ಪುತ್ತೂರು ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ 

0

ಮಹಿಳೆಯರ ಸಬಲೀಕರಣಕ್ಕೆ ಜ್ಞಾನವಿಕಾಸ ಕಾರ್ಯಕ್ರಮ ಪೂರಕ: ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್  ಪುತ್ತೂರು ತಾಲೂಕು ವತಿಯಿಂದ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿಯನ್ನು ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಆಯೋಜಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘ, ಪುತ್ತೂರು ಇದರ ಅಧ್ಯಕ್ಷೆ  ಗೌರಿ ಬನ್ನೂರು ವಹಿಸಿದ್ದರು. ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಅವರು ದೀಪ ಬೆಳಗಿಸಿ, ಕಲ್ಪವೃಕ್ಷಕ್ಕೆ ಹಾಲೆರೆಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಶಾಸಕ ರೈ, ಗ್ರಾಮಾಭಿವೃದ್ಧಿ ಯೋಜನೆಯು ಸಮಾಜಕ್ಕೆ ಪೂರಕವಾದ ಹಾಗೂ ಅರ್ಥಪೂರ್ಣವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಮಹಿಳೆಯರನ್ನು ಬಲಿಷ್ಠರನ್ನಾಗಿ ಮಾಡುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ ಎಂದರು. ಮನೆಯ ರಥವನ್ನು ಮುನ್ನಡೆಸುವ ಮಹಿಳೆಯೇ ಸಮಾಜದಲ್ಲಿ ಬದಲಾವಣೆಯನ್ನು ತರಬಲ್ಲಳು. ಮಹಿಳೆಯರು ಅತ್ಯಂತ ಶಕ್ತಿವಂತರಾಗಿದ್ದು, ಅನೇಕರು ತಮ್ಮ ಕುಟುಂಬಗಳನ್ನು ಸ್ವತಃ ಮುನ್ನಡೆಸುತ್ತಿದ್ದಾರೆ. ಮಹಿಳೆಯರ ಕೌಶಲ್ಯಾಭಿವೃದ್ಧಿ ಹಾಗೂ ಆಸಕ್ತಿಗೆ ಅನುಗುಣವಾಗಿ ಜ್ಞಾನವಿಕಾಸ ಕಾರ್ಯಕ್ರಮವು ಉತ್ತಮ ವೇದಿಕೆಯನ್ನು ಒದಗಿಸಿದೆ. ಇಂತಹ ಅರ್ಥಪೂರ್ಣ ಕಾರ್ಯಕ್ರಮಗಳು ಮುಂದೆಯೂ ನಿರಂತರವಾಗಿ ನಡೆಯಲಿ ಎಂದು ಶುಭ ಹಾರೈಸಿದರು.

ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಯೋಜನೆಯ ಕೊಡುಗೆ
ತಾಲೂಕು ಯೋಜನಾಧಿಕಾರಿ ಶಶಿಧರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಜ್ಞಾನವಿಕಾಸ ಕಾರ್ಯಕ್ರಮಗಳ ಮೂಲಕ ನಡೆಯುತ್ತಿರುವ ವಿವಿಧ ಸಮಾಜಮುಖಿ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ಮಹಿಳೆಯರು ಆರ್ಥಿಕವಾಗಿ, ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಿ ಸ್ವಾವಲಂಬಿಗಳಾಗುವಲ್ಲಿ ಯೋಜನೆಯು ನೆರವಾಗಿದೆ. ಸ್ವಸಹಾಯ ಸಂಘಗಳು, ಪ್ರಗತಿನಿಧಿ ವ್ಯವಹಾರಗಳ ಲೆಕ್ಕಾಚಾರ, ಮಹಿಳೆಯರ ಆಸಕ್ತಿಗೆ ಅನುಗುಣವಾಗಿ ಅವಕಾಶ ಕಲ್ಪಿಸುವುದು ಹಾಗೂ ಸ್ವಉದ್ಯೋಗಕ್ಕೆ ಪ್ರೋತ್ಸಾಹ ನೀಡುವಂತಹ ಕಾರ್ಯಗಳು ಮಹಿಳೆಯರ ಬದುಕಿನಲ್ಲಿ ಸಕಾರಾತ್ಮಕ ಬದಲಾವಣೆ ತರುತ್ತಿವೆ ಎಂದರು. ಜ್ಞಾನವಿಕಾಸ ಕೇಂದ್ರಗಳ ಸಭೆಗಳನ್ನು ಮುಂದೆಯೂ ಉತ್ತಮ ರೀತಿಯಲ್ಲಿ ಮುಂದುವರಿಸಿಕೊಂಡು ಹೋಗುವಂತೆ ಹಾರೈಸಿದರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ ಮಾತನಾಡಿ, ಗ್ರಾಮಾಭಿವೃದ್ಧಿ ಯೋಜನೆಯು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಜನಪರ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು, ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿಸಿ ಸ್ವಾವಲಂಬಿ ಜೀವನ ನಡೆಸಲು ಪ್ರೇರೇಪಿಸುತ್ತಿದೆ ಎಂದರು. ಮಹಿಳೆಯರ ಒಗ್ಗಟ್ಟು ಹಾಗೂ ಅವರಲ್ಲಿರುವ ಪ್ರತಿಭೆಗಳನ್ನು ಅನಾವರಣಗೊಳಿಸಲು ಇಂತಹ ವಿಚಾರಗೋಷ್ಠಿಗಳು ಉತ್ತಮ ವೇದಿಕೆಯಾಗಿವೆ ಎಂದು ತಿಳಿಸಿದರು.

ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ್ ಭಟ್ ಪಂಜಿಗುಡ್ಡೆ ಮಾತನಾಡಿ, ಗ್ರಾಮಾಭಿವೃದ್ಧಿ ಯೋಜನೆಯು ಕುಟುಂಬಗಳನ್ನು ಉಳಿಸಿ ಬೆಳೆಸುವ ಕಾರ್ಯದಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ಮಹಿಳೆಯರಲ್ಲಿ ಆತ್ಮಸ್ಥೈರ್ಯವನ್ನು ಹೆಚ್ಚಿಸಿ, ಕುಟುಂಬದ ಸರ್ವತೋಮುಖ ಅಭಿವೃದ್ಧಿಗೆ ನೆರವಾಗುತ್ತಿದೆ. ಕಾರ್ಯಕ್ರಮದಲ್ಲಿ ಮಹಿಳೆಯರು ಪ್ರದರ್ಶಿಸಿದ ಶಿಸ್ತು ಮತ್ತು ಸಂಘಟನಾ ಸಾಮರ್ಥ್ಯ ಶ್ಲಾಘನೀಯವಾಗಿದ್ದು, ಮುಂದೆಯೂ ಇಂತಹ ಕಾರ್ಯಕ್ರಮಗಳನ್ನು ದೇವಸ್ಥಾನದ ಸಭಾಂಗಣದಲ್ಲಿ ಆಯೋಜಿಸುವಂತಾಗಲಿ ಎಂದು ಹಾರೈಸಿದರು.

ಸುಸಂಸ್ಕೃತ ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಪಾತ್ರದ ಕುರಿತು ವಿಚಾರಗೋಷ್ಠಿ
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಸಮೂಹ ಸಂಪನ್ಮೂಲ ವ್ಯಕ್ತಿ  ಪರಮೇಶ್ವರಿ ಪ್ರಸಾದ್ ಅವರು ‘ಸಂಸ್ಕಾರಯುತ ಸಮಾಜ ನಿರ್ಮಾಣದಲ್ಲಿ ಪ್ರಜ್ಞಾವಂತ ಮಹಿಳೆಯರ ಕೊಡುಗೆ’ ಎಂಬ ವಿಷಯದ ಕುರಿತು ವಿಚಾರಗೋಷ್ಠಿ ನಡೆಸಿಕೊಟ್ಟರು.

ಮಹಿಳೆಯರ ಜೀವನದಲ್ಲಿ ಸಂಸ್ಕೃತಿ ಮತ್ತು ಸಂಸ್ಕಾರಗಳ ಮಹತ್ವವನ್ನು ವಿವರಿಸಿದ ಅವರು, ಕುಟುಂಬವನ್ನು ಉತ್ತಮ ರೀತಿಯಲ್ಲಿ ಮುನ್ನಡೆಸಲು ಸಂಸ್ಕಾರ ಅತ್ಯಗತ್ಯವಾಗಿದೆ ಎಂದರು. ವ್ಯಕ್ತಿಯ ವ್ಯಕ್ತಿತ್ವವನ್ನು ಆತನ ಸಂಸ್ಕಾರದಿಂದ ಗುರುತಿಸಲಾಗುತ್ತದೆ. ಸುಸಂಸ್ಕೃತ ಸಮಾಜದ ನಿರ್ಮಾಣದಲ್ಲಿ ಮಹಿಳೆಯರು ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ ಮತ್ತು ಸಾಮರ್ಥ್ಯವನ್ನು ಬಳಸಿ ಅನೇಕ ಸಾಧನೆಗಳನ್ನು ಮಾಡಿದ್ದಾರೆ. ಮಕ್ಕಳಿಗೆ ಹಾಗೂ ಯುವಪೀಳಿಗೆಗೆ ಉತ್ತಮ ಮೌಲ್ಯಗಳನ್ನು ಕಲಿಸುವುದರ ಜೊತೆಗೆ ಜವಾಬ್ದಾರಿಯುತ ನಾಗರಿಕರನ್ನಾಗಿ ರೂಪಿಸುವ ಹೊಣೆಗಾರಿಕೆಯೂ ಮಹಿಳೆಯರ ಮೇಲಿದೆ ಎಂದು ಸಂವಾದದ ಮೂಲಕ ಮಾಹಿತಿ ನೀಡಿದರು.

ವಿವಿಧ ಸ್ಪರ್ಧೆಗಳು, ಸಾಂಸ್ಕೃತಿಕ ಕಾರ್ಯಕ್ರಮ
ವಿಚಾರಗೋಷ್ಠಿಯ ಅಂಗವಾಗಿ ರಂಗೋಲಿ ಸ್ಪರ್ಧೆ, ಪುಷ್ಪಗುಚ್ಛ ಸ್ಪರ್ಧೆ, ಛದ್ಮವೇಷ ಸ್ಪರ್ಧೆ, ಸ್ವಉದ್ಯೋಗ ಮಳಿಗೆಗಳು ಹಾಗೂ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಮಹಿಳಾ ಸದಸ್ಯರು ಉತ್ಸಾಹದಿಂದ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿ ಅಭಿನಂದಿಸಲಾಯಿತು.

ಇದೇ ಸಂದರ್ಭದಲ್ಲಿ ಸುಜ್ಞಾನನಿಧಿ ವಿದ್ಯಾರ್ಥಿವೇತನದ ಮಂಜೂರಾತಿ ಪತ್ರಗಳು ಹಾಗೂ ಸುರಕ್ಷಾ ಕ್ಲೇಮ್ ಮಂಜೂರಾತಿ ಪತ್ರಗಳನ್ನು ವಿತರಿಸಲಾಯಿತು. ಕೇಂದ್ರದ ಹಿರಿಯ ಸಕ್ರಿಯ ಸದಸ್ಯರನ್ನು ಗುರುತಿಸಿ ಗೌರವಿಸಲಾಯಿತು. ಅಲ್ಲದೆ, ‘ನೇಸರ’ ಎಂಬ ನೂತನ ಜ್ಞಾನವಿಕಾಸ ಕೇಂದ್ರದ ದಾಖಲಾತಿಯನ್ನು ಹಸ್ತಾಂತರಿಸಲಾಯಿತು. ಕೇಂದ್ರದ ಸದಸ್ಯರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

ಗಣ್ಯರ ಉಪಸ್ಥಿತಿ
ಕಾರ್ಯಕ್ರಮದಲ್ಲಿ ಪುತ್ತೂರು ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಸತೀಶ್ ನಾಯ್ಕ, ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಮಹಾಬಲ ರೈ ವಳತಡ್ಕ, ವಲಯದ ಮೇಲ್ವಿಚಾರಕರು, ಒಕ್ಕೂಟದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ತಾಲೂಕಿನ ಜ್ಞಾನವಿಕಾಸ ಸೇವಾಪ್ರತಿನಿಧಿಗಳು ಮತ್ತು ವಿವಿಧ ಜ್ಞಾನವಿಕಾಸ ಕೇಂದ್ರಗಳ ಸದಸ್ಯರು ಉಪಸ್ಥಿತರಿದ್ದರು.

ಜ್ಞಾನವಿಕಾಸ ಸಮನ್ವಯಾಧಿಕಾರಿ ಕಾವ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು. ಕೃಷಿ ಮೇಲ್ವಿಚಾರಕ ಹರೀಶ್ ಸ್ವಾಗತಿಸಿದರು. ಸೇವಾಪ್ರತಿನಿಧಿ ತ್ರಿವೇಣಿ ವಂದಿಸಿದರು.

LEAVE A REPLY

Please enter your comment!
Please enter your name here