ರಾಮಕುಂಜ: ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ ಜೂ.15ರಂದು ನಡೆಯಿತು.
ಮೆಸ್ಕಾಂ ಉದ್ಯೋಗಿ ಕೃಷ್ಣಮೂರ್ತಿ ಕೆಮ್ಮಾರರವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಪಠ್ಯ ಹಾಗೂ ಪಠ್ಯೇತರ ವಿಷಯಗಳ ಜೊತೆಗೆ ಸಾಮಾಜಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಮತ್ತು ಇಂದಿನ ಸ್ಪರ್ಧಾತ್ಮಕ ಯುಗಕ್ಕೆ ವಿದ್ಯಾರ್ಥಿ ದೆಸೆಯಲ್ಲೇ ತಯಾರಾಗಬೇಕು. ವಿವಿಧ ಸಂಘಗಳಲ್ಲಿ ಪಾಲ್ಗೊಳ್ಳುವುದರಿಂದ ಇದೆಲ್ಲಾ ಸಾಧ್ಯ ಎಂದು ಹೇಳಿದರು. ದೈಹಿಕ ಶಿಕ್ಷಣ ಶಿಕ್ಷಕ ವಿಶ್ವನಾಥರವರು ಟೇಬಲ್ ಟೆನಿಸ್ ಅಂಕಣವನ್ನು ಉದ್ಘಾಟಿಸಿ ಶುಭಹಾರೈಸಿದರು. ಶಾಲಾ ಮುಖ್ಯಗುರು ಸತೀಶ್ ಭಟ್ರವರು ಸಭೆಯ ಅಧ್ಯಕ್ಷತೆ ವಹಿಸಿ, ಶಾಲಾ ಮಂತ್ರಿಮಂಡಲದ ವಿವಿಧ ಮಂತ್ರಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಶಾಲಾ ಶಿಕ್ಷಕ ಬಾಲಚಂದ್ರ ಮುಚ್ಚಿಂತಾಯ ಸ್ವಾಗತಿಸಿದರು. ಶಿಕ್ಷಕ ಪ್ರವೀಣ್ ಕುಮಾರ್ರವರು ಪ್ರಾಸ್ತಾವಿಕವಾಗಿ ಮಾತನಾಡಿ ವಿವಿಧ ಸಂಘಗಳ ಪರಿಚಯ ಮಾಡಿದರು. ವಿದ್ಯಾರ್ಥಿನಿ ಮಯೂರಿ ಮತ್ತು ತಂಡದವರು ಪ್ರಾರ್ಥಿಸಿದರು. ಶಿಕ್ಷಕಿ ಮಲ್ಲಿಕಾರವರು ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ನಿಶ್ಚಿತ.ಎಮ್.ಜಿ. ವಂದಿಸಿದರು. ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.