ ಪರಿಹಾರ ಕೋರಲಾಗಿತ್ತು. ಈ ಬಾರಿ ಇಡೀ ರಾಜ್ಯದಲ್ಲಿ ನಷ್ಟ ಸಂಭವಿಸಿದ್ದು, ಈಗಾಗಲೇ 226 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸುವ ಹಂತ ತಲುಪಿದ್ದೇವೆ. ಇನ್ನಷ್ಟು ತಾಲೂಕುಗಳು ಅರ್ಹತೆ ಪಡೆದರೆ ನಷ್ಟದ ಪ್ರಮಾಣ ಮತ್ತಷ್ಟು ಹೆಚ್ಚಾಗಲಿದೆ. ಹೀಗಾಗಿ, ಈ ಬಾರಿ ಕೇಂದ್ರದಿಂದ ಕೋರಲಾಗುವ ಪರಿಹಾರದ ಮೊತ್ತವೂ ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಿಳಿಸಿದರು.

ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಎನ್‌ಡಿಆರ್‌ಎಫ್ ಮಾರ್ಗಸೂಚಿಗಳನ್ನು ಸಡಿಲಗೊಳಿಸುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಸಲ್ಲಿಸಿದೆ. ಈ ಕುರಿತು ನಾನು ಮತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪತ್ರ ಬರೆದಿದ್ದೇವೆ. ಇದಕ್ಕೆ ಸಂಬಂಧಿಸಿದಂತೆ ನನಗೆ ಕೇಂದ್ರ ಕೃಷಿ ಸಚಿವರಿಂದ ಪತ್ರ ಬಂದಿದ್ದು, ವಿಷಯವನ್ನು ಪರಿಶೀಲಿಸುವುದಾಗಿ ತಿಳಿಸಿದ್ದಾರೆ. ಇದನ್ನು ಹೊರತುಪಡಿಸಿ ಕೇಂದ್ರದಿಂದ ಬೇರೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಹೇಳಿದರು.

ಅಂತಿಮ ಮೆಮೊರಾಂಡಮ್ ಸಿದ್ಧವಾದ ಬಳಿಕ ಮುಖ್ಯಮಂತ್ರಿ, ನಾನು ಹಾಗೂ ಇತರರನ್ನು ಒಳಗೊಂಡ ನಿಯೋಗ ದೆಹಲಿ ಭೇಟಿಯ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ನಿಯೋಗವು ಖುದ್ದಾಗಿ ದೆಹಲಿಗೆ ತೆರಳಿ ಕೇಂದ್ರ ಸರ್ಕಾರಕ್ಕೆ ಮೆಮೊರಾಂಡಮ್ ಸಲ್ಲಿಸಲಿದೆ. ನಷ್ಟದ ವಿವರವನ್ನು ಪ್ರಸ್ತಾಪಿಸಿ ಪರಿಹಾರಕ್ಕೆ ಕೋರಲಾಗುವುದು ಎಂದು ತಿಳಿಸಿದರು.

LEAVE A REPLY

Please enter your comment!
Please enter your name here